ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ನಿಗಮ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯ

Published 31 ಮೇ 2024, 15:35 IST
Last Updated 31 ಮೇ 2024, 15:35 IST
ಅಕ್ಷರ ಗಾತ್ರ

ಚಾಮರಾಜನಗರ: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಈ ಪ್ರಕರಣದ ಸೂತ್ರದಾರರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ನಾಯಕ ಸಮಾಜದ ಮುಖಂಡ ಕೆಲ್ಲಂಬಳ್ಳಿ ಸೋಮನಾಯಕ ಶುಕ್ರವಾರ ಆಗ್ರಹಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಮಹರ್ಷಿಗಳ ಹೆಸರಿನ ಸಂಸ್ಥೆಯೊಂದರಲ್ಲಿ ಅವ್ಯವಹಾರ ನಡೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ₹187 ಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಸಮಾಜದವರಾಗಿದ್ದುಕೊಂಡು ಸಮಾಜಕ್ಕೆ ಅನ್ಯಾಯ ಮಾಡುವ ಕೆಲಸ ಅವರು ಮಾಡಲಾರರು. ಅವರ ಮೇಲೆ ಒತ್ತಡ ಹಾಕಿದವರು ಬೇರೆ ಯಾರೋ ಇದ್ದಾರೆ. ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. 

‘ಈ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪರಿಶಿಷ್ಟ ವರ್ಗದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಇದರ ತನಿಖೆ ನಡೆಸಬೇಕು. ಹಗರಣದ ಮೂಲ ಕರ್ತೃವನ್ನು ಪತ್ತೆ ಹಚ್ಚಬೇಕು. ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ತಕ್ಷಣವೇ ಬಂಧಿಸಬೇಕು. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಸೋಮನಾಯಕ ಆಗ್ರಹಿಸಿದರು. 

ಪ್ರತಿಭಟನೆ ಎಚ್ಚರಿಕೆ: ‘ಜೂನ್‌ 16ರ ಒಳಗಾಗಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ನಾಯಕ ಸಮುದಾಯವು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಿದೆ. ಪ್ರಗತಿಪರ ಸಂಘಟನೆಗಳನ್ನೂ ಸೇರಿಸಿಕೊಂಡು ಮಹದೇಶ್ವರ ಬೆಟ್ಟದಿಂದ ಜಿಲ್ಲಾ ಕೇಂದ್ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಎಚ್ಚರಿಸಿದರು. 

ಯಜಮಾನರಾದ ರಾಜುನಾಯಕ, ವಾಲ್ಖೀಕಿ ಸೇವಾ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ  ರಂಗಸ್ವಾಮಿನಾಯಕ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT