ಬುಧವಾರ, ಜನವರಿ 19, 2022
24 °C
ಅಧಿಕಾರಿಗಳ ಸಭೆ, ಇಲಾಖೆಗಳ ನಡುವೆ ಸಮನ್ವಯಕ್ಕೆ ಸಲಹೆ

ಚಾಮರಾಜನಗರ: ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಡಿಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ತಡೆಯಲು ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು, ಸಂಪರ್ಕಿತರನ್ನು ಗುರುತಿಸಿ ಕ್ವಾರೆಂಟೈನ್‌ ಗೊಳಿಸುವುದು ಹಾಗೂ ಲಸಿಕಾಕರಣ ಕಾರ್ಯವನ್ನು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಸಂಬಂಧ ಪರೀಕ್ಷೆ, ಸಂಪರ್ಕಿತರ ಗುರುತಿಸಿರುವುದು, ಚಿಕಿತ್ಸೆ ಹಾಗೂ ಲಸಿಕೆ ನೀಡುವಿಕೆಗೆ ಸಂಬಂಧಿಸಿದಂತೆ ನಡೆದ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ನೋಡೆಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ತಮಿಳುನಾಡು ಹಾಗೂ ಕೇರಳ ರಾಜ್ಯದ ಗಡಿಭಾಗದಲ್ಲಿದೆ. ನೆರೆಹೊರೆ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲ ತಹಶೀಲ್ದಾರರು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಬಿಇಒ, ಸಿಡಿಪಿಒ, ಇತರೆ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು, ನೋಡೆಲ್ ಅಧಿಕಾರಿಗಳು ಹೊಂದಾಣಿಕೆ, ಸಮನ್ವಯದಿಂದ ಹಾಗೂ ಜವಾಬ್ದಾರಿಯುತವಾಗಿ ಕಾ ಕಾರ್ಯನಿರ್ವಹಣೆಗೆ ಮುಂದಾಗಬೇಕು’ ಎಂದರು.

‘ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ರೋಗದ ಲಕ್ಷಣ ಇರುವವರ ಗಂಟಲುದ್ರವ ಸಂಗ್ರಹಿಸಿ 24 ಗಂಟೆಯೊಳಗಾಗಿ ಮಾಹಿತಿ ನೀಡಬೇಕು.  ರೋಗ ಲಕ್ಷಣ ಇಲ್ಲದವರಿಗೆ ಅವಶ್ಯವಾದ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಪಾಸಿಟಿವ್ ಫಲಿತಾಂಶ ಬಂದ ತಕ್ಷಣವೇ ರೋಗಿಯ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಹಚ್ಚಿ ಅವರನ್ನು ಕ್ವಾರೆಂಟೈನ್‌ನಲ್ಲಿರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಕೋವಿಡ್‌ನ ಮೊದಲು ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದ್ದ ಅಧಿಕಾರಿಗಳು ಪ್ರಸ್ತುತ ಸಂದರ್ಭದಲ್ಲೂ ಮುಂದುವರೆಯಲಿದ್ದಾರೆ’ ಎಂದು ತಿಳಿಸಿದರು.

‘ಲಸಿಕಾಕರಣದಲ್ಲಿ ರಾಜ್ಯದಲ್ಲಿ ಜಿಲ್ಲೆ 27ನೇ ಸ್ಥಾನದಲ್ಲಿದ್ದು, ಮೊದಲ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ 86ರಷ್ಟು ಪ್ರಗತಿಯಾಗಿದೆ. ಎರಡನೇ ಡೋಸ್ ಲಸಿಕೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬೇಕಾಗಿದೆ. ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳಲ್ಲಿ ಎರಡನೇ ಡೋಸ್ ಲಸಿಕೆ ನೀಡಿಕೆ ಪ್ರಮಾಣ ಕಡಿಮೆ ಇದ್ದು, ಜನರಿಗೆ ಲಸಿಕೆಯ ಪರಿಣಾಮಕಾರಿ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಅಧಿಕಾರಿಗಳು ಯಾವುದೇ ಸಬೂಬು ನೀಡದೇ ಜಿಲ್ಲೆಯ ಯಾವ ಭಾಗದಲ್ಲಿ ಕಡಿಮೆ ಪ್ರಗತಿಯಾಗಿರುವೆಡೆ ಆದ್ಯತೆ ನೀಡಿ ಲಸಿಕಾಕರಣ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಕಾರ್ಯೋನ್ಮುಖರಾಗಬೇಕು’ ಎಂದು ತಾಕೀತು ಮಾಡಿದರು.

‘ಜಿಲ್ಲೆಯಲ್ಲಿ ಅಂತರರಾಜ್ಯ ಚೆಕ್‌ಪೋಸ್ಟ್‌ಗಳನ್ನು ಸಕ್ರಿಯಗೊಳಿಸಲಾಗಿದ್ದು, ಈಗಾಗಲೇ ಗುಂಡ್ಲುಪೇಟೆ ತಾಲ್ಲೂಕಿನ ಮೂಲೆಹೊಳೆ, ಕೆಕ್ಕನಹಳ್ಳ ಹಾಗೂ ಚಾಮರಾಜನಗರ ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವಿಸಿಟರ್ಸ್‌ ಹಾಜರಾತಿ ಪುಸ್ತಕವನ್ನು ಕಡ್ಡಾಯವಾಗಿ ಇಡಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಬಂದು ಹೋಗುವ ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ನಿಗಾ ವಹಿಸಬೇಕು. ಪ್ರತಿಯೊಬ್ಬರ ಆರ್‌ಟಿ‍ಪಿಸಿಆರ್‌ ನೆಗೆಟಿವ್ ವರದಿಯನ್ನು ಕಡ್ಡಾಯ ಪರಿಶೀಲನೆ ಮಾಡಬೇಕು’ ಎಂದು ಚಾರುಲತಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪ ವಿಭಾಗಾಧಿಕಾರಿ ಡಾ.ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ನೋಡೆಲ್ ಅಧಿಕಾರಿಗಳು ಸಭೆಯಲ್ಲಿದ್ದರು.

ದಂಡ ವಿಧಿಸಲು ಸೂಚನೆ

‘ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಿಕೆ, ಅಂತರ ಕಾಪಾಡುವಿಕೆ ಸೇರಿದಂತೆ ಕೋವಿಡ್ ನಿಯಂತ್ರಣಕ್ಕಾಗಿ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಎಲ್ಲ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ಅರಿವು ಮೂಡಿಸಬೇಕು. ಜನದಟ್ಟಣೆಯಾಗುವ ಭಾಗಗಳಲ್ಲಿ ನಿಯಮ ಉಲ್ಲಂಘನೆಗೆ ದಂಡ ವಿಧಿಸಬೇಕು. ಈ ಬಗ್ಗೆ ಸ್ಥಳೀಯ ನೋಡೆಲ್ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

16 ಕೋವಿಡ್‌ ಕೇಂದ್ರಗಳು

‘ಜಿಲ್ಲೆಯಲ್ಲಿ 16 ಕೋವಿಡ್ ಕೇರ್ ಕೆಂದ್ರಗಳಿದ್ದು, ಎಲ್ಲ ಕೇಂದ್ರಗಳಿಗೂ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕೋವಿಡ್ ಚಿಕಿತ್ಸೆಗಾಗಿ 2ರಿಂದ 3 ತಿಂಗಳಿಗೆ ಅಗತ್ಯವಿರುವಷ್ಟು ಔಷಧ, ಆಮ್ಲಜನಕ ದಾಸ್ತಾನು ಮಾಡಿಕೊಳ್ಳಬೇಕು. ನಿರ್ಮಿತಿ ಕೇಂದ್ರದ ಅಧಿಕಾರಿಗಳು ಕೋವಿಡ್ ಕೇರ್ ಕೇಂದ್ರಗಳಲ್ಲಿ ಬಾಕಿ ಇರುವ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಎಲ್ಲ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಕೋವಿಡ್ ಕೇರ್ ಕೇಂದ್ರಗಳ ಸುಸ್ಥಿತಿ, ವ್ಯವಸ್ಥೆಗಳನ್ನು ಪರಿಶೀಲಿಸಬೇಕು’ ಎಂದು ನಿರ್ದೇಶನ ನೀಡಿದರು.

***

ಪ್ರತಿದಿನ 20 ಸಾವಿರ ಜನರಿಗೆ ಲಸಿಕೆ ನೀಡಬೇಕು. ಇಲಾಖೆಗಳು ತಮ್ಮ ಫಲಾನುಭವಿಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಬೇಕು

-ಚಾರುಲತಾ ಸೋಮಲ್‌, ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು