ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಅಲೆ ನಿರ್ವಹಣೆ: ಜಿಲ್ಲಾ ಕೇಂದ್ರದಲ್ಲಿ 100 ಮಕ್ಕಳ ಆಸ್ಪತ್ರೆ

ಮಕ್ಕಳ ಮೇಲೆ ಪ್ರಭಾವ ತಜ್ಞರ ವರದಿ, ಜಿಲ್ಲಾಧಿಕಾರಿ ಸಭೆ
Last Updated 14 ಜೂನ್ 2021, 17:06 IST
ಅಕ್ಷರ ಗಾತ್ರ

ಚಾಮರಾಜನಗರ: ‘ಕೋವಿಡ್‌ನ ಸಂಭಾವ್ಯ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ವರದಿ ನೀಡಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಮಕ್ಕಳಿಗಾಗಿಯೇ 100 ಹಾಸಿಗೆಗಳ ಆಸ್ಪತ್ರೆ ಸಿದ್ಧಪಡಿಸಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೋಮವಾರ ತಿಳಿಸಿದರು.

ಕೋವಿಡ್ ಮೂರನೇ ಅಲೆ ಸೋಂಕು ತಡೆ ಹಾಗೂ ನಿರ್ವಹಣೆ ಕುರಿತು ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ತಜ್ಞರು ಸಿದ್ಧಪಡಿಸಿರುವ ವರದಿಗೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಅಂತರ ಇಲಾಖೆಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸಂಭವನೀಯ ಕೋವಿಡ್ 3ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಪೂರಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಅಗತ್ಯ ಬೀಳಬಹುದಾದ ಆಸ್ಪತ್ರೆ, ಕೋವಿಡ್ ಕೇರ್ ಕೇಂದ್ರಗಳು ಸೇರಿದಂತೆ ಇನ್ನಿತರ ಚಿಕಿತ್ಸಾ ಕ್ರಮಗಳ ಬಗ್ಗೆ ಯೋಜನೆ ಮಾಡಬೇಕಾಗುತ್ತದೆ. ಜಿಲ್ಲಾ ಕೇಂದ್ರದಲ್ಲಿ ಮಕ್ಕಳಿಗಾಗಿಯೇ ಕನಿಷ್ಠ 100 ಹಾಸಿಗೆಯ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳಲ್ಲಿಯೂ ಕನಿಷ್ಠ 10 ಹಾಸಿಗೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯೂ ಹಾಸಿಗೆಗಳ ವ್ಯವಸ್ಥೆ ಮಾಡಬೇಕಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಅಗತ್ಯ ಸೌಲಭ್ಯ ಕಲ್ಪಿಸಬೇಕಾಗುತ್ತದೆ’ ಎಂದು ಅವರು ಹೇಳಿದರು.

‘ಮಕ್ಕಳ ತಜ್ಞರು, ವೈದ್ಯರ ನಿಯೋಜನೆಯೊಂದಿಗೆ ಈಗಾಗಲೇ ಇರುವ ಶುಶ್ರೂಷಕರಿಗೆ ಮಕ್ಕಳ ಚಿಕಿತ್ಸೆ ಸೇವೆ ಸಂಬಂಧ ಸೂಕ್ತ ತರಬೇತಿ ನೀಡಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು. ಪ್ರಸ್ತುತ ಲಭ್ಯವಿರುವ ವೈದ್ಯರು ಹಾಗೂ ನರ್ಸಿಂಗ್‌ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಕಾರ್ಯ ಯೋಜನೆ ಸಿದ್ಧಪಡಿಸಿಕೊಳ್ಳಬೇಕು’ ಎಂದರು.

ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಸುಗುಣ ಅವರು ಕೋವಿಡ್ ಮೂರನೇ ಅಲೆಯ ಸೋಂಕು ತಡೆ ಹಾಗೂ ನಿರ್ವಹಣೆ ಕುರಿತು ಸಿದ್ಧಪಡಿಸಿರುವ ವರದಿಯನ್ನು ಪವರ್ ಪಾಯಿಂಟ್ ಮೂಲಕ ಸಭೆಯಲ್ಲಿ ವಿವರವಾಗಿ ಪ್ರಸ್ತುತ ಪಡಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಗೂಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್, ಆರ್‌ಸಿಎಚ್ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಡಾ.ಪ್ರಶಾಂತ್, ಡಾ.ತನ್ಯ, ಡಾ. ದಮಯಂತಿ, ಡಾ.ಮಹೇಶ್, ಡಾ.ಕೃಷ್ಣಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಬಿ. ಬಸವರಾಜು, ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ಗೋವಿಂದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಎಸ್. ಜವರೇಗೌಡ ಇದ್ದರು.

'ಅಪೌಷ್ಟಿಕ, ಅಂಗವಿಕಲ ಮಕ್ಕಳ ಬಗ್ಗೆ ಕಾಳಜಿ ಅಗತ್ಯ’

‘ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೆಚ್ಚು ಸಕ್ರಿಯವಾಗಬೇಕಿದೆ. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ವಿತರಣೆಯಂತಹ ಕ್ರಮಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕಿದೆ. ಅಂಗವಿಕಲ ಮಕ್ಕಳ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕಿದೆ. ಬಾಲಮಂದಿರದ ಮಕ್ಕಳ ಯೋಗ ಕ್ಷೇಮದ ಬಗ್ಗೆಯೂ ಗಮನಹರಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಈ ಎಲ್ಲಾ ಕ್ರಮಗಳ ಬಗ್ಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಮಕ್ಕಳ ಮಾನಸಿಕ ಒತ್ತಡ, ಒಂಟಿತನ ಇತರೆ ಕಾಡಬಹುದಾದ ಸಮಸ್ಯೆಗಳಿಗೆ ಆಪ್ತ ಸಮಾಲೋಚನೆಯೂ ಅಗತ್ಯವಿದೆ. ಇದಕ್ಕಾಗಿಯೇ ಪ್ರತಿ ತಾಲ್ಲೂಕಿಗೆ 25 ಶಿಕ್ಷಕರಂತೆ 100 ಶಿಕ್ಷಕರನ್ನು ಆಯ್ಕೆ ಮಾಡಿಕೊಂಡು ಸೂಕ್ತ ತರಬೇತಿ ಏರ್ಪಡಿಸಬೇಕು. ಮಕ್ಕಳ ಪೋಷಕರಿಗೂ ಆತ್ಮಸ್ಥೈರ್ಯ, ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಶಿಕ್ಷಕರು ನಿರ್ವಹಿಸಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT