ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ಯುವಕರಿಗೆ ಆದ್ಯತೆ ನೀಡಿ–ಧ್ರುವನಾರಾಯಣ

ಒಂದು ಲಕ್ಷ ಸದಸ್ಯರ ಸೇರ್ಪಡೆ ಗುರಿ
Last Updated 19 ನವೆಂಬರ್ 2021, 2:08 IST
ಅಕ್ಷರ ಗಾತ್ರ

ಚಾಮರಾಜನಗರ: ‘ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಯುವಕ, ಯುವತಿಯರಿಗೆ ಹೆಚ್ಚಿನ ಆದ್ಯತೆ ನೀಡಿ, ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಗುರುವಾರ ಇಲ್ಲಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ನಡೆದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ದ ಜನರು ಭ್ರಮ ನಿರಸನಗೊಂಡಿದ್ದಾರೆ. ಇಂಧನ ದರ ಏರಿಕೆ, ಗ್ಯಾಸ್ ಸಿಲಿಂಡರ್ ಸೇರಿದಂತೆ ಎಲ್ಲ ವಸ್ತುಗಳ ದರ ಏರಿಕೆ ಮಾಡಿರುವುದರಿಂದ ಜನರ ಜೀವನ ತುಂಬಾ ಕಷ್ಟವಾಗಿದೆ. ಹೀಗಾಗಿ ಮತದಾರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿಯೂ ಕಾರ್ಯಕರ್ತರ ಪಡೆಯನ್ನು ಹೊಂದಿ, ಯಾವಾಗ ಚುನಾವಣೆ ಬಂದರೂ ಎದುರಿಸಲು ಸಿದ್ಧರಾಗಿರಬೇಕು’ ಎಂದರು.

‘ಶನಿವಾರದಿಂದ (ನ.19) ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಪ್ರತಿ ಬೂತ್ ಮಟ್ಟದಲ್ಲಿಯೂ ನಡೆಯಲಿದೆ. ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು ಮಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 25 ಸಾವಿರ ಮಂದಿಯಿಂದ ಸದಸ್ಯತ್ವ ಪಡೆದುಕೊಳ್ಳಬೇಕು’ ಎಂದರು.

‘ಈ ಅಭಿಯಾನ 2022ರ ಮಾರ್ಚ್‌ 31ರವರೆಗೆ ನಡೆಯಲಿದ್ದು, ದೇಶದಾದ್ಯಂತ ಏಕಕಾಲದಲ್ಲಿ ಎಲ್ಲ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಕಾಂಗ್ರೆಸ್ ಸದಸ್ಯತ್ವಕ್ಕಾಗಿ ₹ 5 ಶುಲ್ಕ ನಿಗದಿಪಡಿಸಿದ್ದು, ಪ್ರತಿಯೊಬ್ಬರನ್ನು ಸದಸ್ಯರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್ ಶಕ್ತಿಯನ್ನು ಹೆಚ್ಚಿಸಬೇಕು. ಈ ಸದಸ್ಯತ್ವದ ಮೂಲಕವೇ ಮುಂದಿನ ದಿನಗಳಲ್ಲಿ ಪಕ್ಷದ ವಿವಿಧ ಸಮಿತಿಯ ಚುನಾವಣೆಗಳು ಹಾಗೂ ಪಕ್ಷದ ವೇದಿಕೆಯಲ್ಲಿ ಸ್ಥಾನಮಾನ ಕಲ್ಪಿಸುವ ಮಾನದಂಡವಾಗಿರಲಿದೆ. ಹೀಗಾಗಿ ಎಲ್ಲರೂ ಪಡೆದುಕೊಳ್ಳಬೇಕು’ ಎಂದು ಹೇಳಿದರು.

‘ಇದೇ 29ರಂದು ಕಾಂಗ್ರೆಸ್‌ನಿಂದ ಜನ ಜಾಗೃತಿ ಯಾತ್ರೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ನಡೆಯುವ ಈ ಜನ ಜಾಗೃತಿ ಸಮಾವೇಶಕ್ಕೆ ಕನಿಷ್ಠ 10 ಸಾವಿರ ಮಂದಿ ಸೇರಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಹೆಚ್ಚಿನ ಜನರು ಭಾಗವಹಿಸಲು ಪಕ್ಷದ ಕಾರ್ಯಕರ್ತರ ಶ್ರಮಿಸಬೇಕು’ ಎಂದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಆರ್.ನರೇಂದ್ರ ಮಾತನಾಡಿ, ‘ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದೇ ರೀತಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಮೈಸೂರು–ಚಾಮರಾಜನಗರ ಜಿಲ್ಲೆಯ ವಿಧಾನ ಪರಿಷತ್‌ಗೆ ಪಕ್ಷದಿಂದ ಇಬ್ಬರನ್ನು ಕಣಕ್ಕಿಳಿಸುವ ಮೂಲಕ ಗೆಲುವು ಸಾಧಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖಂಡರಾದ ಎಸ್.ಜಯಣ್ಣ, ಬಾಲರಾಜು, ಗಣೇಶ್‌ಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ ಮಾತನಾಡಿದರು.

ಕಾಂಗ್ರೆಸ್‌ ಜಿಲ್ಲಾ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ, ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್, ಹೊಂಗನೂರು ಚಂದ್ರು, ತೋಟೇಶ್, ಮುನಿರಾಜು, ಈಶ್ವರ್, ರಾಜಶೇಖರ್ ಹಾಜರಿದ್ದರು.

29ರಂದು ಕಾಂಗ್ರೆಸ್‌ ಜನ ಜಾಗೃತಿ ಸಭೆ

‘ನಗರದಲ್ಲಿ ಇದೇ 29ರಂದು ಕಾಂಗ್ರೆಸ್ ಜನ ಜಾಗೃತಿ ಸಭೆ ಆಯೋಜಿಸಲಾಗಿದೆ. ಕೇಂದ್ರ–ರಾಜ್ಯ ಸರ್ಕಾರಗಳ ವೈಫಲ್ಯ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಇಂಧನ ಬೆಲೆ ಏರಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಜನರಿಗೆ ತಿಳಿಸುವ ಕೆಲಸವನ್ನು ಈ ಸಭೆಯ ಮೂಲಕ ಮಾಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದರು.

‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ. ಮೂರು ಕಿ.ಮೀ. ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಬಾಲಿಶ ಹೇಳಿಕೆ: ಬಿಟ್ ಕಾಯಿನ್ ಹಗರಣದ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗಂಡೋ, ಹೆಣ್ಣೋ? ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ‌ ಪ್ರತಿಕ್ರಿಯಿಸಿದ ಧ್ರುವನಾರಾಯಣ, 'ಇದು ಬಾಲಿಶ ಹೇಳಿಕೆ. ಎರಡನೇ ಬಾರಿ ಸಂಸದರಾದವರು, ಪತ್ರಕರ್ತರಾಗಿದ್ದವರು ಹೇಳುವಂತಹ ಮಾತು ಇದಲ್ಲ. ಧೈರ್ಯ ಇದ್ದಿದ್ದರೆ ಪ್ರತಾಪ್‌ ಸಿಂಹ, ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಉತ್ತರ ಕೊಡಬೇಕಿತ್ತು. ಪ್ರಕರಣದ ತನಿಖೆ ನಡೆಸುವಂತೆ ಸರ್ಕಾರಕ್ಕೆ ಹೇಳಬೇಕಿತ್ತು. ಅದು ಬಿಟ್ಟು ಇಂತಹ ಹೇಳಿಕೆ ನೀಡುತ್ತಾರೆ ಎಂದರೆ, ಅವರು ಸಂಸದರಾಗಲು ಅರ್ಹರೋ ಅನರ್ಹರೋ? ಎಂಬುದರ ಬಗ್ಗೆ ಜನರೇ ತೀರ್ಮಾನಿಸಬೇಕು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT