ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು. ಕಬ್ಬಿನ ಬಾಕಿ ಪ್ರತಿ ಟನ್‌ಗೆ ₹150 ಹಣವನ್ನು ಕಾರ್ಖಾನೆಗಳಿಂದ ಶೀಘ್ರ ಕೊಡಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ರೈತ ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಜಿಲ್ಲಾಡಳಿತ ಭವನಕ್ಕೆ ಬಂದ ಸಿ.ಎಂ. ಅವರು ಭವನದ ಮುಂಭಾಗ ನಿಂತಿದ್ದ ರೈತ ಮುಖಂಡರ ಬಳಿಗೆ ತೆರಳಿ, ಅವರ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ಮೈಸೂರು ಚಾಮರಾಜನಗರ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್, ‘ಕಬ್ಬು ಖರೀದಿ ಮಂಡಳಿಯನ್ನು ತಕ್ಷಣ ರಚಿಸಬೇಕು. ಎಸ್‌ಎಪಿ ಕಾಯ್ದೆಯನ್ನು ಸುಭದ್ರ ಗೊಳಿಸಬೇಕು. ಚಾಮರಾಜನಗರ ಜಿಲ್ಲೆಯನ್ನು ಸಂಪೂರ್ಣ ಬರ ಪೀಡಿತ ಎಂದು ಘೋಷಣೆ ಮಾಡಿ ಪ್ರತಿ ಎಕರೆಗೆ ₹25,000ವನ್ನು ಬೆಳೆ ನಷ್ಟ ಪರಿಹಾರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ನಿಮ್ಮ ಪ್ರಾಣಾಳಿಕೆಯಂತೆ 10 ಗಂಟೆ ವಿದ್ಯುತ್ ನೀಡಬೇಕು’ ಎಂದು ಒತ್ತಾಯಿಸಿದರು.
‘ಕಾಡು ಪ್ರಾಣಿಗಳ ಹಾವಳಿ ಮತ್ತು ಮಾನವ ಸಂಘರ್ಷಕ್ಕೆ ವೈಜ್ಞಾನಿಕ ನಷ್ಟ ಪರಿಹಾರ ಕೊಡಬೇಕು. ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರನ್ನು ಪರಿಗಣಿಸಬಾರದು’ ಎಂದು ಮನವಿ ಮಾಡಿದರು.
ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ಕಾರ್ಯದರ್ಶಿ ಮೂಕಳ್ಳಿ ಮಹದೇವಸ್ವಾಮಿ, ತಾಲ್ಲೂಕು ಅಧ್ಯಕ್ಷ ಹಾಲಿನ ನಾಗರಾಜ್, ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಬ್ಬಸೂರು ಬಸವಣ್ಣ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.