ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಶಾಸಕ ಮಂಜುನಾಥ್

Published 9 ಅಕ್ಟೋಬರ್ 2023, 7:42 IST
Last Updated 9 ಅಕ್ಟೋಬರ್ 2023, 7:42 IST
ಅಕ್ಷರ ಗಾತ್ರ

ಹನೂರು: ಪವಿತ್ರ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕ ಆರೋಪಗಳು ಕೇಳಿ ಬರುತ್ತಿದ್ದು, ಅಬಕಾರಿ ಇಲಾಖೆ ಸಿಬ್ಬಂದಿ ಕೂಡಲೇ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಸೂಚಿಸಿದರು.

ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತನ್ನ ಪಾವಿತ್ರ್ಯತೆ ಮೂಲಕ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧೆಡೆಗಳಿಂದ ಹಾಗೂ ನೆರೆಯ ತಮಿಳುನಾಡಿನಿಂದಲೂ ಹಬ್ಬ ಹಾಗೂ ವಿಶೇಷ ದಿನಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಹರಕೆ ಕಾಟಣಿಕೆಗಳನ್ನು ಸಲ್ಲಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕ್ಷೇತ್ರದೊಳಗೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ಸಾಗುತ್ತಿದೆ. ಇದು ಪ್ರತಿ ಸಭೆಯಲ್ಲೂ ಚರ್ಚೆಯಾಗುತ್ತಿದ್ದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಲಕ್ಷಾಂತರ ಜನರ ಪಾಲಿಗೆ ಪುಣ್ಯ ಸ್ಥಳವಾಗಿರುವ ಬೆಟ್ಟದಲ್ಲಿ ಮದ್ಯ ಮಾರಾಟ ಮಾಡುವ ಮೂಲಕ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತರುವ ಕೆಲಸವಾಗುತ್ತಿದೆ. ಕೂಡಲೇ ಇದಕ್ಕೆ ಅಬಕಾರಿ ಇಲಾಖೆ ಕಡಿವಾಣ ಹಾಕಬೇಕು ಎಂದು ಆದೇಶಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಆದರೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಅವಶ್ಯಕತೆಯಿದೆ. ಪ್ರಾಕೃತಿಕ ಸಂಪತ್ತಿನಿಂದಲೇ ತನ್ನ ಸೌಂದರ್ಯ ಹೆಚ್ಚಿಸಿಕೊಂಡಿರುವ ಹನೂರು ತಾಲ್ಲೂಕಿನಲ್ಲಿ ಪ್ರವಾಸಿ ತಾಣಗಳಿಗೆ ಬರವಿಲ್ಲ. ಅವುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಬೇಕಿದೆ. ಕಾವೇರಿ ವನ್ಯಧಾಮದ ಗೋಪಿನಾಥಂ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭಕ್ಕೆ ಸಿದ್ಧತೆ ನಡೆಸಿರುವುದು ಸಂತಸದ ವಿಚಾರ. ಹೊಗೆನಕಲ್ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕಾವೇರಿ ವನ್ಯಧಾಮದ ಅರಣ್ಯ ಸಂಪತ್ತು ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಲಭ್ಯವಾಗಲಿದೆ ಎಂದರು.

ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೆಕು. ಅಲ್ಲದೇ ತಾಳುಬೆಟ್ಟದಲ್ಲೇ ತಪಾಸಣೆ ನಡೆಸಿ ಕ್ಷೇತ್ರಕ್ಕೆ ಮದ್ಯ ತರುವವರ ಬಗ್ಗೆ ನಿಗಾವಹಿಸಬೇಕು. ಬೆಟ್ಟದ ವಸತಿ ಕೊಠಡಿಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೆ ಆಗಿರುವ ಅಭಿವೃದ್ಧಿ ಕೆಲಸಗಳು ಹಾಗು ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಬೆಟ್ಟದ ಸುತ್ತ ಮುತ್ತ ಶಾಲೆ ಮತ್ತು ಅಂಗನವಾಡಿಗಳಿಗೆ ಅಧಿಕಾರಿಗಳ ತಂಡವನ್ನು ರಚನೆ ಮಾಡಿ ಅಲ್ಲಿ ಎಲ್ಲಾ ರೀತಿಯ ಸೌಭ್ಯಗಳಿವೆಯ ಇಲ್ಲವೋ ಎಂಬುದನ್ನು ಗಮನವಹಿಸಬೇಕು ಎಂದು ತಿಳಿಸಿದರು.

ದೇವಸ್ಥಾನ ಹತ್ತಿರ ಹೆಚ್ಚು ಸ್ಥಳವಕಾಶ ಕಲ್ಪಿಸಬೇಕು. ಬೆಟ್ಟದ ಸುತ್ತ ಮುತ್ತವಿರುವ ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತವಾದ ಸ್ಥಳ ನಿಗದಿಪಡಿಸಬೇಕು. ಹಂದಿಗಳ ಹಾವಳಿ ಹೆಚ್ಚಾಗಿರುವುದರಿಂದ ಸಾಂಕ್ರಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಕಾಡು ಪ್ರಾಣಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕು ಎಂದರು.

ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ. ಉಪ ಕಾರ್ಯದರ್ಶಿ ಚಂದ್ರಶೇಖರ್, ಇನ್‌ಸ್ಪೆಕ್ಟರ್ ನಂಜುಂಡಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಉಮೇಶ್ , ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಮಂಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT