ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಕಲ್ಯಾಣ ಯೋಜನೆಗಳ ಪ್ರಗತಿಗೆ ಸೂಚನೆ

2020-21ನೇ ಸಾಲಿನ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ
Last Updated 6 ಫೆಬ್ರುವರಿ 2021, 15:18 IST
ಅಕ್ಷರ ಗಾತ್ರ

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಪಯೋಜನೆಯಡಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆ ಕಾರ್ಯಕ್ರಮಗಳ ಪ್ರಗತಿಯನ್ನು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶನಿವಾರ ಸೂಚನೆ ನೀಡಿದರು.

2020–21ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಕ್ಕಾಗಿ ವಿವಿಧ ಇಲಾಖೆಗಳಲ್ಲಿ ಪ್ರತ್ಯೇಕ ಅನುದಾನ ನಿಗದಿಯಾಗಿದೆ. ಇದನ್ನು ನಿರ್ದಿಷ್ಟ ಉದ್ದೇಶಗಳಿಗಾಗಿಯೇ ಬಳಕೆ ಮಾಡಬೇಕು. ಆರ್ಥಿಕ ವರ್ಷ ಅಂತ್ಯಗೊಳ್ಳುವ ಸಮಯ ಸಮೀಪಿಸುತ್ತಿರುವುದರಿಂದ ಅನುಮೋದನೆಗೊಂಡಿರುವ ಎಲ್ಲಾ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಅವರು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ವಾಲ್ಮೀಕಿ ಅಭಿವೃದ್ದಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಕಾಲ ಮಿತಿಯೊಳಗೆ ಪೂರ್ಣವಾಗಬೇಕು. ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ತಲುಪಬೇಕು. ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಆರ್ಥಿಕ ನೆರವಿನ ಅರ್ಜಿಗಳು ತುರ್ತಾಗಿ ವಿಲೇವಾರಿ ಮಾಡಿ ಸವಲತ್ತು ನೀಡಬೇಕು ಎಂದರು.

ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಕೌಶಲ್ಯ ಪರಿಕರಗಳನ್ನು ಆದಷ್ಟು ಬೇಗನೆ ಫಲಾನುಭವಿಗಳಿಗೆ ವಿತರಿಸಬೇಕು. ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದ ಅಧಿಕಾರಿಗಳು ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಸಕಾಲದಲ್ಲಿ ಪೂರ್ಣ ಮಾಡಬೇಕು ಎಂದು ಡಾ.ಎಂ.ಆರ್‌.ರವಿ ಅವರು ಸೂಚಿಸಿದರು.

ವರದಿ ಸಲ್ಲಿಸಿ: ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇನ್ನಿತರೆ ಇಲಾಖೆಗಳಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಗುರಿ ಅನುಸಾರ ಯೋಜನೆಗಳನ್ನು ನಿರ್ದಿಷ್ಟ ಅವದಿಯೊಳಗೆ ಅನುಷ್ಠಾನಗೊಳಿಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾಗಿರಥಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ದೀಪಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಬಸವರಾಜು, ಲೀಡ್ ಬ್ಯಾಂಕ್ ಮ್ಯಾನೇಜರ್‌ ವಿಜಯ್ ಕುಮಾರ್ ಚೌರಾಸಿಯಾ, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಭಾಸ್ಕರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT