ಸೋಮವಾರ, ಜನವರಿ 17, 2022
20 °C

ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಡಿ.ಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್ ವ್ಯಾಪಿಸದಂತೆ ತಡೆಯಲು ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಳ ಮಾಡುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶುಕ್ರವಾರ ಸೂಚನೆ ನೀಡಿದರು.

ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿ ಹಾಗೂ ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನ ನೀಡಬೇಕು. ಈಗಿರುವ ಪರೀಕ್ಷಾ ಸಂಖ್ಯೆಯ ಗುರಿಯನ್ನು ಪರಿಷ್ಕರಿಸಲಾಗಿದೆ. ಆ ಪ್ರಕಾರ, ಪ್ರತಿನಿತ್ಯ ಕೋವಿಡ್ ಪರೀಕ್ಷೆಯನ್ನು ಜಿಲ್ಲೆಯಾದ್ಯಂತ ವ್ಯಾಪಕವಾಗಿ ನಡೆಸಬೇಕು’ ಎಂದರು.

‘ನಗರ, ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿರುವ ಜನನಿಬಿಡ ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಕೈಗೊಳ್ಳಬೇಕು. ಮಾರುಕಟ್ಟೆ, ಬಸ್ ನಿಲ್ದಾಣ, ಇನ್ನಿತರ ವ್ಯಾಪಾರ ಸ್ಥಳಗಳಲ್ಲಿ ಪರೀಕ್ಷೆ ಮಾಡಲು ಕ್ರಮ ವಹಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿಯೂ ಸಂಚಾರಿ ವಾಹನಗಳ ಮೂಲಕವೂ ಕೋವಿಡ್ ಪರೀಕ್ಷೆಗೆ ಕೂಡಲೇ ಚಾಲನೆ ನೀಡಬೇಕು. ಜನರಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು. 

‘ಹೋಬಳಿ ಮಟ್ಟದ ನೋಡೆಲ್ ಅಧಿಕಾರಿಗಳು ಕೋವಿಡ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರತಿದಿನ ಕೈಗೊಳ್ಳಲಾಗುತ್ತಿರುವ ಪರೀಕ್ಷಾ ಪ್ರಗತಿ ಪರಿಶೀಲಿಸಬೇಕು. ಜೊತೆಗೆ ಆಯಾ ಹೋಬಳಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಾಮರ್ಶಿಸಬೇಕು’ ಎಂದು ನಿರ್ದೇಶನ ನೀಡಿದರು.

ಕೋವಿಡ್ ಲಸಿಕಾಕರಣದ ಕುರಿತು ಚರ್ಚಿಸಿದ ಚಾರುಲತಾ ಅವರು, ‘15ರಿಂದ 18 ವರ್ಷದ ಮಕ್ಕಳಿಗೆ ನೀಡುವ ಕೋವಿಡ್ ಲಸಿಕೆ ಕಾರ್ಯದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಸ್ತುತ ಅಗ್ರಸ್ಥಾನದಲ್ಲಿದೆ. ಇದಕ್ಕಾಗಿ ಆರೋಗ್ಯ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿ ಹಾಗೂ ಇತರರನ್ನು ಅಭಿನಂದಿಸುತ್ತೇನೆ’ ಎಂದರು. 

‘ಜಿಲ್ಲೆಯ ಮೂಲೆಹೊಳೆ, ಕೆಕ್ಕನಹಳ್ಳ ಸೇರಿದಂತೆ ವಿವಿಧ ಕಡೆ ಇರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರೆಸಬೇಕು. ಮುಂಬರುವ ದಿನಗಳಲ್ಲಿ ಕೋವಿಡ್ ಉಲ್ಬಣಿಸುವ ಸಂದರ್ಭ ಸಂಭವಿಸಿದ್ದಲ್ಲಿ ಅದಕ್ಕಾಗಿ ಸಮರ್ಥವಾಗಿ ಎಲ್ಲ ಸಿದ್ಧತೆಗಳನ್ನು ಕೈಗೊಂಡಿರಬೇಕು’ ಎಂದು ತಿಳಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮಾತನಾಡಿ, ‘ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಚೆಕ್‌ಪೋಸ್ಟ್‌ಗಳ ಕಾರ್ಯ ನಿರ್ವಹಣೆ ಇನ್ನಿತರ ಅಗತ್ಯ ಕ್ರಮಗಳಿಗೆ ಗಮನಹರಿಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ ಮಾತನಾಡಿ, ‘ಕೋವಿಡ್ ಸಂಬಂಧ ನಿಯೋಜನೆಗೊಂಡಿರುವ ಹೋಬಳಿ ಮಟ್ಟದ ನೋಡೆಲ್ ಅಧಿಕಾರಿಗಳು ಕಾರ್ಯ ಕ್ಷೇತ್ರಗಳಿಗೆ ಭೇಟಿ ನೀಡಿದ ವೇಳೆ ಜನರಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ವೈದ್ಯಕೀಯ ಕಾಲೇಜಿನ ಡೀನ್ ಡಾ.ಸಂಜೀವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ಆಸ್ಪತ್ರೆಯ ಕೋವಿಡ್ ನೋಡೆಲ್ ಅಧಿಕಾರಿ ಡಾ. ಮಹೇಶ್, ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಅಬಕಾರಿ ಉಪ ಆಯುಕ್ತ ಕೆ.ಎಸ್‌.ಮುರಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.