ಮಂಗಳವಾರ, ಆಗಸ್ಟ್ 3, 2021
27 °C
ಆರೋಗ್ಯ ಕೇಂದ್ರಗಳಲ್ಲೂ ಮಾದರಿ ಸಂಗ್ರಹಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಸೂಚನೆ

ಕೋವಿಡ್‌–19 ಪರೀಕ್ಷೆ ಹೆಚ್ಚಿಸಲು ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್‌–19 ಪರೀಕ್ಷೆಯ ಭಾಗವಾಗಿ ಹೆಚ್ಚಿನ ಗಂಟಲ ದ್ರವ ಮಾದರಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿರುವ ಜಿಲ್ಲಾಡಳಿತ, ಹೆಚ್ಚಿನ ಪ್ರಮಾಣದಲ್ಲಿ ಗಂಟಲ ದ್ರವ ಮಾದರಿ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದೆ. 

ಜಿಲ್ಲೆಯ ಎಲ್ಲ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮಾದರಿ ಸಂಗ್ರಹಣಾ ಕೇಂದ್ರ ಸ್ಥಾಪಿಸಿ ಮಾದರಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಅವರು, ‘ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲ್ಲೂಕು ಕೇಂದ್ರಗಳ ಆಸ್ಪತ್ರೆ, ನಗರದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಈಗಾಗಲೇ ಮಾದರಿ ಸಂಗ್ರಹಣಾ ಕಾರ್ಯ ನಿರ್ವಹಿಸಲಾಗುತ್ತಿದೆ. ಎಲ್ಲ ತಾಲ್ಲೂಕು ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಣಾ ಕೇಂದ್ರಗಳನ್ನು ಪ್ರಾರಂಭಿಸಬೇಕು’ ಎಂದು ಸೂಚಿಸಿದರು.

ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಎಂದು ಗುರುತಿಸಲಾಗುವ ಎಚ್ಐವಿ ಸೋಂಕಿತ, ಕ್ಷಯ, ಮಧುಮೇಹ, ಕ್ಯಾನ್ಸರ್, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರು (ಎಸ್‌ಎಆರ್‌ಐ), ಡಯಾಲಿಸಿಸ್‌ಗೆ ಒಳಗಾಗುತ್ತಿರುವವರು, ಗರ್ಭಿಣಿಯರು, ಶೀತ ನೆಗಡಿ ಕೆಮ್ಮು ಜ್ವರದ (ಐಎಲ್‌ಐ) ಲಕ್ಷಣ ಉಳ್ಳವರು ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅವರ ವಾಸಸ್ಥಳದ ವ್ಯಾಪ್ತಿಯಲ್ಲಿಯೇ ಬರುವ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಬೇಕು ಎಂದು ಸಲಹೆ ನೀಡಿದರು. 

ವಾಹನ ವ್ಯವಸ್ಥೆ: ಗಂಟಲ ದ್ರವ ಮಾದರಿ ಸಂಗ್ರಹಣೆಗಾಗಿ ಆಯಾ ಗ್ರಾಮಗಳಿಂದ ಮಾದರಿ ಸಂಗ್ರಹಣಾ ಕೇಂದ್ರಕ್ಕೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗುತ್ತದೆ. ಉಚಿತವಾಗಿ ವಾಹನದಲ್ಲಿ ಕರೆತಂದು ಮಾದರಿ ಸಂಗ್ರಹಿಸಿ ಅವರ ಗ್ರಾಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಇದಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದರು.

ಮಾದರಿ ಸಂಗ್ರಹಣಾ ಕೇಂದ್ರದಲ್ಲಿ ಗಂಟಲು ಮಾದರಿ ಸಂಗ್ರಹಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಕೂಡಲೇ ತರಬೇತಿ ನೀಡಬೇಕು. ಮಾದರಿ ಸಂಗ್ರಹಣೆಗಾಗಿ ಸಿಬ್ಬಂದಿಗೆ ಪಿಪಿಇ ಕಿಟ್, ಎನ್ 95 ಮಾಸ್ಕ್, ವಿಟಿಎಂ ಸೇರಿದಂತೆ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸಲಾಗುತ್ತದೆ. ಈ ಸುರಕ್ಷತಾ ಸಾಧನಗಳ ಬಳಕೆ ಬಗ್ಗೆಯೂ ತಕ್ಷಣವೇ ತರಬೇತಿ ಹಾಗೂ ಮಾರ್ಗದರ್ಶನ ಮಾಡುವ ಕೆಲಸ ಆಗಬೇಕು ಎಂದು ಎಂ.ಆರ್.ರವಿ ಅವರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಯ ಡೀನ್ ಡಾ.ಸಂಜೀವ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು, ಎಲ್ಲ ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

15 ದಿನಗಳ ಗಡುವು

ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಆಯಾ ವ್ಯಾಪ್ತಿಯ ಎಲ್ಲ ಪಟ್ಟಣ, ಗ್ರಾಮಗಳಿಗೂ ಭೇಟಿ ನೀಡಿ ಗುರುತಿಸಲಾಗಿರುವ ಆರೋಗ್ಯ ಸಂಬಂಧಿ ವರ್ಗಗಳ ಜನರನ್ನು ಕರೆತಂದು ಗಂಟಲಿನ ದ್ರವ ಶೇಖರಿಸಿ ಕಳುಹಿಸಿಕೊಡುವ ಕಾರ್ಯವನ್ನು 10ರಿಂದ 15 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ಡಾ.ಎಂ.ಆರ್‌.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.