ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಇ.ಡಿ ವಿಚಾರಣೆ, ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆಕ್ರೋಶ

ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಪ್ರತಿಭಟನಾ ರ‍್ಯಾಲಿ, ರಸ್ತೆ ತಡೆ, ರಾಷ್ಟ್ರಪತಿಗೆ ಮನವಿ
Last Updated 17 ಜೂನ್ 2022, 11:52 IST
ಅಕ್ಷರ ಗಾತ್ರ

ಚಾಮರಾಜನಗರ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮುಖಂಡ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆ ನಡೆಸುತ್ತಿರುವುದನ್ನು ಹಾಗೂ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಸಂಸದರು ಹಾಗೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಸೇರಿದ ಪ್ರತಿಭಟನಕಾರರು ಅಲ್ಲಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ, ಇ.ಡಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ಬಿ.ರಾಚಯ್ಯ ಜೋಡಿರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ಮರವಣಿಗೆ ತೆರಳಿ ಅಲ್ಲಿ ‍ಪ್ರವೇಶದ್ವಾರದ ಮುಂಭಾಗ ಪ್ರತಿಭಟನೆ ನಡೆಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಗಾಂಧಿ ಮತ್ತು ನೆಹರು ಮನೆತನವನ್ನು ಗುರಿಯಾಗಿಸಿಕೊಂಡು ಇ.ಡಿ, ಐ.ಟಿ ಮುಂತಾದ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಮೇಲೆ ಎಫ್‌ಐಆರ್‌ ದಾಖಲು ಮಾಡಿರುವುದು, ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.ರಾಹುಲ್ ಗಾಂಧಿ ಅವರ ಪ್ರಭಾವ ದೇಶದಲ್ಲಿ ಹೆಚ್ಚಾಗುತ್ತಿರುವುದನ್ನು ಸಹಿಸಲಾರದೆ ಪ್ರಧಾನಿ ಅವರು ಈ ರೀತಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದೇಶದಲ್ಲಿ ವಿರೋಧ ಪಕ್ಷದಗಳ ಸಾಮರ್ಥ್ಯ ಕುಗ್ಗಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇದೊಂದು ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಕೆಪಿಸಿಸಿ ಅದೇಶದ ಮೇರೆಗೆ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಕ್ಷದ ವರಿಷ್ಠರ ಮೇಲೆ ಇಡಿ, ಐಟಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ತನಿಖೆ ನಡೆಸುವುದು ಸರಿಯಲ್ಲ. ಬಿಜೆಪಿಯು ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿದೆ’ ಎಂದರು.

ಮುಖಂಡರಾದ ಕಾಗಲವಾಡಿ ಶಿವಣ್ಣ, ಎಸ್‌.ಜಯಣ್ಣ, ಎ.ಆರ್‌.ಕೃಷ್ಣಮೂರ್ತಿ ಅವರು ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.

ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೆಪಿಸಿಸಿ ಕಾರ್ಯದರ್ಶಿಗಳಾದ ಎಸ್.ಸಿ.ಬಸವರಾಜು, ಮಂಜುಳಾ ಮಾನಸ, ಮುಖಂಡರಾದ ಗಣೇಶ ಪ್ರಸಾದ್, ಕೆ.ಪಿ.ಸದಾಶಿವಮೂರ್ತಿ, ಎಸ್.ಸೋಮನಾಯಕ, ರಮೇಶ್,ಸಿ.ಎ.ಮಹದೇವಶೆಟ್ಟಿ, ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಗುರುಸ್ವಾಮಿ, ಎಚ್.ವಿ.ಚಂದ್ರು, ತೋಟೇಶ್, ಎಸ್‌ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ನಾಗರಾಜು, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್ ಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಲತಾಜತ್ತಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT