ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತರ ಕುಟುಂಬಕ್ಕೆ ‌ತಲಾ ₹10 ಲಕ್ಷ ಪರಿಹಾರ

ರಥೋತ್ಸವ ದುರಂತ: ಪ್ರತಿಭಟನಕಾರರಿಗೆ ಭರವಸೆ ನೀಡಿದ ಸಚಿವ ಸೋಮಣ್ಣ
Last Updated 16 ಮೇ 2022, 16:03 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಸ್ಕಂದಗಿರಿಯಲ್ಲಿ (ಪಾರ್ವತಿ ಬೆಟ್ಟ) ಭಾನುವಾರ ರಥೋತ್ಸವದ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಮೃತ ಪಟ್ಟ ಸರ್ಪಭೂಷಣ್‌ ಹಾಗೂ ಸ್ವಾಮಿ ಅವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡುವ ಭರವಸೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ನೀಡಿದ್ದಾರೆ.

ಭಾನುವಾರ ರಾತ್ರಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರಿಹಾರ ಘೋಷಿಸುವವರೆಗೆ ಶವವನ್ನು ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದ ರೈತರು ಹಾಗೂ ಗ್ರಾಮಸ್ಥರೊಂದಿಗೆ ದೂರವಾಣಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದ್ದಾರೆ.

‘ತಲಾ ₹5 ಲಕ್ಷವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ ಉಳಿದ ತಲಾ ₹5 ಲಕ್ಷವನ್ನು ಮುಜರಾಯಿ ಇಲಾಖೆಯಿಂದ ಕೊಡಿಸುವುದಾಗಿ ಸಚಿವ ಸೋಮಣ್ಣ ಅವರು ಹೇಳಿದ್ದಾರೆ. ಮೂವರು ಗಾಯಾಳುಗಳಿ ವೈಯಕ್ತಿಕವಾಗಿ ಪರಿಹಾರ ನೀಡುವ ಭರವಸೆಯನ್ನೂ ನೀಡಿದ್ದಾರೆ’ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಮುಖಂಡ ಕಬ್ಬಹಳ್ಳಿ ಮಹೇಶ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಜಿಲ್ಲಾಧಿಕಾರಿ ಭೇಟಿ: ಭಾನುವಾರ ತಡ ರಾತ್ರಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರು ಭೇಟಿ ನೀಡಿ ಮನವೊಲಿಸಲು ಯತ್ನಿಸಿದರು. ಮೃತಪಟ್ಟವರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಣೆ ಮಾಡುವುದಾಗಿ ಹೇಳಿದರು. ಇದಕ್ಕೆ ಒಪ್ಪದ ಪ್ರತಿಭಟನಕಾರರು, ಜಿಲ್ಲಾ ಉಸ್ತುವಾರಿ ಸಚಿವರೇ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಾಗ, ಸೋಮಣ್ಣ ಅವರು ಜಿಲ್ಲಾಧಿಕಾರಿ ಅವರೊಂದಿಗೆ ಫೋನಿನಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪರಿಹಾರದ ಭರವಸೆಯನ್ನು ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕ್ಯಾತ್ಯಾಯಿನಿದೇವಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌.ಸುಂದರ್‌ರಾಜ್‌, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಇದ್ದರು.

ಪೊಲೀಸರ ವೈಫಲ್ಯ: ‘ಪೊಲೀಸರು ಸೂಕ್ತ ರೀತಿಯಲ್ಲಿ ಬಂದೋಬಸ್ತ್ ಮಾಡಬೇಕಿತ್ತು. ಹೆಚ್ಚಿನ ಪೊಲೀಸರು ಇದ್ದರೆ ಜನರು ನಿಯಂತ್ರಣವಾಗುತ್ತಿದ್ದರು. ಬೆರಳೆಣಿಕೆಯಷ್ಟು ಪೊಲೀಸರನ್ನು ಮಾತ್ರ ನಿಯೋಜಿಸಲಾಗಿತ್ತು. ರಥೋತ್ಸವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಯಾರೂ ಸೂಚನೆ ನೀಡುತ್ತಿರಲಿಲ್ಲ. ದುರ್ಘಟನೆಯ ಹೊಣೆಯನ್ನು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಜವಾಬ್ದಾರಿ ಹೊರಬೇಕು’ ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಒತ್ತಾಯಿಸಿದರು.

ಭದ್ರತೆಗೆ ಪತ್ರ: ಕೇಳಿ ಬಂದಿರುವ ಆರೋಪಗಳ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ತಹಶೀಲ್ದಾರ್‌ ಸಿ.ಜೆ.ರವಿಶಂಕರ್‌ ಅವರು, ‘ಜಾತ್ರೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಏ.30 ರಂದು ಪೂರ್ವಭಾವಿ ಸಭೆ ನಡೆಸಿ ಎಲ್ಲಾ ಇಲಾಖೆಗೆ ತಿಳಿಸಲಾಗಿತ್ತು. ಜೊತೆಗೆ ಪೊಲೀಸ್ ಇಲಾಖೆಗೂ ಸಹ ಪತ್ರ ಬರೆಯಲಾಗಿತ್ತು’ ಎಂದರು.

22 ರಂದು ಸಚಿವರ ಭೇಟಿ

ಈ ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಇದೇ 22ರಂದು ದುರ್ಘಟನೆಯಲ್ಲಿ ಮೃತಪಟ್ಟ ಇಬ್ಬರ ಮನೆಗೂ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಮೇ 22ರಂದು ನಗರದ ವಿರಕ್ತ ಮಠದ ಆವರಣದಲ್ಲಿ ನಿರ್ಮಿಸಲಾಗಿರುವ ಬಸವ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬಳ್ಳಿಯಲ್ಲಿ ಸ್ವಾಮಿ ಅವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುವರು.

ಸಂಜೆ 6.15 ಗಂಟೆಗೆ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲದಲ್ಲಿ ಸರ್ಪಭೂಷಣ್‌ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT