ಗುರುವಾರ , ಡಿಸೆಂಬರ್ 3, 2020
23 °C
ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಎಚ್ಚರಿಕೆ

ಎಸ್‌ಸಿ, ಎಸ್‌ಟಿ ಅಭಿವೃದ್ಧಿ; ಪ್ರಗತಿ ಸಾಧಿಸದಿದ್ದರೆ ಗಂಭೀರ ಕ್ರಮ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ವಿವಿಧ ಇಲಾಖೆಗಳು ಪರಿಶಿಷ್ಟ ಜಾತಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯಡಿ ನಿಗದಿಪಡಿಸಲಾಗಿರುವ ಪ್ರಗತಿಯನ್ನು ಸಾಧಿಸದಿದ್ದಲ್ಲಿ ಕಾಯ್ದೆ ಅನುಸಾರ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಎಚ್ಚರಿಕೆ ನೀಡಿದರು.

ವಿವಿಧ ಇಲಾಖೆಗಳು, ಪರಿಶಿಷ್ಟ ಜಾತಿ ವಿಶೇಷ ಘಟಕ ಹಾಗೂ ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ ಅನುಷ್ಠಾನಗೊಳಿಸಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿ ಇಲಾಖೆಗಳು ಪರಿಶಿಷ್ಟರ ಕಲ್ಯಾಣಕ್ಕಾಗಿ ರೂಪಿಸಿರುವ ಅಭಿವೃದ್ದಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಇಲಾಖೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರ ಅಭ್ಯುದಯಕ್ಕಾಗಿ ಯೋಜನೆಗಳನ್ನು ನಿಗದಿ ಮಾಡಿ ಪ್ರತ್ಯೇಕ ಅನುದಾನ ಒದಗಿಸಲಾಗಿದೆ. ಈ ಅನುದಾನ ಸಮರ್ಪಕವಾಗಿ ವಿನಿಯೋಗವಾಗಬೇಕು. ಕಾಲಮಿತಿಯೊಳಗೆ ಪ್ರಗತಿ ಸಾಧಿಸಬೇಕು’ ಎಂದರು. 

‘ಪ್ರತಿ ಇಲಾಖೆಗಳು ಪರಿಶಿಷ್ಟ ಜಾತಿ, ವರ್ಗಗಳ ಅನುದಾನ ಅನುಸಾರ ತಯಾರಿಸಿರುವ ಕ್ರಿಯಾ ಯೋಜನೆಯಂತೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಕ್ರಿಯಾ ಯೋಜನೆ ಅನುಮೋದನೆ ಪಡೆಯದೆ ಇರುವ ಇಲಾಖೆಗಳು ತ್ವರಿತವಾಗಿ ಅನುಮೋದನೆ ಪಡೆದು ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯ ವೇಳೆಗೆ ಹೆಚ್ಚಿನ ಪ್ರಗತಿ ಸಾಧಿಸಬೇಕು’ ಎಂದು ಡಾ.ಎಂ.ಆರ್.ರವಿ ಅವರು ತಾಕೀತು ಮಾಡಿದರು. 

‘ನಗರ ಸ್ಥಳೀಯ ಸಂಸ್ಥೆಗಳು ಪರಿಶಿಷ್ಟರ ಕಲ್ಯಾಣಕ್ಕಾಗಿ ನಿಗದಿಯಾಗಿರುವ ಯೋಜನೆಗಳ ಜಾರಿಗೆ ಗಮನಹರಿಸಬೇಕು. ಈಗಾಗಲೇ ಆರಂಭಿಸಿರುವ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರಬೇಕು. ಫಲಾನುಭವಿಗಳ ಆಯ್ಕೆಯಲ್ಲಾಗಲೀ ಅಥವಾ ಬೇರೆ ಯಾವುದೇ ಕೆಲಸ ಬಾಕಿ ಉಳಿದಿದ್ದಲ್ಲಿ ಇನ್ನೊಂದು ತಿಂಗಳೊಳಗೆ ಪೂರ್ಣಗೊಳಿಸಿ ನಿಗದಿತ ಗುರಿ ತಲುಪಬೇಕು’ ಎಂದು ಸೂಚಿಸಿದರು.

‘ನಿಗಮಗಳು ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಅತಿ ಶೀಘ್ರವಾಗಿ ನೆರವು ಪಡೆಯಲು ಕ್ರಮ ತೆಗೆದುಕೊಳ್ಳಬೇಕು. ಸಾಲದಂತಹ ಆರ್ಥಿಕ ಸಹಾಯ ಕಾರ್ಯಕ್ರಮಗಳು ವಿಳಂಬವಾಗಿ ತಲುಪಬಾರದು. ಇಲಾಖೆಯ ಹಿರಿಯ ಅಧಿಕಾರಿಗಳು ಬ್ಯಾಂಕ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಫಲಾನುಭವಿಗಳು ಕಾಲ ಮಿತಿಯೊಳಗೆ ಸೌಲಭ್ಯಗಳನ್ನು ಪಡೆಯಲು ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಯೋಜನೆಗಳ ಅನುಷ್ಠಾನ ಪ್ರಗತಿಯನ್ನು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಪರಿಶೀಲಿಸಬೇಕು. ತಾಲ್ಲೂಕುಗಳಿಗೆ ಭೇಟಿ ನೀಡಿ ಕಾರ್ಯಕ್ರಮಗಳ ಸಾಧನೆ ಹೇಗಿದೆ ಎಂಬ ಬಗ್ಗೆ ಖುದ್ದು ವೀಕ್ಷಿಸಬೇಕು. ಕ್ಷೇತ್ರ ಪ್ರವಾಸ ಕೈಗೊಳ್ಳುವ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದನ್ನು ಸಹಿಸಲಾಗುವುದಿಲ್ಲ. ತಾಲ್ಲುಕು ಕಚೇರಿಗಳಿಗೆ ಭೇಟಿ ಕೊಟ್ಟು ಪ್ರಗತಿ ಪರಾಮರ್ಶೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಅವರು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣ ರಾವ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾಗೀರಥಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಲೀಡ್ ಬ್ಯಾಂಕ್ ಸಹಾಯಕ ಮ್ಯಾನೇಜನರ್‌ ವಿಜಯಕುಮಾರ್ ಚೌರಾಸಿಯ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.