ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪತ್ತು ನಿರ್ವಹಣೆಗೆ ವಿಶೇಷ ತಂಡ: ಜಿಲ್ಲಾಧಿಕಾರಿ ಚಾರುಲತಾ ಸೂಚನೆ

ಪ್ರಕೃತಿ ವಿಕೋಪ ಎದುರಿಸಲು ಸನ್ನದ್ಧರಾಗಿ; ಜಿಲ್ಲಾಧಿಕಾರಿ
Last Updated 6 ಮೇ 2022, 16:10 IST
ಅಕ್ಷರ ಗಾತ್ರ

ಚಾಮರಾಜನಗರ: ‘ಮುಂಗಾರು ಅವಧಿಯಲ್ಲಿ ಅತಿವೃಷ್ಟಿ, ಪ್ರವಾಹ, ನೆರೆ ಹಾವಳಿ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಯಾವುದೇ ಅನಾಹುತವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಸನ್ನದ್ಧರಾಗಿರಬೇಕು’ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಶುಕ್ರವಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ‘ಮಳೆಗಾಲದಲ್ಲಿ ಉಂಟಾಗಬಹುದಾದ ಅತಿವೃಷ್ಟಿ, ನೆರೆ ಪ‍ರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗಿರಬೇಕು. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಅಗ್ನಿಶಾಮಕದಳ, ಪೊಲೀಸ್, ಸ್ಥಳೀಯ ನಗರ ಸಂಸ್ಥೆಗಳು ಒಟ್ಟುಗೂಡಿ ಪರಿಸ್ಥಿತಿ ನಿಭಾಯಿಸಲು ಮುಂದಾಗಬೇಕಾಗುತ್ತದೆ. ವಿಪತ್ತು ಕಾರ್ಯ ನಿರ್ವಹಣೆಗೆ ಪ್ರತ್ಯೇಕವಾಗಿ ವಿಶೇಷ ತಂಡ ರಚಿಸಬೇಕು’ ಎಂದರು.

‘ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ, ಅಗ್ರಹಾರ, ಹರಳೆ, ಹಳೆ ಹಂಪಾಪುರ, ಹೊಸ ಹಂಪಾಪುರ, ಹಳೆ ಅಣಗಳ್ಳಿ, ಮುಳ್ಳೂರು, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳಲ್ಲಿ ಈ ಹಿಂದೆ ಪ್ರವಾಹ ತಲೆದೋರಿದ್ದು ಇಂತಹ ಸಂಭವನೀಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಪ್ರಕೃತಿ ವಿಕೋಪ ಸಂಭವಿಸಿದರೆ ಕಾಳಜಿ ಕೇಂದ್ರಗಳನ್ನು ತೆರೆಯುವ ಅಗತ್ಯ ಬೀಳಬಹುದು. ಇದಕ್ಕಾಗಿ ಸ್ಥಳ ಗುರುತಿಸಿ ಅವಶ್ಯಕ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಬಿರುಗಾಳಿ, ಪ್ರವಾಹ, ಅತಿವೃಷ್ಟಿ ಸಮಯದಲ್ಲಿ ವಹಿಸಬೇಕಿರುವ ಸುರಕ್ಷತಾ ಕ್ರಮಗಳಿಗೆ ಸೆಸ್ಕ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲ ಸಿದ್ಧತೆ ಕೈಗೊಳ್ಳಬೇಕು. ಕೋವಿಡ್ ಜೊತೆಗೆ ಪ್ರವಾಹ, ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಡೆಂಗಿ, ಮಲೇರಿಯ, ಚಿಕೂನ್‌ಗುನ್ಯ, ನೀರು ಹಾಗೂ ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗೆ ಆರೋಗ್ಯ ಇಲಾಖೆ ಗಮನ ಹರಿಸಬೇಕು. ಅಲ್ಲದೇ ನೀರಿನ ಮಾದರಿ ಪರೀಕ್ಷಿಸಿ ಸುರಕ್ಷತೆ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಮಾತನಾಡಿ, ‘ಹಳ್ಳಿಗಳಲ್ಲಿ ಕುಡಿಯುವ ನೀರಿನ ಕುರಿತು ದೂರು ಬಾರದ ಹಾಗೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಸಭೆ ನಡೆಸಬೇಕು. ಕಂದಾಯ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಪಂಚಾಯಿತಿ ಮಟ್ಟದ ಅಧಿಕಾರಿಗಳು ವಿಪತ್ತು ನಿರ್ವಹಣಾ ಕುರಿತು ಸಭೆ ನಡೆಸಿ ಅಗತ್ಯ ವ್ಯವಸ್ಥೆ ಮಾಡಬೇಕು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‌ರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಆಸ್ಪತ್ರೆಯ ನೋಡೆಲ್ ಅಧಿಕಾರಿ ಡಾ.ಮಹೇಶ್, ಆರ್.ಎಂ.ಒ ಡಾ. ಕೃಷ್ಣಪ್ರಸಾದ್, ತಹಶೀಲ್ದಾರ್‌ರಾದ ಬಸವರಾಜು, ರವಿಶಂಕರ್, ಮಂಜುಳಾ ಇದ್ದರು.

ಗಣಿಗಳಲ್ಲಿ ಎಚ್ಚರಿಕೆಗೆ ತಾಕೀತು

ಮುಂಗಾರು ಅವಧಿಯಲ್ಲಿ ಗಣಿಗಾರಿಕೆ ಪ್ರದೇಶಗಳಲ್ಲಿ ಅವಘಡ ಸಂಭವಿಸದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಾಹನ, ಯಂತ್ರೋಪಕರಣಗಳಿಂದಾಗುವ ಅನಾಹುತ, ಸಡಿಲಗೊಂಡ ಗಣಿ ಪ್ರದೇಶದ ಭಾಗದಲ್ಲಿ ಉಂಟಾಗಬಹುದಾದ ಭೂಕುಸಿತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿ, ಇಲಾಖೆಯ ಉಪನಿರ್ದೇಶಕ ನಂಜುಂಡಸ್ವಾಮಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆಗಾಲದಲ್ಲಿ ಬಿರುಗಾಳಿ, ಅತಿವೃಷ್ಟಿಯಿಂದಾಗಿ ಹಾನಿಗೊಳಗಾಗುವ ಬೆಳೆಗಳ ಕುರಿತು ಅಧಿಕಾರಿಗಳು ಶೀಘ್ರ ವರದಿ ಸಲ್ಲಿಸಬೇಕಾಗುತ್ತದೆ.
ಚಾರುಲತಾ ಸೋಮಲ್‌, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT