ಸೋಮವಾರ, ಡಿಸೆಂಬರ್ 6, 2021
27 °C

ಟೌನ್‌ಶಿಪ್‌: ರೈಲ್ವೆ ನಿಲ್ದಾಣದ ಬಳಿ ಸ್ಥಳ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ವಸತಿ ಸಚಿವ ವಿ.ಸೋಮಣ್ಣ ಅವರು ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ವೇಳೆ 100 ಎಕರೆಯಲ್ಲಿ ಟೌನ್‌ ಶಿಪ್‌ ನಿರ್ಮಾಣ ಮಾಡುವ ವಿಚಾರವನ್ನು ಪ್ರಸ್ತಾಪಿಸಿದ ಬೆನ್ನಲ್ಲೇ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಬುಧವಾರ ಅಧಿಕಾರಿಗಳೊಂದಿಗೆ ನಗರದಲ್ಲಿರುವ ರೈಲು ನಿಲ್ದಾಣದ ಹಿಂಭಾಗದಲ್ಲಿರುವ ಖಾಲಿ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ನಗರದ ಸಮೀಪ 100 ಎಕರೆ ಜಾಗ ಗುರುತಿಸಿದರೆ, ಕರ್ನಾಟಕ ಗೃಹ ಮಂಡಳಿಯ ಮೂಲಕ ಎಕರೆಗೆ ₹22.5 ಲಕ್ಷ ಪಾವತಿಸಿ ಜಾಗ ಖರೀದಿಸಿ ಟೌನ್‌ಶಿಪ್‌ ನಿರ್ಮಾಣ ಮಾಡಬಹುದು ಎಂದು ಸಚಿವ ಸೋಮಣ್ಣ ಅವರು ಅಧಿಕಾರಿಗಳ ಸಭೆಯಲ್ಲಿ ಹೇಳಿದ್ದರು. ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಜಾಗ ಗುರುತಿಸುವ ಭರವಸೆ ನೀಡಿದ್ದರು. 

ರೈಲು ನಿಲ್ದಾಣದ ಬಳಿ ಇರುವ ವಿಶಾಲ ಜಾಗದಲ್ಲಿ 78 ಎಕರೆಯಷ್ಟು ಜಮೀನು ಲಭ್ಯವಿದೆ. ರಾಷ್ಟ್ರೀಯ ಹೆದ್ದಾರಿಯ ಬೈಪಾಸ್‌ ರಸ್ತೆ ಕೂಡ ಇದೇ ಪ್ರದೇಶದಲ್ಲಿ ಹಾದುಹೋಗುತ್ತದೆ. ಈ ಪ್ರದೇಶ ಸಮತಟ್ಟಾಗಿದ್ದು, ಬಡಾವಣೆ ನಿರ್ಮಾಣಕ್ಕೆ ಸೂಕ್ತವಾಗಿದೆ ಎಂಬ ಅಭಿಪ್ರಾಯಕ್ಕೆ ಅಧಿಕಾರಿಗಳು ಬಂದಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ‘ಜಿಲ್ಲಾ ಕೇಂದ್ರದಲ್ಲಿ ವಸತಿ ಸಮಸ್ಯೆ ಬಹಳ ಇದೆ. ನಗರ ಅಭಿವೃದ್ದಿಯಾಗಬೇಕಾಗಿದೆ. ಮೂಲ ಸೌಕರ್ಯಗಳನ್ನು ಹೊಂದಿರುವ ಬಡಾವಣೆ ನಿರ್ಮಾಣ ಮಾಡಲು ವಸತಿ ಸಚಿವ ವಿ. ಸೋಮಣ್ಣ ಅವರು ಆಸಕ್ತಿ ತೋರಿದ್ದಾರೆ. ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಕೂಡ ಜಮೀನು ಕೊಡಿಸಲು ಮಾಲೀಕರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಪ್ರದೇಶ ರೈಲ್ವೆ ನಿಲ್ದಾಣ, ಖಾಸಗಿ ಬಸ್ ನಿಲ್ಧಾಣ ಹಾಗೂ ಕೆಎಸ್‌ಆರ್‌ಟಿಸಿ ಬಸ್, ಕ್ರೀಡಾಂಗಣಕ್ಕೆ ಹತ್ತಿರವಾಗಿದೆ’ ಎಂದರು. 

ಜಮೀನು ಮಾಲೀಕರ ಒಪ್ಪಿಗೆಯನ್ನು ಪಡೆಯುವ ಪ್ರಕ್ರಿಯೆಯನ್ನು ಅದಷ್ಟು ಶೀಘ್ರ ಪೂರ್ಣಗೊಳಿಸಿ, ಗೃಹ ಮಂಡಳಿಗೆ ಕಳುಹಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಗರಸಭೆ ಆಯುಕ್ತ ಎಂ.ರಾಜಣ್ಣ ಅವರಿಗೆ ಡಾ.ಎಂ.ಆರ್‌.ರವಿ ಸೂಚನೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್‌, ಗೃಹ ಮಂಡಳಿಯ ಸಹಾಯಕ ಎಂಜಿನಿಯರ್ ಸೋಮಶೇಖರ್, ಕಂದಾಯ ಅಧಿಕಾರಿ ನಂಜುಂಡಸ್ವಾಮಿ, ನಾರಾಯಣ್ ಹಾಗೂ ಕಂದಾಯ ಇಲಾಖೆ, ನಗರಸಭೆಯ ಅಧಿಕಾರಿಗಳು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.