ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಸಿದ್ದರಾಮಯ್ಯ ಬೆಂಬಲಿಸಿ ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ

Last Updated 6 ನವೆಂಬರ್ 2021, 11:29 IST
ಅಕ್ಷರ ಗಾತ್ರ

ಚಾಮರಾಜನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಖಂಡರು ನೀಡುತ್ತಿರುವ ಹೇಳಿಕೆ ಹಾಗೂ ನಡೆಸುತ್ತಿರುವ ಪ್ರತಿಭಟನೆಗಳನ್ನು ಖಂಡಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗಗಳ ವತಿಯಿಂದ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಬಿಜೆಪಿಯು ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸತ್ಯಮಂಗಲ ರಸ್ತೆಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿ ಬಳಿ ಸೇರಿದ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ ಡೀವಿಯೇಷನ್‌ ರಸ್ತೆಯ ಮೂಲಕ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಮಾತನಾಡಿ, ‘ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಬಿಜೆಪಿಯವರು ಸಿದ್ದರಾಮಯ್ಯ ಅವರ ವಿರುದ್ಧ ದಲಿತ ವಿರೋಧಿ ಪಟ್ಟಕಟ್ಟುವ ಕೆಲಸ ಮಾಡುತ್ತಿದ್ದಾರೆ. ಅಸೂಯೆಯಿಂದ ‌ಜಾತಿ ಜಾತಿಯನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ದಲಿತರು, ಬಡವರ ಪರವಾಗಿರುವ ದೇಶದ ಏಕೈಕ ನಾಯಕ ಎಂದರೆ ಅದು ಸಿದ್ದರಾಮಯ್ಯ ಅವರು. ಎಲ್ಲ ವರ್ಗದ ಏಳಿಗೆ ಬಯಸುವಂತಹ ನಾಯಕ ದೇಶದಲ್ಲಿದ್ದಾರೆ ಎಂದರೆ ಅದು ಸಿದ್ದರಾಮಯ್ಯ. ಅವರು ಯಾವ ಜಾತಿಗೂ ವಿರೋಧಿಯಲ್ಲ. ಅವರ ಜನಪ್ರಿಯತೆಯನ್ನು ನೋಡಿ ಮುಂದಿನ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭೀತಿಯಿಂದ ಬಿಜೆಪಿಯವರು ಇಂತಹ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.

ಮುಖಂಡ ಎ.ಆರ್‌.ಕೃಷ್ಣಮೂರ್ತಿ ಅವರು ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡರು ಕೆಲವು ದಿನಗಳಿಂದ ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ.ಸಿದ್ದರಾಮಯ್ಯ ಅವರಿಗೆ ದಲಿತರ ವಿರೋಧಿ ಪಟ್ಟ ಕಟ್ಟಬೇಕು ಎಂಬ ಹುನ್ನಾರ ಹಾಗೂ ಅವರ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುವ ಯತ್ನ ಇದರ ಹಿಂದಿದೆ. ಜನತೆಗೆ ಸುಳ್ಳು ಸಂದೇಶ ಹೋಗವಬಾರದು ಎಂದು ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದ ಕೂಡಲೇ ಎಸ್‌ಸಿ, ಎಸ್‌ಟಿಗಳು, ಒಬಿಸಿ, ಅಲ್ಪಸಂಖ್ಯಾತ ಸಮುದಾಯದವರು ಅಂಬೇಡ್ಕರ್ ಅಭಿವೃದ್ದಿ ನಿಗಮ, ವಾಲ್ಮೀಕಿ ಅಭಿವೃದ್ದಿ ನಿಗಮ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲ್ಪಾಸಂಖ್ಯಾತ ಅಭಿವೃದ್ದಿ ನಿಗಮಗಳಲ್ಲಿ ಪಡೆದಿದ್ದ ಸಾಲಗಳನ್ನು ಮನ್ನಾ ಮಾಡಿದರು. ಹೀಗಿರವಾಗ ಅವರು ದಲಿತ ವಿರೋಧಿ ಹೇಗಾಗುತ್ತಾರೆ? ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಹೆಗಡೆ ಅವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂಬ ಹೇಳಿಕೆ ನೀಡಿದಾಗ ಅದರ ಬಗ್ಗೆ ಬಿಜೆಪಿಯ ಒಬ್ಬರು ಮಾತನಾಡಲಿಲ್ಲ. ಅಂತಹವರು ಇಂದು ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ’ ಎಂದರು.

ಮುಖಂಡರಾದ ಎಸ್.ಬಾಲರಾಜು, ಎಸ್.ಜಯಣ್ಣ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವು, ಆರ್.ಮಹದೇವು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ನಾಗರಾಜು, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆರೆಹಳ್ಳಿ ನವೀನ್, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಲತಾರಾಜಶೇಖರ್ ಜತ್ತಿ, ಪದ್ಮಪುರುಷೋತ್ತಮ್, ಗ್ರಾಮಾಂತರ ಮಂಡಲ ಅಧ್ಯಕ್ಷೆ ಶಕುಂತಲಾ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT