ಗುರುವಾರ , ನವೆಂಬರ್ 26, 2020
22 °C
ಪ್ರವಾಸಿ ತಾಣಗಳಲ್ಲಿ ಆರೋಗ್ಯ ಸಿಬ್ಬಂದಿ ನಿಯೋಜನೆ, ಗಂಟಲು ದ್ರವ ಸಂಗ್ರಹ

ಚಾಮರಾಜನಗರ: ಪ್ರವಾಸಿಗರಿಗೂ ಕೋವಿಡ್‌ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರನ್ನು ಕೋವಿಡ್‌–19 ಪರೀಕ್ಷೆಗೆ ಒಳಪಡಿಸಲು ಜಿಲ್ಲಾಡಳಿತ ಯೋಜಿಸಿದೆ. 

ವಾರಾಂತ್ಯಗಳಲ್ಲಿ ಪ್ರವಾಸಿ ಸ್ಥಳಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕಾಗಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಿದೆ. ಕೋವಿಡ್‌–19 ಹರಡುವಿಕೆ ತಡೆಯುವುದು ಹಾಗೂ ಜನರಲ್ಲಿ ಪರೀಕ್ಷೆಗೆ ಒಳಗಾಗುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಬಂಡೀಪುರ, ಹಿಮವದ್‌ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನಬೆಟ್ಟ, ಮಹದೇಶ್ವರ ಬೆಟ್ಟ, ಭರಚುಕ್ಕಿ ಜಲಪಾತ ಸೇರಿದಂತೆ ಹಲವು ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರಗಳು ಜಿಲ್ಲೆಯಲ್ಲಿದ್ದು, ಪ್ರತಿ ದಿನ ನೂರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. 

ಕಡ್ಡಾಯ ಅಲ್ಲ: ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಕೋವಿಡ್‌ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ ಅಲ್ಲ. ಆರೋಗ್ಯ ಸಿಬ್ಬಂದಿ ಪ್ರವಾಸಿಗರಿಗೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವೊಲಿಸುವ ಪ್ರಯತ್ನ ಮಾಡುತ್ತಾರೆ. ರ‍್ಯಾಪಿಡ್‌ ಆ್ಯಂಟಿಜೆನ್‌ ಹಾಗೂ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಲಾಗುತ್ತದೆ. 

‘ಇದು ಕಡ್ಡಾಯ ಪರೀಕ್ಷೆ ಅಲ್ಲ. ಪ್ರವಾಸಿಗರು ಸ್ವಯಂ ಪ್ರೇರಿತರಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹೆಚ್ಚು ಪರೀಕ್ಷೆಗಳು ನಡೆದಷ್ಟೂ ಒಳ್ಳೆಯದು. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವೂ ಆಗಬೇಕು. ಆ ಕಾರಣದಿಂದ ಪ್ರವಾಸಿ ತಾಣಗಳಲ್ಲೂ ಕೋವಿಡ್‌ ಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ‌ಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆ ಸಂದರ್ಭದಲ್ಲಿ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗುವುದು. ಬಂಡೀಪುರ, ಹಿಮವದ್‌ಗೋಪಾಲಸ್ವಾಮಿ ಬೆಟ್ಟ, ಮಹದೇಶ್ವರ ಬೆಟ್ಟ ಸೇರಿದಂತೆ ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ರ‍್ಯಾಪಿಡ್‌‌ ಆ್ಯಂಟಿಜೆನ್‌ ಪರೀಕ್ಷೆ ಹಾಗೂ ಆರ್‌ಟಿಪಿಸಿಆರ್‌ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

‘ಜಿಲ್ಲೆಯ ಪ್ರವಾಸಿಗರನ್ನು ರ‍್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ, ಸೋಂಕು ದೃಢಪಟ್ಟರೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲು ಯೋಜಿಸುತ್ತಿದ್ದೇವೆ. ಹೊರ ಜಿಲ್ಲೆ ಅಥವಾ ಹೊರ ರಾಜ್ಯದ ಪ್ರವಾಸಿಗರನ್ನು ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗುವುದು. ಪರೀಕ್ಷೆಗೆ ಮಾದರಿಯನ್ನು ಕೊಟ್ಟ ನಂತರ ಅವರು ಪ್ರವಾಸಿ ತಾಣಗಳ ವೀಕ್ಷಣೆಗೆ ತೆರಳಬಹುದು. ಆದರೆ, ಎಚ್ಚರಿಕೆಯಿಂದ ಇರುವಂತೆ ಅವರಿಗೆ ಸೂಚಿಸಲಾಗುವುದು. ಒಂದು ದಿನದ ಬಳಿಕ ಪರೀಕ್ಷಾ ವರದಿ ಬರಲಿದ್ದು, ಸೋಂಕು ದೃಢಪಟ್ಟರೆ ಅವರಿಗೆ ಹಾಗೂ ಅವರ ಜಿಲ್ಲೆಯ ಆಡಳಿತಕ್ಕೆ ಮಾಹಿತಿ ನೀಡಲಾಗುವುದು’ ಎಂದು ಡಾ.ಎಂ.ಸಿ.ರವಿ ಅವರು ವಿವರಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು