ಚಾಮರಾಜನಗರ: ಇದೇ 21ರಂದು ನಡೆಯಲಿರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರೊಂದಿಗೆ ಶಾಂತಿ, ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಮನವಿ ಮಾಡಿದರು.
ಬಕ್ರೀದ್ ಹಬ್ಬದ ಆಚರಣೆ ಸಂಬಂಧ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು, ‘ಕೋವಿಡ್ ಸಂಪೂರ್ಣವಾಗಿ ಕಡಿಮೆಯಾಗದಿರುವ ಕಾರಣ ಅದನ್ನು ಮನದಲ್ಲಿಟ್ಟುಕೊಂಡು ಹಬ್ಬ ಆಚರಣೆ ಮಾಡಬೇಕು. ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು.
‘ಬಕ್ರೀದ್ ದಿನ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿದೆ. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲನೆ ಮಾಡಬೇಕು. 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ನಿರ್ವಹಿಸಬಹುದು. ಅಧಿಕ ಜನರು ಬಂದರೆ ಪಂಕ್ತಿ ಅನುಸಾರ ಪ್ರಾರ್ಥನೆ ಮಾಡಬೇಕು.ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಎಲ್ಲ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು’ ಎಂದು ಡಾ.ಎಂ.ಆರ್.ರವಿ ಅವರು ತಿಳಿಸಿದರು.
‘ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮತ್ತು ಬಲಿದಾನ ನಡೆಸುವುದನ್ನು ನಿಷೇಧಿಸಲಾಗಿದೆ. ಹಿಂದಿನಿಂದಲೂ ಜಿಲ್ಲೆಯಲ್ಲಿ ಶಾಂತಿಯುತವಾಗಿ ಹಬ್ಬವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಅದೇ ರೀತಿ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಆಚರಿಸಬೇಕು’ ಎಂದು ಸಲಹೆ ನೀಡಿದರು.
ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ವೀರಭದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಮುಸ್ಲಿಂ ಸಮುದಾಯದ ಮುಖಂಡರಾದ ಮಹಮ್ಮದ್ ಜಿಯಾವುಲ್ಲಾ, ಸಯ್ಯದ್ ರಫಿ, ಇತರೆ ಮುಖಂಡರು, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಕುಮಾರ್, ತಹಶೀಲ್ದಾರ್‌ರಾದ ಚಿದಾನಂದ ಗುರುಸ್ವಾಮಿ, ರವಿಶಂಕರ್, ನಗರಸಭೆ ಆಯುಕ್ತ ಕರಿಬಸವಯ್ಯ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.