ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಲಭೂತ ಹಕ್ಕು ಅನುಭವಿಸಿ, ಕರ್ತವ್ಯ ನಿರ್ವಹಿಸಿ:ಭಾರತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆ
Last Updated 28 ನವೆಂಬರ್ 2022, 15:42 IST
ಅಕ್ಷರ ಗಾತ್ರ

ಚಾಮರಾಜನಗರ: 'ದೇಶದ ಸಂವಿಧಾನವು ಅತಿ ದೊಡ್ಡ ಸಂವಿಧಾನವಾಗಿದೆ. ರಾಷ್ಟ್ರದ ಪ್ರಜೆಗಳು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ತಮ್ಮ ಕರ್ತವ್ಯಗಳನ್ನೂ ನಿರ್ವಹಿಸಬೇಕು' ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದಬಿ.ಎಸ್.ಭಾರತಿ ಸೋಮವಾರ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಜಂಟಿಯಾಗಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

‘1949ರ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ತೋರಿಸಲು ಸಂವಿಧಾನ ದಿನಾಚರಣೆ ಆಚರಿಸುತ್ತೇವೆ. ಕೇವಲ ಹಕ್ಕುಗಳನ್ನು ಚಲಾಯಿಸುವುದಲ್ಲ. ದೇಶಕ್ಕಾಗಿ ಕೆಲವು ಕರ್ತವ್ಯಗಳನ್ನೂ ನಾವು ನಿರ್ವಹಿಸಬೇಕಾಗುತ್ತದೆ. ಅವುಗಳ ಬಗ್ಗೆ ಅರಿವು ಹೊಂದಬೇಕು’ ಎಂದರು.

ವಿಶೇಷ ಉಪನ್ಯಾಸ ನೀಡಿದ ವಕೀಲ ಆರ್.ಅರುಣ್ ಕುಮಾರ್, ‘ಹಿಂದೆ ಎಲ್ಲರಿಗೂ ಮತದಾನದ ಹಕ್ಕು ಇರಲಿಲ್ಲ. ಅಂತಹ ವ್ಯವಸ್ಥೆಯನ್ನು ಅಂಬೇಡ್ಕರ್ ಅವರು ವಿರೋಧಿಸಿದ್ದರು. ಮಹಾತ್ಮ ಗಾಂಧೀಜಿ ಅವರು ಸ್ವಾತಂತ್ರ್ಯಕ್ಕಾಗಿ ಬಾಹ್ಯ ಹೋರಾಟ ಮಾಡಿದರೆ, ಅಂಬೇಡ್ಕರ್‌ ಅವರು ಆಂತರಿಕವಾಗಿ ದೇಶದ ಪ್ರಜೆಗಳ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದರು’ ಎಂದರು.

‘ಭಾರತದಲ್ಲಿ ನೈಸರ್ಗಿಕ ಸೂರ್ಯ ಒಂದಾದರೆ ಇನ್ನೊಂದು ಸೂರ್ಯ ಅಂಬೇಡ್ಕರ್‌ ಅವರು ನೆಲ್ಸನ್‌ ಮಂಡೇಲಾ ಅವರು ಬಣ್ಣಿಸಿದ್ದರು. ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನ ಜಾರಿಗೆ ಬಂದು 73 ವರ್ಷಗಳು ಕಳೆದರಿದ್ದರೂ, ಇದುವರೆಗೂ ದೇಶದ ನ್ಯಾಯಾಲಯದಲ್ಲಿ ಅದರ ವಿರುದ್ಧ ಒಂದು ರಿಟ್‌ ಅರ್ಜಿ ಸಲ್ಲಿಕೆಯಾಗಿಲ್ಲ. ಇದು ಹೆಮ್ಮೆಯ ವಿಚಾರ. ಸಂವಿಧಾನದಲ್ಲಿ ನಮಗೆ ನೀಡಿರುವ ಹಕ್ಕುಗಳ ಬಗ್ಗೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಜವಾಬ್ದಾರಿ ಕರ್ತವ್ಯಗಳ ಬಗ್ಗೆಯೂ ಇರಬೇಕು’ ಎಂದರು.ಜಿಲ್ಲಾ ವಕೀಲರ ಸಂಘದ ಆಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಅಧ್ಯಕ್ಷತೆಯನ್ನು ವಹಿಸಿದ್ದರು.

ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್‌ ಮಾತನಾಡಿ, ‘ಸಂವಿಧಾನವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯ’ ಎಂದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ (ಮಕ್ಕಳ ಸ್ನೇಹಿ ನ್ಯಾಯಾಲಯ) ನಿಶಾರಾಣಿ, ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಎಸ್.ಹೊನ್ನುಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಧರ ಎಂ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವೆಂಕಟೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಕೆ.ವಿರೂಪಾಕ್ಷಸ್ವಾಮಿ, ‍ಪಬ್ಲಿಕ್‌ ಪ್ರಾಸಿಕ್ಯೂಟರ್‌ ರಘುಕುಮಾರ್, ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಕೆ.ಯೋಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT