ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ನಿಯಮ: ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಕೋವಿಡ್–19: ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
Last Updated 17 ಮೇ 2020, 15:17 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಆರೋಗ್ಯ ಕಾಳಜಿ ನಿಯಮಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್– 19 ಮುಂಜಾಗ್ರತಾ ಕ್ರಮಗಳು ಹಾಗೂ ಲಾಕ್‌ಡೌನ್ ಸಂಬಂಧ ಭಾನುವಾರ ಪೊಲೀಸ್, ಕಂದಾಯ, ಕೆಎಸ್ಆರ್‌ಟಿಸಿ, ಇತರೆ ನೋಡೆಲ್ ಅಧಿಕಾರಿಗಳ ಸಭೆ ನಡೆಸಿದರು.

‘ಆರೋಗ್ಯ ಮುಂಜಾಗ್ರತಾ ಕ್ರಮಗಳನ್ನು ಮುಂದುವರೆಸಬೇಕು. ಅಂತರ ಕಾಪಾಡಿಕೊಳ್ಳುವುದು ಸಾಮಾಜಿಕ ಜವಾಬ್ದಾರಿಯಾಗಬೇಕು. ಜನರು ಅಂತರ ಕಾಪಾಡಿಕೊಳ್ಳುತ್ತಿರುವುದು, ಮಾಸ್ಕ್ ಧರಿಸುವಿಕೆ ಸೇರಿದಂತೆ ಎಲ್ಲಾ ಆರೋಗ್ಯ ಪೂರಕ ಕ್ರಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಸೆಕ್ಟರ್ ಮ್ಯಾಜಿಸ್ಟ್ರೇಟ್‌ಗಳು ಇನ್ನಷ್ಟು ವ್ಯಾಪಕವಾಗಿ ಪರಿಶೀಲಿಸಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿಯೂ ಆರೋಗ್ಯ ಕುರಿತ ಜಾಗೃತಿಗೆ ಮುಂದಾಗಬೇಕು’ ಎಂದು ಹೇಳಿದರು.

ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳಿಗೆ ಸೋಂಕು ನಿವಾರಕಗಳನ್ನು ಕಡ್ಡಾಯವಾಗಿ ಸಿಂಪಡಿಸಬೇಕು. ಯಾವುದೇ ಕಾರಣಕ್ಕೂ ಚೆಕ್‌ಪೋಸ್ಟ್‌ಗಳಲ್ಲಿ ಹಾದುಹೋಗುವ ವಾಹನಗಳ ಮೇಲೆ ನಿರ್ಲಕ್ಷ್ಯ ವಹಿಸುವುದನ್ನು ಸಹಿಸಲಾಗುವುದಿಲ್ಲ. ಚೆಕ್‌ಪೋಸ್ಟ್ ನೋಡೆಲ್ ಅಧಿಕಾರಿಗಳು ಆರೋಗ್ಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಚೆಕ್‌ಪೋಸ್ಟ್ ಕಾರ್ಯನಿರ್ವಹಣೆಗೆ ಅಧಿಕಾರಿಗಳು ಯಾವುದೇ ನೆರವು ಅಗತ್ಯ ವಸ್ತುಗಳು ಬೇಕಿದ್ದಲ್ಲಿ ಕೂಡಲೇ ತಹಶೀಲ್ದಾರರನ್ನು ಸಂಪರ್ಕಿಸಬೇಕು’ ಎಂದು ತಿಳಿಸಿದರು.

‘ಕ್ವಾರಂಟೈನ್ ಕೇಂದ್ರವಾಗಿ ಪರಿವರ್ತಿಸಿರುವ ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಹೊರರಾಜ್ಯಗಳಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ 14 ದಿನಗಳ ಕಾಲ ಉಳಿಯಬೇಕಿದೆ. ಇವರಿಗೆ ಊಟ, ಉಪಾಹಾರ, ವಸತಿ, ಕುಡಿಯುವ ನೀರು, ಹೊದಿಕೆ ಇನ್ನಿತರ ಮೂಲ ಸೌಕರ್ಯವನ್ನು ಯಾವುದೇ ಕೊರತೆ ಬಾರದಂತೆ ಕಲ್ಪಿಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ‌ಕುಮಾರ್ ಮಾತನಾಡಿ, ‘ವಾಹನಗಳ ಸವಾರರು ಲಾಕ್‌ಡೌನ್ ಅವಧಿಯಲ್ಲಿ ನಿಗದಿ ಮಾಡಿರುವ ನಿಯಮಗಳ ಅನುಸಾರ ನಡೆದುಕೊಳ್ಳಬೇಕು. ಯಾವುದೇ ಉಲ್ಲಂಘನೆ ಕ್ರಮಗಳಿಗೆ ಮುಂದಾಗಬಾರದು. ಜಿಲ್ಲೆಯ ಆರೋಗ್ಯ ಸುರಕ್ಷತೆಯನ್ನು ಕಾಪಾಡಿಕೊಳ್ಳುವಲ್ಲಿ ಸಹಕಾರ ನೀಡಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣವರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ರವಿ, ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಡಿವೈಎಸ್‌ಪಿಗಳಾದ ನವೀನ್‌ಕುಮಾರ್, ಮೋಹನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ್, ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್, ತಹಶಿಲ್ದಾರರಾದ ಜೆ. ಮಹೇಶ್, ಕೆ.ಕುನಾಲ್, ನಂಜುಂಡಯ್ಯ, ಬಸವರಾಜು ಚಿಗರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT