ಚಾಮರಾಜನಗರ: ತಾಲ್ಲೂಕಿನ ಶಿವಪುರ ಗ್ರಾಮದ ಹೊರವಲಯದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಡ್ಡಹಳ್ಳ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಈಚೆಗೆ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ, ರೈತರು ಜಮೀನುಗಳಿಗೆ ತೆರಳಲು ಅಡ್ಡಹಳ್ಳದ ಮೂಲಕವೇ ಹೋಗಬೇಕಿತ್ತು, ಮಳೆಗಾಲದಲ್ಲಿ ರೈತರು ಜಮೀನಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದರು. ಗ್ರಾಮಸ್ಥರ ಮನವಿ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುತ್ತಿದ್ದು ಸಮಸ್ಯೆ ಪರಿಹಾರವಾಗಲಿದೆ ಎಂದರು.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಗ್ರಾಮಸ್ಥರ ಬಳಕೆಗೆ ನೀಡಬೇಕು ಎಂದು ಶಾಸಕರು ಸೂಚಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಸಿ.ಮಹದೇವಮ್ಮ, ಉಪಾಧ್ಯಕ್ಷೆ ತುಂಗಾ, ಸದಸ್ಯರಾದ ಸರಸ್ವತಿ, ಪ್ರಮೋದ್, ಶಿವಕುಮಾರ್, ಜಯಮ್ಮ, ಕನಿಷ್ಠ ವೇತನ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಆರ್.ಉಮೇಶ್, ಮುಖಂಡ ಶಂಕರೇಗೌಡ ಇದ್ದರು.