ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜೈಶ್ರೀರಾಮ್ ಘೋಷಣೆ
Published 21 ಫೆಬ್ರುವರಿ 2024, 4:39 IST
Last Updated 21 ಫೆಬ್ರುವರಿ 2024, 4:39 IST
ಅಕ್ಷರ ಗಾತ್ರ

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿರುವ ಹರದನಹಳ್ಳಿಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿ ಬಳಗ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಬಳಗದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.

‘ಜಾಗೃತಿ ಜಾಥಾವು ಇದೇ 8ರಂದು ಹರದನಹಳ್ಳಿ ಗ್ರಾಮ ಪಂಚಾಯಿತಿಗೆ ಬಂದು ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಜೈಭೀಮ್ ಘೋಷಣೆ ಕೂಗುತ್ತಿದ್ದರು. ಈ ಘೋಷಣೆಗೆ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ. ಪಕ್ಕದಲ್ಲೇ ಕುಳಿತಿದ್ದ ಶಿಕ್ಷಕರ ಗಮನಕ್ಕೆ ಬಂದ ಮಕ್ಕಳಿಗೆ ಜೈಶ್ರೀರಾಮ್ ಘೋಷಣೆ ಕೂಗದಂತೆ ಹೇಳಿದ್ದಾರೆ. ಈ ಕಾರ್ಯಕ್ರಮ ಮುಗಿದ ನಂತರ ಶಿಕ್ಷಕರೊಬ್ಬರು ಘಟನೆ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಮುಖ್ಯ ಶಿಕ್ಷಕರು ಊರಿನ ಕೆಲವು ಕಿಡಿಕೇಡಿಗಳ ಜೊತೆ ಕೈಜೋಡಿಸಿ ಮಕ್ಕಳಿಗೆ ಎಚ್ಚರಿಕೆ ನೀಡದೆ, ಇದನ್ನು ಗಮನಕ್ಕೆ ತಂದ ಶಿಕ್ಷಕರ ವಿರುದ್ಧವೇ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಸಿಕವಾಗಿ ತೊಂದರೆ ನೀಡುತ್ತಿದ್ದಾರೆ. ಮಾಡದಿರುವ ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯ ಮಾಡುತ್ತಿದ್ದಾರೆ’ ಎಂದು ಮನವಿಯಲ್ಲಿ ದೂರಿದ್ದಾರೆ.

‘ಗ್ರಾಮದ ಮುಖಂಡರ ಜೊತೆ ಘಟನೆ ಬಗ್ಗೆ ಚರ್ಚಿಸಿ ಗ್ರಾಮದ ಮಹಿಳಾ ಸಂಘದ ವತಿಯಿಂದ ಕಾರ್ಯಕ್ರಮದ ದಿನ ಅಂಬೇಡ್ಕ‌ರ್‌ ಅವರಿಗೆ ಮತ್ತು ಸಂವಿಧಾನಕ್ಕೆ ಅಪಮಾನ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಶಾಲಾ 'ಹಂತದಲ್ಲಿ ಶಿಸ್ತುಕ್ರಮ ಕೈಗೊಳ್ಳಬೇಕೆಂದು 12 ರಂದು ಶಾಲೆಯ ಮುಖ್ಯ ಶಿಕ್ಷಕರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಘಟನೆ ನಡೆದು ಇಷ್ಟು ದಿನಗಳಾದರೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಮುಖ್ಯ ಶಿಕ್ಷಕರು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ’ ಎಂದು ದೂರಿದ್ದಾರೆ.

‘ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಿ, ನೊಂದ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡಿ, ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡುವಂತೆ ಹಾಗೂ ವಿದ್ಯಾರ್ಥಿಗಳನ್ನು ಜೈಶ್ರೀರಾಮ್ ಘೋಷಣೆ ಕೂಗಲು ಪ್ರೇರೇಪಿಸಿದ ಕೆಲವು ಕಿಡಿಕೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಶಿಸ್ತುಕ್ರಮಕೈಗೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಬಳಗದ ಅಧ್ಯಕ್ಷ ಎಸ್.ಪಿ.ಮಹೇಶ್, ಮುಖಂಡರಾದ ವಾಸು ಹೊಂಡರಬಾಳು, ಸಿದ್ದರಾಜು ದೊಡ್ಡರಾಯಪೇಟೆ, ರಾಜಶೇಖರ ಹೆಗ್ಗೋಠಾರ, ಚಂದಕವಾಡಿ ರಾಜಶೇಖರ, ರಾಜು ರಾಮಸಮುದ್ರ, ಯೋಗೀಶ್ ಸಿದ್ದಯ್ಯನಪುರ, ಸ್ವಾಮಿ ಹೊಂಗನೂರು, ರಂಗಸ್ವಾಮಿ ಗಾಳೀಪುರ, ಕೃಷ್ಣಮೂರ್ತಿ, ಕಾಂತರಾಜು ಮನು, ಬಸವಣ್ಣ, ಸ್ವಾಮಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT