ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರಚುಕ್ಕಿ ಜಲಪಾತ ವೀಕ್ಷಣೆಗೆ ಅವಲಾಶ: ಗುರುವಾರದೊಳಗೆ ಸಿದ್ಧತೆಗೆ ಸೂಚನೆ

ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
Last Updated 9 ಆಗಸ್ಟ್ 2020, 15:10 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಸುಪ್ರಸಿದ್ದ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಹಾಗೂ ಭರಚುಕ್ಕಿ ಬಳಿಯ ದರ್ಗಾ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದಕ್ಕಾಗಿ ಅಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-19 ಕಾರಣಕ್ಕೆ ಜಲಪಾತ ಪ್ರದೇಶಕ್ಕೆ ಪ್ರವಾಸಿಗರಿಗೆ ಭೇಟಿಗೆ ತಾತ್ಕಾಲಿಕನಿಷೇಧ ಹೇರಲಾಗಿದೆ. ದರ್ಗಾ ಪ್ರವೇಶಕ್ಕೂ ನಿರ್ಬಂಧ ಇದೆ. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಪ್ರತ್ಯೇಕವಾಗಿ ಜಲಪಾತಕ್ಕೆ ಭೇಟಿ ನೀಡಿ ಶೀಘ್ರವಾಗಿ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು.

ಇದೇ ಉದ್ದೇಶದಿಂದ ಜಿಲ್ಲಾಧಿಕಾರಿ ಅವರು ಭಾನುವಾರ ಅಧಿಕಾರಿಗಳ ಸಭೆ ನಡೆಸಿ ಚರ್ಚೆ ನಡೆಸಿದರು.ಗುರುವಾರದ ಒಳಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

‘ಭರಚುಕ್ಕಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ. ಪ್ರಸ್ತುತ ಮಳೆ ಹಾಗೂ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವುದರಿಂದ ಇನ್ನಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ. ಹೀಗಾಗಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಡಾ.ಎಂ.ಆರ್.ರವಿ ಅವರು ಹೇಳಿದರು.

‘ಭರಚುಕ್ಕಿಯಲ್ಲಿ ಸಂಜೆಯ ವೇಳೆಗೆ ಬರುವ ಆನೆಗಳು ಕೆಲವೆಡೆ ಬೇಲಿಗೆ ಹಾನಿ ಮಾಡಿರುವ ಬಗ್ಗೆ ಶನಿವಾರ ಭೇಟಿ ನೀಡಿದ ವೇಳೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಹಾನಿಗೆ ಒಳಗಾಗಿರುವ ಕಡೆ ಬೇಲಿ ದುರಸ್ತಿ ಮಾಡಬೇಕು. ಶೌಚಾಲಯಗಳನ್ನು ಬಳಕೆಗೆ ಸಿದ್ಧಪಡಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುವಂತಾಗಬೇಕು’ ಎಂದು ಸಲಹೆ ನೀಡಿದರು.

‘ಪ್ರವಾಸಿಗರು ಯಾವ ಸ್ಥಳದಲ್ಲಿ ಜಲಪಾತ ವೀಕ್ಷಿಸಬೇಕು, ಎಲ್ಲಿಗೆ ತೆರಳಬಾರದು ಎಂಬುದನ್ನು ಸೂಚಿಸುವ ಫಲಕಗಳನ್ನು ಅಳವಡಿಸಬೇಕು. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸುರಕ್ಷತಾ ನಿಯಮಗಳನ್ನು ಪ್ರವಾಸಿಗರು ಕಡ್ಡಾಯವಾಗಿ ಪಾಲನೆ ಮಾಡಬೇಕಾಗಿದೆ. ಮಾಸ್ಕ್ ಕಡ್ಡಾಯವಾಗಿ ಧರಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಜನರು ಅಂತರ ಕಾಯ್ದುಕೊಂಡು ಜಲಪಾತದ ಸೊಬಗು ಸವಿಯುವಂತೆ ಮಾಡಬೇಕು’ ಎಂದು ಡಾ.ಎಂ.ಆರ್.ರವಿ ಅವರು ತಿಳಿಸಿದರು.

‘ದರ್ಗಾ ಬಳಿ ಸ್ವಚ್ಛತೆ ಹಾಗೂ ಸುರಕ್ಷತೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಕೊಟ್ಟು ಪರಿಶೀಲಿಸಿ ವರದಿ ನೀಡಬೇಕು’ ಎಂದು ಸೂಚಿಸಿದ ಅವರು, ‘ಗುರುವಾರದೊಳಗೆ ಭರಚುಕ್ಕಿ ಹಾಗೂ ದರ್ಗಾ ಪ್ರವೇಶಕ್ಕೆ ಅವಕಾಶಕ್ಕೆ ಅಗತ್ಯ ಇರುವ ಎಲ್ಲ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಆ ಬಳಿಕ ಪ್ರವಾಸಿಗರಿಗೆ ಪ್ರವೇಶ ಅವಕಾಶ ನೀಡಲು ಉದ್ದೇಶಿಸಲಾಗುತ್ತಿದೆ’ ಎಂದರು.

ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು, ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ.ಹದ್ದಣ್ಣವರ್‌, ಉಪ ವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಇತರೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT