ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ಕಾನೂನುಗಳ ವಿರುದ್ಧ ಪ್ರತಿಭಟನೆ

Last Updated 5 ನವೆಂಬರ್ 2020, 16:35 IST
ಅಕ್ಷರ ಗಾತ್ರ

ಚಾಮರಾಜನಗರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ರೈತ ಸಂಬಂಧಿ ಕಾನೂನುಗಳನ್ನು ವಿರೋಧಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ನಗರದ ಸಂತೇಮರಹಳ್ಳಿ ವೃತ್ತದ ಬಳಿಯ ಅಂಚೆ ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ಕೆಲ ಹೊತ್ತು ತಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಅವರು ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾನೂನುಗಳನ್ನು ಜಾರಿಗೆ ತರುತ್ತಿರುವುದು ಖಂಡನೀಯ. ಮೇಲ್ಮನೆಯಲ್ಲಿ ಸರಿಯಾಗಿ ಚರ್ಚಿಸದೇ ಮಸೂದೆ ಅಂಗೀಕಾರವಾಗದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ಜಾರಿ ಮಾಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಕಾನೂನನ್ನು ಪಂಜಾಬ್‌ ಸರ್ಕಾರ ಜಾರಿಗೊಳಿಸಿದೆ. ಕೇರಳದಲ್ಲಿ ತರಿಕಾರಿಗಳಿಗೆ ಕನಿಷ್ಠ ಬೆಲೆ ನಿಗದಿ ಪಡಿಸಲಾಗಿದೆ. ಇದೇ ಮಾದರಿಯ ಕಾನೂನುಗಳನ್ನು ರಾಜ್ಯದಲ್ಲೂ ಜಾರಿಗೆ ತರಬೇಕು’ ಎಂದು ಅವರು ಒತ್ತಾಯಿಸಿದರು.

‘ರೈತರಿಗೆ ಅನುಕೂಲ ಕಲ್ಪಿಸುವ ಇಂತಹ ಕಾನೂನುಗಳನ್ನು ಜಾರಿ ಮಾಡುವುದು ಬಿಟ್ಟು, ಉದ್ಯಮಿಗಳಿಗೆ, ಕಾರ್ಪೊರೇಟ್‌ ಸಂಸ್ಥೆಗಳಿಗೆ ಪ್ರಯೋಜನವಾಗುವ ಭೂಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆಯಂತಹ ಶಾಸನಗಳನ್ನುಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುತ್ತಿವೆ’ ಎಂದು ಅವರು ಆರೋಪಿಸಿದರು.

ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಅವರು ಹೇಳಿದರು.

ರಸ್ತೆ ತಡೆ ನಡೆಸಿದ್ದರಿಂದ ವಾಹನಗಳ ಸಂಚಾರಕ್ಕೆ ಸ್ವಲ್ಪ ಕಾಲ ತೊಂದರೆಯಾಯಿತು.

ರೈತ ಮುಖಂಡರಾದ ಹೊನ್ನೂರು ಬಸವಣ್ಣ, ಅಶೋಕ, ಪೃಥ್ವಿ, ಮಹದೇವಸ್ವಾಮಿ, ಮಲ್ಲಿಕ್‌, ರಘು, ಅಣ್ಣೂರುಕೇರಿ ಸಿದ್ದರಾಜು, ಮಣಿ ಅಂಬಳೆ ಬಸವಣ್ಣ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT