ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ವಿರುದ್ಧ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ: ಸುರೇಶ್ ಕುಮಾರ್

Last Updated 21 ಏಪ್ರಿಲ್ 2021, 16:03 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಬುಧವಾರಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಕುರಿತು ಹಿರಿಯ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಹಾಗೂ ಕೋವಿಡ್ ತಡೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ನೋಡೆಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 'ಕೋವಿಡ್ ಪ್ರಕರಣಗಳು ಉಲ್ಬಣದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೋವಿಡ್ ವಿರುದ್ಧ ಸಮರದಲ್ಲಿ ಗೆಲುವು ಸಾಧಿಸಲು ಎಲ್ಲ ಚುನಾಯಿತ ಪ್ರತಿನಿಧಿಗಳು, ಅಂದರೆ ಗ್ರಾಮ ಪಂಚಾಯಿತಿ ಯಿಂದ ಹಿಡಿದು ಎಲ್ಲಾ ಹಂತದ ಜನಪ್ರತಿನಿಧಿಗಳು, ಅಧಿಕಾರಿಗಳು ಒಟ್ಟಾಗಿ ಶ್ರಮಿಸೋಣ' ಎಂದರು.

'ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಾಗಬೇಕು. ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ಪ್ರಕರಣಗಳಿಗೆ ದಾಖಲು ಮಾಡಿಕೊಳ್ಳಲು ಹಾಸಿಗೆಗಳನ್ನು ಕಾಯ್ದಿರಿಸಬೇಕು. ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಮುಂಚಿತವಾಗಿಯೇ ದಾಸ್ತಾನು ಮಾಡಿಕೊಳ್ಳಬೇಕು. ಅಗತ್ಯವಿರುವ ಔಷಧಗಳನ್ನೂ ಶೇಖರಣೆ ಮಾಡಿಕೊಳ್ಳಬೇಕು' ಎಂದು ಸಚಿವರು ತಿಳಿಸಿದರು.

ಶಾಸಕ ಆರ್. ನರೇಂದ್ರ ಅವರು, 'ಹೋಂ ಐಸೋಲೇಷನ್ ಆಯ್ಕೆ ಮಾಡಿಕೊಳ್ಳುವವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆರೋಗ್ಯ ಸುಧಾರಣೆಗೆ ಪೂರಕವಾಗಿರುವ ಸಲಹೆ ನಿರಂತರವಾಗಿ ನೀಡುವಂತಾಗಬೇಕು' ಎಂದರು.

ಸಚಿವರು ಮಾತನಾಡಿ, 'ಕೋವಿಡ್ ನಿಯಂತ್ರಣಕ್ಕೆ ವಹಿಸಬೇಕಿರುವ ಸುರಕ್ಷಾ ಕ್ರಮಗಳಿಗೆ ಜಾಗೃತಿ ಮೂಡಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾದ ಮಹತ್ವದ ಕುರಿತು ಹೆಚ್ಚು ತಿಳಿವಳಿಕೆ ನೀಡಬೇಕು. ಹೆಚ್ಚು ಜನ ಸೇರುವ ಸ್ಥಳಗಳಲ್ಲಿ, ಅಂಗಡಿ ಮುಂಗಟ್ಟು ಇನ್ನಿತರ ಕಡೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು' ಎಂದರು.

ಇದುವರೆಗೂ ಜಿಲ್ಲೆಯಲ್ಲಿ ಆಗಿರುವ ಲಸಿಕೆ ಕಾರ್ಯದ ಪ್ರಗತಿ ಪರಾಮರ್ಶಿಸಿದ ಉಸ್ತುವಾರಿ ಸಚಿವರು, 'ಮೇ1 ರಿಂದ 18 ವರ್ಷ ತುಂಬಿದ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ. ಇದಕ್ಕಾಗಿ ವ್ಯಾಪಕವಾದ ಸಿದ್ಧತೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಈಗಾಗಲೇ ಆರಂಭಿಸಿರುವ ಲಸಿಕಾ ಅಭಿಯಾನದ ಪ್ರಯೋಜನವನ್ನು ಹಾಡಿ ಪೋಡುಗಳ ಗಿರಿಜನರು ಪಡೆದುಕೊಳ್ಳಲು ಆಯಾ ಸಮುದಾಯಗಳ ಮುಖಂಡರ ಸಹಕಾರ ಪಡೆದು ಉತ್ತೇಜನ ನೀಡಬೇಕು' ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಮಾತನಾಡಿ, 'ಹಾಡಿಗಳಲ್ಲಿರುವ ಆಶ್ರಮ ಶಾಲೆಗಳಲ್ಲಿ ಲಸಿಕಾ ಕೇಂದ್ರಕ್ಕೆ ವ್ಯವಸ್ಥೆ ಕಲ್ಪಿಸಿ ಆಯಾ ಭಾಗದಲ್ಲೇ ಲಸಿಕೆ ಪಡೆಯಲು ಅರಣ್ಯ ವಾಸಿಗಳು, ಗಿರಿಜನರಿಗೆ ಅನುಕೂಲ ಮಾಡಿಕೊಡಬೇಕು' ಎಂದು ತಿಳಿಸಿದರು.

ಎಸ್. ಸುರೇಶ್‍ಕುಮಾರ್ ಅವರು ಮಾತನಾಡಿ, 'ಸೋಂಕು ತಡೆಯುವಲ್ಲಿ ಸರ್ಕಾರ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಎಲ್ಲಿಯೂ ಮಾರ್ಗಸೂಚಿ ಉಲ್ಲಂಘನೆಯಾಗಬಾರದು' ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಎಂ. ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್ ನಾರಾಯಣ್ ರಾವ್, ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಡಿವೈಎಸ್‍ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಸಂಜೀವ್, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್, ಡಾ. ಮಹೇಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಇದ್ದರು.

ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ರಾಮಸಮುದ್ರದ ಮುಕ್ತ ವಿ.ವಿ ಪ್ರಾದೇಶಿಕ ಕೇಂದ್ರದಲ್ಲಿ ಸಜ್ಜುಗೊಳಿಸಿರುವ ಕೋವಿಡ್ ಕೇರ್ ಕೇಂದ್ರ ಮತ್ತು ಸಂತೇಮರಹಳ್ಳಿಯಲ್ಲಿ ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಚಿವರು ಸಂತೇಮರಹಳ್ಳಿ ಹೋಬಳಿ ಕೇಂದ್ರದ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT