ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ: ಸಿದ್ಧತೆಗೆ ಡಿ.ಸಿ ಸೂಚನೆ

Last Updated 11 ಮೇ 2022, 16:31 IST
ಅಕ್ಷರ ಗಾತ್ರ

ಚಾಮರಾಜನಗರ: ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಸಂಬಂಧ ಇದೇ 21, 22ರಂದು ಜಿಲ್ಲಾ ಕೇಂದ್ರದಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಬುಧವಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು ‘ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಅನುಮಾನಗಳಿದ್ದರೆ ಶೀಘ್ರವಾಗಿ ಪರಿಹರಿಸಿಕೊಂಡು ಪರೀಕ್ಷೆಯ ಯಶಸ್ವಿ ಕಾರ್ಯನಿರ್ವಹಣೆಗೆ ಮುಂದಾಗಬೇಕು’ ಎಂದರು.

‘ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಎರಡು ದಿನ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ದೋಷರಹಿತವಾಗಿ ನಡೆಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕಾರ್ಯಕ್ಕೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ನಗರಸಭೆಯ ಅಧಿಕಾರಿಗಳನ್ನು ಫ್ಲೈಯಿಂಗ್ ಸ್ಕ್ಯಾಡ್ ಆಗಿ ನೇಮಿಸಲಾಗುವುದು. ನಿಯೋಜಿತ ಅಧಿಕಾರಿಗಳು ಪರೀಕ್ಷೆಯಲ್ಲಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

‘ಪರೀಕ್ಷಾ ಕೊಠಡಿಯಲ್ಲಿ ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳಿರುವಂತೆ ನೋಡಿಕೊಳ್ಳಬೇಕು. ಅಕ್ರಮಗಳಿಗೆ ಅವಕಾಶವಾಗದಂತೆ ಪರೀಕ್ಷಾ ಕೇಂದ್ರಗಳ ಎಲ್ಲ ಕೊಠಡಿಗಳಲ್ಲಿ ಸಿ.ಸಿ. ಟಿವಿ ಅಳವಡಿಸಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೊಠಡಿಗಳಲ್ಲಿ ಮೊಬೈಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾನಿಕ್ ಕೈಗಡಿಯಾರ, ಮೈಕ್ರೋಫೋನ್ ಸೇರಿದಂತೆ ಎಲ್ಲ ಬಗೆಯ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ನಿಷೇಧಿಸಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಖಜಾನೆ ಉಪನಿರ್ದೇಶಕಿ ಸುಲೋಚನಾ, ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಪಿ.ಮಂಜುನಾಥ್‌, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಇದ್ದರು.

ಎಂಟು ಪರೀಕ್ಷಾ ಕೇಂದ್ರ

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ಎನ್‌.ಮಂಜುನಾಥ್ ಮಾತನಾಡಿ ‘ಪರೀಕ್ಷೆಗಾಗಿ ನಗರದಲ್ಲಿ ಎಂಟು ಪರೀಕ್ಷಾ ಕೇಂದ್ರ ಗುರುತಿಸಲಾಗಿದೆ. ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ, ಜೆ.ಎಸ್.ಎಸ್ ಬಾಲಕರ ಪ್ರೌಢಶಾಲೆ, ಸತ್ಯಮಂಗಲ ರಸ್ತೆಯಲ್ಲಿರುವ ಬಾಲಕರ ಸರ್ಕಾರಿ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಸಂತ ಜೋಸೆಫರ ಪ್ರೌಢಶಾಲೆ, ಸೋಮವಾರಪೇಟೆಯಲ್ಲಿರುವ ಎಂ.ಸಿ.ಎಸ್ ಪ್ರೌಢಶಾಲೆ, ಕರಿನಂಜನಪುರ ಶ್ರೀದೇವಿ ಟೆಕ್ಸ್‌ಟೈಲ್ಸ್ ಹತ್ತಿರದ ಯೂನಿವರ್ಸಲ್ ಪ್ರೌಢಶಾಲೆ, ಸೇವಾಭಾರತಿ (ಇಂಗ್ಲಿಷ್‌ ಮಾಧ್ಯಮ) ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT