ಬುಧವಾರ, ಸೆಪ್ಟೆಂಬರ್ 22, 2021
24 °C
ವಸತಿಗೃಹ, ರೆಸಾರ್ಟ್‌, ಹೋಂ ಸ್ಟೇ ತಂಗಲು ಆರ್‌ಟಿಪಿಸಿಆರ್‌ ವರದಿ ಕಡ್ಡಾಯ

ಕೋವಿಡ್‌: ಪ್ರವಾಸಿ, ಧಾರ್ಮಿಕ ತಾಣಗಳಲ್ಲಿ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನೆರೆಯ ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಅದರ ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. 

ಪ್ರವಾಸಿ ತಾಣಗಳು, ಮಹದೇಶ್ವರ ಬೆಟ್ಟ ಸೇರಿದಂತೆ ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ಜನಜಂಗುಳಿಯನ್ನು ನಿಯಂತ್ರಿಸಲು ಹಲವು ನಿರ್ಬಂಧಗಳನ್ನು ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.  

ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯ ಎಲ್ಲ ದೇವಾಲಯಗಳಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದಾಸೋಹ ವ್ಯವಸ್ಥೆ, ಪ್ರಸಾದ, ಉತ್ಸವ ಸೇರಿದಂತೆ ವಿವಿಧ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ. 

ಪ್ರಮುಖ ಪ್ರವಾಸಿ ತಾಣಗಳಾದ ಭರಚುಕ್ಕಿ ಹಾಗೂ ಹೊಗೆನಕಲ್‌ ಜಲ‍ಪಾತಗಳ ಪ್ರದೇಶಕ್ಕೆ ಶನಿವಾರ ಹಾಗೂ ಭಾನುವಾರ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಕೋವಿಡ್‌ ನಿಯಮಗಳ ಪಾಲನೆಯ ಷರತ್ತಿಗೆ ಒಳಪಟ್ಟು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಜಲಪಾತಗಳ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. 

ಆರ್‌ಟಿ–ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ: ಕೇರಳದಿಂದ ಬಸ್‌ ಹಾಗೂ ಇತರ ವಾಹನಗಳಲ್ಲಿ ಜಿಲ್ಲೆಯನ್ನು ಪ್ರವೇಶಿಸುವವರು ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಿದ್ದರೂ, 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಸಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. 

ಇದಲ್ಲದೇ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ರೆಸಾರ್ಟ್‌, ಹೋಂ ಸ್ಟೇ, ವಸತಿಗೃಹಗಳು, ಲಾಡ್ಜ್‌ಗಳು ಹಾಗೂ ಅರಣ್ಯ ಇಲಾಖೆಯ ವಸತಿ ಗೃಹಗಳಲ್ಲಿ ತಂಗಲು ಜನರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ತೋರಿಸಬೇಕು. ಸಫಾರಿ ಮಾಡುವಾಗಲೂ ಈ ವರದಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ. ವಾರಾಂತ್ಯದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಲಾಗಿದೆ. 

ವಿವಿಧ ಇಲಾಖೆಗಳು ನಡೆಸುವ ಶಂಕುಸ್ಥಾಪನೆ, ಉದ್ಘಾಟನೆ, ಸಭೆ ಸಮಾರಂಭ.. ಮುಂತಾದ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. 

ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಸಭೆ–ಸಮಾರಂಭಗಳು ಹಾಗೂ ಇತರೆ ಕಾರ್ಯಕ್ರಮಗಳನ್ನು ನಡೆಸಲು ತಹಶೀಲ್ದಾರ್‌ ಅವರಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗಳಿಸಲಾಗಿದ್ದು, ಆಸನ ಸಾಮರ್ಥ್ಯದ ಶೇ 50ರಷ್ಟು ಜನರು ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. 

ಮದುವೆ ಸಮಾರಂಭಗಳಲ್ಲಿ 100 ಜನರು ಹಾಗೂ ಅಂತ್ಯಕ್ರಿಯೆಗಳಲ್ಲಿ ಗರಿಷ್ಠ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.  

ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗೆ ಭೇಟಿ: ಪರಿಶೀಲನೆ

ಈ ಮಧ್ಯೆ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಸೋಮವಾರ ಗುಂಡ್ಲುಪೇಟೆ ತಾಲ್ಲೂಕಿನ ಕೆಕ್ಕನಹಳ್ಳ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚೆಕ್‌ಪೋಸ್ಟ್‌ನಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣಾ ಕಾರ್ಯ ಪರಿಶೀಲಿಸಿದರು. ಪ್ರತಿನಿತ್ಯ ಸಂಚರಿಸುವ ಪ್ರಯಾಣಿಕರ ವಾಹನ, ಸರಕು ಸಾಗಣೆ ವಾಹನಗಳ ಸಂಖ್ಯೆ ಹಾಗೂ ವಿವರಗಳನ್ನು ದಾಖಲಿಸುವಂತೆ ಸೂಚಿಸಿದರು.  

‘ತಮಿಳುನಾಡಿನಿಂದ ಜಿಲ್ಲೆಗೆ ಪ್ರವೇಶಿಸುವವರಿಗೂ ಪ್ರಸ್ತುತ ನಡೆಸಲಾಗುತ್ತಿರುವ ಥರ್ಮಲ್ ಸ್ಕ್ರೀನಿಂಗ್ ಇತರೆ ತಪಾಸಣೆ ಕಾರ್ಯವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರ್‌ಟಿ–ಪಿಸಿಆರ್‌ ಪರೀಕ್ಷೆ ಮಾಡುವ ಕುರಿತು ಆದೇಶ ಮಾಡಲಿದ್ದು, ಪ್ರಯಾಣಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಡಾ.ಎಂ.ಆರ್.ರವಿ ಅವರು ಸೂಚಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ತಹಶೀಲ್ದಾರ್ ರವಿಶಂಕರ್, ಇನ್‌ಸ್ಪೆಕ್ಟರ್ ಮಹದೇವಸ್ವಾಮಿ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು