ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಗೆ ಆದ್ಯತೆ ನೀಡಲು ಸೂಚನೆ

ಬರ ಪರಿಸ್ಥಿತಿ; ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌
Published 28 ನವೆಂಬರ್ 2023, 16:49 IST
Last Updated 28 ನವೆಂಬರ್ 2023, 16:49 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ. ಕುಡಿಯುವ ನೀರಿನ ವಿಚಾರದಲ್ಲಿ ಉದಾಸೀನ ಮಾಡುವಂತಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಮಂಗಳವಾರ ಕಟ್ಟುನಿಟ್ಟಾಗಿ ಅಧಿಕಾರಿಗಳಿಗೆ ಹೇಳಿದರು. 

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಹಾಗೂ ಚಾಮರಾಜನಗರ ತಾಲ್ಲೂಕಿಗೆ ಸಂಬಂಧಿಸಿದಂತೆ ಬರ ನಿರ್ವಹಣೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 

‘ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ನಿಗಾ ವಹಿಸಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿಯೂ ತೊಂದರೆ ಬರಬಾರದು. ಗ್ರಾಮ ಪಂಚಾಯಿತಿಗಳಲ್ಲಿ ಇರುವ ಹಣವನ್ನು ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಬಳಸಲು ಆದ್ಯತೆ ನೀಡಬೇಕು. 15ನೇ ಹಣಕಾಸು, ಇನ್ನಿತರ ಯೋಜನೆಗಳಡಿ ಕುಡಿಯುವ ನೀರಿನ ಸೌಕರ್ಯವನ್ನು ಕಲ್ಪಿಸಬೇಕು’ ಎಂದರು. 

‘ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಪಟ್ಟಿ ಮಾಡಿಕೊಳ್ಳಬೇಕು. ಬರ ಮುಗಿಯುವವರೆಗೆ ಕುಡಿಯುವ ನೀರಿನ ಲಭ್ಯತೆಗೆ ಹೆಚ್ಚು ಮುತುವರ್ಜಿ ವಹಿಸಬೇಕು. ಕೊಳವೆಬಾವಿ, ಪರ್ಯಾಯ ವ್ಯವಸ್ಥೆಗಳ ಮೂಲಕ ಕುಡಿಯುವ ನೀರನ್ನು ಪೂರೈಸಬೇಕು. ಜಲಜೀವನ್ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ನಡೆಯುವಂತೆ ಗಮನಹರಿಸಬೇಕು’ ಎಂದು ಸಚಿವರು ಸೂಚಿಸಿದರು.

‘ನಗರ, ಪಟ್ಟಣ ಪ್ರದೇಶಗಳಲ್ಲಿಯೂ ಕುಡಿಯುವ ನೀರಿಗೆ ಕೊರತೆಯಾಗಬಾರದು. ಪಟ್ಟಣ ಮತ್ತು ಗ್ರಾಮಗಳಲ್ಲಿ ಇರುವ ಶುದ್ದ ಕುಡಿಯುವ ನೀರಿನ ಘಟಕಗಳು ಸುಸ್ಥಿತಿಯಲ್ಲಿವೆಯೇ ಎಂದು ಪರೀಕ್ಷಿಸಬೇಕು. ಓವರ್‌ ಹೆಡ್ ಟ್ಯಾಂಕ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಎಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೋ ಅಲ್ಲಿ ಶೀಘ್ರ ಪರಿಹಾರಕ್ಕೆ ಮುಂದಾಗಬೇಕು. ಗ್ರಾಮಗಳ ಸ್ವಚ್ಚತೆಗೂ ಕ್ರಮ ತೆಗೆದುಕೊಳ್ಳಬೇಕು’ ಎಂದರು. 

ಕೃಷಿ, ತೋಟಗಾರಿಕೆ, ಕೆರೆ ನಿರ್ವಹಣೆ, ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಇನ್ನಿತರ ಬರ ಪರಿಹಾರ ಸಂಬಂಧ ಕೈಗೊಂಡಿರುವ ಕ್ರಮಗಳನ್ನು ವಿವರವಾಗಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ‘ಕೃಷಿ ಚಟುವಟಿಕೆಗಳಿಗೆ ಸಾಧ್ಯವಾದಷ್ಟು ನೀರಿನ ಪೂರೈಕೆ ಮಾಡಬೇಕು. ಪರ್ಯಾಯ ಕ್ರಮಗಳ ಮೂಲಕವು ನೀರಿನ ವ್ಯವಸ್ಥೆ ಮಾಡಬೇಕು. ಮೇವು ಬೆಳೆಯಲು ಮೇವಿನ ಕಿಟ್‍ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ವಿತರಿಸಬೇಕು’ ಎಂದರು. 

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, ‘ಕುಡಿಯುವ ನೀರಿನ ಕಾಮಗಾರಿ ಸೇರಿದಂತೆ ಬರ ನಿರ್ವಹಣೆಯ ಯಾವುದೇ ಕೆಲಸದಲ್ಲಿ ಸಮಸ್ಯೆ ಇದ್ದರೆ ಕೂಡಲೇ ನನ್ನ ಗಮನಕ್ಕೆ ತರಬೇಕು. ನರೇಗಾ ಅಡಿ ಅಂತರ್ಜಲ ಮರುಪೂರಣ ಇತರೆ ಕೆಲಸಗಳಿಗೆ ಅವಕಾಶವಿದೆ. ಜಲಜೀವನ್ ಮಿಷನ್‌ನಡಿ ನಡೆಯುತ್ತಿರುವ ಕಾಮಗಾರಿಗಳನ್ನು ವೇಗಗೊಳಿಸಬೇಕು. ಫೂಟ್ಸ್ ತಂತ್ರಾಂಶ ನೋಂದಣಿ ಕಾರ್ಯ ಸಹ ಪ್ರಗತಿಯಾಗಬೇಕು’ ಎಂದರು.

ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ. ಸಂರಕ್ಷಿತ ಪ್ರದೇಶದ ನಿರ್ದೆಶಕಿ ಹಾಗೂ ಡಿಸಿಎಫ್‌ ದೀಪ್‌ ಜೆ.ಕಾಂಟ್ರ್ಯಾಕ್ಟರ್, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ್ ಬಸವರಾಜು ಇತರರು ಇದ್ದರು.

ಸಭೆಯಲ್ಲಿ  ಅಧಿಕಾರಿಗಳು ಭಾಗವಹಿಸಿದ್ದರು
ಸಭೆಯಲ್ಲಿ  ಅಧಿಕಾರಿಗಳು ಭಾಗವಹಿಸಿದ್ದರು

ಸಮಸ್ಯೆ ತ್ವರಿತವಾಗಿ ಪರಿಹರಿಸಿ’

ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ‘ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಕನಿಷ್ಠ ₹20 ಲಕ್ಷದಿಂದ ₹40 ಲಕ್ಷವರೆಗೆ ಹಣ ಲಭ್ಯವಿದೆ. ಇದನ್ನು ಬಳಕೆ ಮಾಡಿ ನೀರಿನ ಸಮಸ್ಯೆ ಪರಿಹರಿಸಲು ಅವಕಾಶವಿದೆ. ಪಂಚಾಯಿತಿ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮವಹಿಸಬೇಕು. ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಮುಂದಾಗಬೇಕು’ ಎಂದರು. ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ ‘ಜನಸಂಪರ್ಕ ಸಭೆಯಲ್ಲಿಯೂ ಜನರು ಕುಡಿಯುವ ನೀರಿನ ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಜಲಜೀವನ್ ಮಿಷನ್ ಯೋಜನೆ ಕೈಗೊಂಡಿರುವ ಹಲವೆಡೆ ಪೈಪ್‍ಲೈನ್‍ಗಳು ಹಾಳಾಗಿರುವ ಬಗ್ಗೆ ವರದಿಯಾಗುತ್ತಿವೆ. ಜಲಜೀವನ್ ಮಿಷನ್‌ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕಿದೆ. ದೊಡ್ಡ ಗ್ರಾಮಗಳಲ್ಲಿ ಮಾತ್ರವಲ್ಲ ಸಣ್ಣ ಪುಟ್ಟ ಗ್ರಾಮಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಆಗಬೇಕು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT