ಶನಿವಾರ, ಜನವರಿ 16, 2021
24 °C

ಹಿಂದುಳಿದ ವರ್ಗಗಳ ಯುವಕರಿಗೆ ಕೌಶಲ ತರಬೇತಿಗೆ ಕ್ರಮ: ರಘು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ನಗರಗಳಿಂದ ಊರುಗಳಿಗೆ ವಾಪಸ್‌ ಬಂದಿರುವ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗದಲ್ಲಿ ತೊಡಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗದಮ ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರು ಹೇಳಿದರು. 

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೌಶಲ ತರಬೇತಿ ಕೊಡಿಸಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿನ ಅರ್ಹ ಫಲಾನುಭವಿಗಳಿಗೆ ನಿಗಮದಿಂದ ದೊರೆಯುವ ಸವಲತ್ತುಗಳು ಸರಿಯಾಗಿ ತಲುಪುತ್ತಿವೆಯೇ ಎಂಬುದನ್ನು ಸಮಾಲೋಚಿಸಲು ಜಿಲ್ಲೆಗೆ ಭೇಟಿ ನೀಡಿದ್ದೇನೆ’ ಎಂದರು. 

‘ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರಮಿಕ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.  2019–20ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದರು. 

‘ಜಿಲ್ಲೆಯಲ್ಲಿ 585 ಫಲಾನುಭವಿಗಳಿಗೆ ₹3.77 ಕೋಟಿ ಸಾಲ ನೀಡಲು ಗುರಿ ಹೊಂದಲಾಗಿದ್ದು, ಇದರಲ್ಲಿ 525 ಮಂದಿಗೆ ₹1.98 ಕೋಟಿ ಸಾಲ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು. 

‘ಹಿಂದುಳಿದ ವರ್ಗಗಳ ಕಟ್ಟಕಡೆಯ ಜನಾಂಗದವರಿಗೂ ಈ ನಿಗಮದಿಂದ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು. ಇದುವರೆಗೂ 6,791 ಮಂದಿಗೆ ₹5.20 ಕೋಟಿ ಸಹಾಯಧನ ಹಾಗೂ  ₹15.91 ಕೋಟಿ ಸಾಲ ನೀಡಲಾಗಿದೆ’ ಎಂದು ರಘು ಅವರು ವಿವರಿಸಿದರು. 

‘ಇ-ವಾಣಿಜ್ಯ ಸಂಸ್ಥೆಗಳ ಮೂಲಕ ಮನೆ ಬಾಗಿಲಿಗೆ ಉತ್ಪನ್ನಗಳನ್ನು ಸರಬರಾಜು ಮಾಡುವ 1,000 ಯುವಕರಿಗೆ ಬೈಕ್ ಕೊಳ್ಳಲು ನಿಗಮದಿಂದ ₹25 ಸಾವಿರ ಸಹಾಯಧನವನ್ನು ಬ್ಯಾಂಕ್‌ಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ’ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನಟರಾಜೇಗೌಡ, ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಮುಖಂಡ ಪುಟ್ಟರಾಜು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು