ಭಾನುವಾರ, ಸೆಪ್ಟೆಂಬರ್ 19, 2021
24 °C
ಕಬ್ಬು ಬೆಳೆಗಾರರ ಸಭೆ: ರೈತ ಸಂಘದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ

ಅವಹೇಳನಕಾರಿ ಹೇಳಿಕೆ: ಸಕ್ಕರೆ ಕಾರ್ಖಾನೆ ಅಧಿಕಾರಿ ವಿರುದ್ಧ ರೈತ ಮುಖಂಡರ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಬಣ್ಣಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಯ ಹಿರಿಯ ಅಧಿಕಾರಿ ರೈತ ಸಂಘದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರ ಸಮ್ಮುಖದಲ್ಲೇ ಕಾರ್ಖಾನೆಯ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರಿಗೆ ದಿಗ್ಬಂಧನ ಹಾಕಿದ ಘಟನೆ ಸೋಮವಾರ ನಡೆದಿದೆ. 

ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಜಿಲ್ಲಾಧಿಕಾರಿ ಅವರು ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳ ಸಭೆ ಕರೆದಿದ್ದರು. 

‘ಸಭಾ ನಡಾವಳಿಯಲ್ಲಿ ರೈತರ ಬೇಡಿಕೆಗಳ ಬಗ್ಗೆ ಸ್ಪಷ್ಟೀಕರಣ ಕೊಡುವ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶರವಣ ಅವರು, ‘ಬಗ್ಗೆ ರೈತ ಸಂಘ ಮಾಡುತ್ತಿರುವ ಆರೋಪಗಳು ಆಧಾರ ರಹಿತ. ರೈತ ಸಂಘದವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಹಾಗೂ ಸಂಘಟನೆಯ ಅಸ್ತಿತ್ವ ತೋರ್ಪಡಿಸುವುದಕ್ಕಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಿಜವಾದ ಕಬ್ಬು ಬೆಳೆಗಾರರು ಯಾವುದೇ ತಕರಾರು ಮಾಡುತ್ತಿಲ್ಲ’ ಎಂಬುದಾಗಿ ಬರೆದಿದ್ದಾರೆ’ ಎಂದು ಸಭೆಯಲ್ಲಿ ಭಾಗವಹಿಸಿದ್ದ ರೈತ ಮುಖಂಡರು ಆರೋಪಿಸಿದ್ದಲ್ಲದೇ, ನಡಾವಳಿಗಳ ಪ್ರತಿ ಹರಿದು ಹಾಕಿ ಕಾರ್ಖಾನೆ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಸಭೆ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಹೊರಗಡೆ ಬಂದು ಧರಣಿ ಕೂತರಲ್ಲದೇ ಕಾರ್ಖಾನೆಯ ಅಧಿಕಾರಿಗಳನ್ನೂ ಹೊರ ಹೋಗಲು ಬಿಡಲಿಲ್ಲ. ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಅವರು ಬಂದು ಮನವೊಲಿಸಲು ಯತ್ನಿಸಿದರು ಪಟ್ಟು ಸಡಿಸಲಿಲ್ಲ. ರಾತ್ರಿ 9 ಗಂಟೆಯಾದರೂ ಬೆಳೆಗಾರರ ಸಭೆ ಮುಕ್ತಾಯವಾಗಿರಲಿಲ್ಲ. 

ಪೊಲೀಸರಿಗೆ ದೂರು: ‘ಕಾರ್ಖಾನೆ ಉಪಾಧ್ಯಕ್ಷ ಶರವಣ ಅವರು ಸಂಘದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ಸಂಘದ ಘನತೆಯನ್ನು ಹಾಳು ಮಾಡಿದ್ದಾರೆ. ಇಡೀ ರೈತ ಕುಲಕ್ಕೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. 

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಹೇಶ್‌ ಪ್ರಭು, ಮತ್ತೊಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್, ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಇತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು