ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ದಿನದಲ್ಲಿ ಪರಿಹಾರ ವಿತರಿಸಲು ಸೂಚನೆ: ಬಿ.ಬಿ.ಕಾವೇರಿ ಸೂಚನೆ

ಮಳೆ ಹಾನಿ
Last Updated 28 ಮೇ 2022, 4:10 IST
ಅಕ್ಷರ ಗಾತ್ರ

ಚಾಮರಾಜನಗರ: ಮಳೆ ಹಾಗೂ ಪ್ರಕೃತಿ ವಿಕೋಪದಿಂದಾಗಿ ಉಂಟಾದ ನಷ್ಟ ಪ್ರಕರಣಗಳಿಗೆ 24ರಿಂದ48 ಗಂಟೆಯೊಳಗೆ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ (ಎನ್.ಡಿ.ಆರ್.ಎಫ್) ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ. ಕಾವೇರಿ ಅವರು ಶುಕ್ರವಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೊಳ್ಳೇಗಾಲದ ಪ್ರವಾಸಿಮಂದಿರದಲ್ಲಿ ಪ್ರಕೃತಿ ವಿಕೋಪ ಮತ್ತು ಮಳೆ ಹಾನಿ ಪ್ರಕರಣಗಳ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಕೃತಿ ವಿಪತ್ತು ಹಾಗೂ ಮಳೆಯಿಂದ ಹಾನಿ ಸಂಭವಿಸಿದ ಸ್ಥಳಕ್ಕೆ ಅಧಿಕಾರಿಗಳು ಕೂಡಲೇ ಭೇಟಿ ನೀಡಿ ಪರಿಶೀಲಿಸಬೇಕು. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ತೆರಳಿ ಜಂಟಿ ಸಮೀಕ್ಷೆ ನಡೆಸಿ ತುರ್ತಾಗಿ ವರದಿ ಸಲ್ಲಿಸಬೇಕು. ನಷ್ಟಕ್ಕೆ ಒಳಗಾದವರಿಗೆ ಅತಿ ಶೀಘ್ರವಾಗಿ ಪರಿಹಾರ ತಲುಪಿಸಬೇಕು’ ಎಂದರು.

'ಮಳೆಯಿಂದ ಹಾನಿಗೀಡಾಗಿರುವ ಶಾಲೆ, ಅಂಗನವಾಡಿಗಳನ್ನು ಗುರುತಿಸಿ ಹಾನಿಯ ಪ್ರಮಾಣವನ್ನು ವರದಿ ಮಾಡಬೇಕು. ಕೊಠಡಿಗಳು ಶಿಥಿಲವಾಗಿದ್ದರೆ ಸುರಕ್ಷಿತ ಕೊಠಡಿಗಳಿಗೆ ತರಗತಿಗಳನ್ನು ಸ್ಥಳಾಂತರ ಮಾಡಬೇಕು. ಶಾಲಾ, ಅಂಗನವಾಡಿ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಕಬಿನಿ, ಕೆ.ಆರ್.ಎಸ್ ಜಲಾಶಯಗಳು ಭರ್ತಿಯಾದ ಸಂದರ್ಭದಲ್ಲಿ ಹೊರಬಿಡಲಾಗುವ ನೀರಿನಿಂದ ಕೊಳ್ಳೇಗಾಲ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಪೂರ್ವ ಸಿದ್ಧತೆ ಮಾಡಿಕೊಂಡಿರಬೇಕು. ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ, ಕಾಳಜಿ ಕೇಂದ್ರಗಳ ಸ್ಥಾಪನೆ, ಜಾನುವಾರುಗಳಿಗೆ ಆಶ್ರಯ ಸೇರಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳಿಗೆ ಅಧಿಕಾರಿಗಳು ಗಮನಹರಿಸಬೇಕು’ ಎಂದರು.

‘ಕಾಲುವೆಗಳಲ್ಲಿ ಹೂಳು ತೆಗೆಯಬೇಕು. ಮಳೆ ಸಂದರ್ಭದಲ್ಲಿ ನಗರ, ಪಟ್ಟಣ ಪ್ರದೇಶಗಳಲ್ಲಿಯೂ ತೊಂದರೆಯಾಗದಂತೆ ವಹಿಸಬೇಕಿರುವ ಕ್ರಮಗಳಿಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಿದ್ಯುತ್ ಪ್ರಸರಣ ಇಲಾಖೆಗಳು ಸಹ ಮುಂಜಾಗ್ರತೆ ವಹಿಸಬೇಕು. ಮಳೆ ಪ್ರವಾಹ ಸಮಯದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ತಡೆಗೆ ಆರೋಗ್ಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು’ ಎಂದು ಕಾವೇರಿ ಅವರು ತಿಳಿಸಿದರು.

‘ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ರಸಗೊಬ್ಬರ, ಬಿತ್ತನೆ ಬೀಜ ಇನ್ನಿತರ ಪರಿಕರಗಳಿಗೆ ಯಾವುದೇ ತೊಂದರೆಯಾಗಬಾರದು. ಜಿಲ್ಲೆಗೆ ಅಗತ್ಯವಿರುವ ಪ್ರಮಾಣದಲ್ಲಿ ಎಲ್ಲವನ್ನೂ ಪೂರೈಸಬೇಕು. ಜಾನುವಾರುಗಳಿಗೆ ಮೇವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಸೂಚಿಸಿದರು.

‘ಜನರ ಬಳಿ ತೆರಳಿ ಸಮಸ್ಯೆಗಳನ್ನು ಆಲಿಸಬೇಕು. ಅಧಿಕಾರಿಗಳು ವ್ಯಾಪಕ ಪ್ರವಾಸ ಕೈಗೊಂಡು ಕುಂದು ಕೊರತೆ ವಿಚಾರಿಸಬೇಕು. ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಸ್ಪಂದನೆ ಸಿಗಬೇಕು. ಅಗತ್ಯ ಪರಿಹಾರಗಳನ್ನು ಕಾಲಮಿತಿಯೊಳಗೆ ನೀಡಬೇಕು’ ಎಂದು ಬಿ.ಬಿ.ಕಾವೇರಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ ಅವರು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್, ತಹಶೀಲ್ದಾರರಾದ ಮಂಜುಳಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಕೃಷಿ ಇಲಾಖೆ ಉಪನಿರ್ದೇಶಕ ಸೋಮಶೇಖರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್, ಪಶುಪಾಲನೆ ಇಲಾಖೆ ಉಪನಿರ್ದೇಶಕ ಸುರೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ ಇತರ ಅಧಿಕಾರಿಗಳು ಇದ್ದರು.

ಬೆಳೆ, ಮನೆ ಹಾನಿ: ಪರಿಶೀಲನೆ
ಇದಕ್ಕೂ ಮೊದಲು ಕಾವೇರಿ ಅವರು ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಇತರ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಕಡೆಗಳಿಗೆ ಭೇಟಿ ನೀಡಿ ಮಳೆಯಿಂದಾಗಿರುವ ಬೆಳೆ ಹಾನಿ, ಮನೆ ಹಾನಿಗಳನ್ನು ಪರಿಶೀಲಿಸಿದರು.

ತಾಲ್ಲೂಕಿನ ಉತ್ತಂಬಳ್ಳಿ, ಟಗರಪುರ, ಟಗರಪುರ ಮೋಳೆ, ಜಕ್ಕಳಿ, ಯಳಂದೂರು ಕೆಸ್ತೂರು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಗ್ರಾಮಸ್ಥರ ಜೊತೆ ಹಾಗೂ ಸಂತ್ರಸ್ತರ ಜೊತೆ ಮಾತನಾಡಿ ಉದ್ದು, ಜೋಳ, ಕಬ್ಬು, ತೆಂಗು, ತರಕಾರಿ, ಈರುಳ್ಳಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿರುವುದನ್ನು ವೀಕ್ಷಿಸಿದರು.

ನಂತರ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಮಳೆಯಿಂದ ಯಳಂದೂರು ತಾಲ್ಲೂಕಿನಲ್ಲಿ ಹೆಚ್ಚು ನಷ್ಟವಾಗಿದೆ. ಉಳಿದ ತಾಲ್ಲೂಕಿನಲ್ಲಿ ಸಾಧರಣವಾದ ಬೆಳೆ ನಷ್ಟವಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆಯವರು ಜಂಟಿ ಬೆಳೆ ನಷ್ಟದ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಪೈಕಿ ಕೆಲವರಿಗೆ ಬೆಳೆ ನಷ್ಟದ ಪರಿಹಾರವನ್ನು ನೀಡಲಾಗುತ್ತದೆ. ಮನೆ ಕಳೆದುಕೊಂಡವರಿಗೆ ಜಿಲ್ಲಾಧಿಕಾರಿ ಕಡೆಯಿಂದ ಪ್ರಕೃತಿ ವಿಕೋಪ ನಿಧಿಯಿಂದ ಆರ್ಥಿಕ ನೆರವು ನೀಡಿದ್ದೇವೆ. ಯಾರಿಗಾದರೂ ಸರಿಯಾಗಿ ಪರಿಹಾರ ಸಿಗದೆ ಹೋದರೆ ಗಮನಕ್ಕೆ ತನ್ನಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT