ಬುಧವಾರ, ಜೂನ್ 16, 2021
21 °C
ಅಂಗಡಿಗಳ ಮುಂದೆ ಜನಸಂದಣಿ ತಡೆಯುವ ಮಾರ್ಗೋಪಾಯಗಳ ಕುರಿತು ಚರ್ಚೆ

ಜನದಟ್ಟಣೆ ತಡೆಯಲು ಜಿಲ್ಲಾಧಿಕಾರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್ ತಡೆಯಲು ಜಿಲ್ಲೆಯಲ್ಲಿ ಜಾರಿಗೆ ತಂದಿರುವ ಕಠಿಣ ಲಾಕ್‌ಡೌನ್‌ನಿಂದ ವಾರದ ಮೂರು ದಿನಗಳಲ್ಲಿ ಅಂಗಡಿಗಳ ಮುಂದೆ ಉಂಟಾಗುತ್ತಿರುವ ಜನಸಂದಣಿಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.

ಈ ಕುರಿತು ಗುರುವಾರ ಸಭೆ ನಡೆಸಿದ ಜಿಲ್ಲಾಧಿಕಾರಿ ಎಂ.ಆರ್.ರವಿ, ‘ಜನಸಂದಣಿ ತಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಂಕು ತಡೆಗಾಗಿ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ. ಸೋಮವಾರದಿಂದ ಬುಧವಾರದವರೆಗೆ ಬೆಳಗಿನ ಸಮಯದಲ್ಲಿ ಮಾತ್ರ ದಿನಸಿ ಇತರೆ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಅವಧಿಯಲ್ಲಿ ಹೆಚ್ಚು ಜನಸಂದಣಿಯಾಗುತ್ತಿದ್ದು, ಪರಸ್ಪರ ಅಂತರ ಪಾಲನೆಯಾಗುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇದು ಸೋಂಕು ಹರಡಲು ಕಾರಣವಾಗಲಿದೆ. ದಿನಸಿ ಅಂಗಡಿಗಳೇ ಇರಲಿ ತರಕಾರಿ, ಹಣ್ಣು ಮಾರಾಟ ಸ್ಥಳಗಳೇ ಇರಲಿ ಎಲ್ಲಿಯೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಹಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು. ವರ್ತಕರು ವ್ಯಾಪಾರಿಗಳಿಗೂ ಅಂತರದ ಮಹತ್ವದ ಬಗ್ಗೆ ತಿಳಿಸಿಕೊಡಬೇಕು ಎಂದು ಅವರು ಹೇಳಿದರು.

ಕೋವಿಡ್ ಕರ್ತವ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಕುರಿತು ಕಡ್ಡಾಯವಾಗಿ ನೋಡಲ್ ಅಧಿಕಾರಿಗಳು ದಿನವೂ ಮಾಹಿತಿ ನೀಡಬೇಕು. ಕೋವಿಡ್ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲಾ ನೌಕರರಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಐ.ಎಲ್.ಐ, ಸಾರಿ ಪ್ರಕರಣಗಳ ಪತ್ತೆಹಚ್ಚುವಿಕೆಗಾಗಿ ನಡೆಸಲಾಗುತ್ತಿರುವ ಮನೆಮನೆ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಗ್ರಾಮಾಂತರ ಭಾಗಗಳಲ್ಲಿ  ಸ್ಥಳದಲ್ಲಿಯೇ ಕೋವಿಡ್ ಪರೀಕ್ಷೆ ಮಾಡುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಇದೇ ವೇಳೆ ಕೋವಿಡ್-19 ರ ಸಂಕಷ್ಟದ ಸಮಯದಲ್ಲಿ ಕಾರ್ಮಿಕರ ಸಮಸ್ಯೆ ಆಲಿಸಿ ಪರಿಹರಿಸಲು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿರುವ ಕಾರ್ಮಿಕ ಇಲಾಖೆ ವತಿಯಿಂದ ತೆರೆಯಲಾಗಿರುವ ಸಹಾಯವಾಣಿ 155214 ಕುರಿತ ಮಾಹಿತಿ ಪೋಸ್ಟರ್‌ಗಳನ್ನು ಅವರು ಬಿಡುಗಡೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ಡಿವೈಎಸ್‍ಪಿ ಅನ್ಸರ್ ಅಲಿ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಆರ್.ಸಿ.ಎಚ್ ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ನಗರಸಭೆ ಆಯುಕ್ತರಾದ ಕರಿಬಸವಯ್ಯ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ವೀರಭದ್ರಯ್ಯ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹದೇವಸ್ವಾಮಿ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಮಹೇಶ್, ಇತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.