ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಸ್ವಂತ ಮರಗಳ ಸಾಗಿಸಲು ಅಡ್ಡಿ; ರೈತರ ಆರೋಪ

ಅರಣ್ಯ ಇಲಾಖೆ ವಿರುದ್ಧ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆ
Last Updated 5 ಜನವರಿ 2022, 12:11 IST
ಅಕ್ಷರ ಗಾತ್ರ

ಚಾಮರಾಜನಗರ: ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ತೇಗದ ಮರಗಳನ್ನು ತನ್ನ ಮನೆಗೆ ಬಳಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಅಡ್ಡಿ ಪಡಿಸುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಆಶ್ರಯದಲ್ಲಿ ರೈತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ಕುಳಿತ ಪ್ರತಿಭಟನಕಾರರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಅವರು ಮಾತನಾಡಿ, ’ಜಿಲ್ಲೆಯ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ತೇಗದ ಮರಗಳನ್ನು ತಮ್ಮ ಸ್ವಂತಕ್ಕೆ ಬಳಸಲು ಅಡ್ಡಿ ಪಡಿಸಲಾಗುತ್ತಿದೆ. ಮರಗಳನ್ನು ಜಮೀನಿನಿಂದ ಸಾಗಿಸುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ‘ ಎಂದು ದೂರಿದರು.

’ನಮ್ಮದೇ ಮರವನ್ನು ಬಳಸುವುದಕ್ಕೆ ತೊಂದರೆ. ಬೇರೆಯವರಿಂದ ಖರೀದಿಸಿದರೆ ಯಾವ ಸಮಸ್ಯೆಯೂ ಇಲ್ಲ. ಇದು ಸರಿಯಲ್ಲ. ರೈತ ತನ್ನ ಜಮೀನಿನಲ್ಲಿ ಬೆಳೆದ ಮರಗಳನ್ನು ಬಳಸುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಯಾವುದೇ ತೊಂದರೆ ಕೊಡಬಾರದು. ಜಮೀನಿನಲ್ಲಿ ಬೆಳೆದಿರುವ ಮರಗಳ ಕಟಾವಿಗೆ ಶೀಘ್ರವಾಗಿ ಪರವಾನಗಿ ಕೊಡಬೇಕು‘ ಎಂದು ಒತ್ತಾಯಿಸಿದರು.

’ಚಾಮರಾಜನಗರದ ಸುತ್ತಮುತ್ತ ಹುಲಿ, ಚಿರತೆಗಳ ಹಾವಳಿ ಹೆಚ್ಚಾಗಿದ್ದು ಜನ ಹಾಗೂ ಜಾನುವಾರುಗಳಿಗೆ ತೊಂದರೆ ನೀಡುತ್ತಿವೆ. ಇದರ ಬಗ್ಗೆ ಅರಣ್ಯ ಇಲಾಖೆ ಕೈಗೊಳ್ಳಬೇಕು.ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹಣ ಪಡೆದು ವಾಹನಗಳನ್ನು ಬಿಡುತ್ತಿದ್ದಾರೆ. ಇದನ್ನು ತಡೆಯಬೇಕು‘ ಎಂದು ಗುರು‍ಪ್ರಸಾದ್‌ ಆಗ್ರಹಿಸಿದರು.

ಜಿಲ್ಲೆಯ ಅರಣ್ಯ ಇಲಾಖೆಯ ಎಲ್ಲ ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಸಭೆ ನಡೆಸಿ ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಉನ್ನತ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಸ್ಥಳಕ್ಕೆ ಬಂದ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್ ಅವರು, ಪ್ರತಿಭಟನಕಾರರ ಅಹವಾಲುಗಳನ್ನು ಆಲಿಸಿದರು.

ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಆದಷ್ಟು ಬೇಗ ಬಗೆಹರಿಸುವುದಾಗಿ ಅವರು ಭರವಸೆ ನೀಡಿದರು. ಬಳಿಕ ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆದರು.

ರೈತ ಸಂಘದ ಪದಾಧಿಕಾರಿಗಳಾದ ಮಾಡ್ರಹಳ್ಳಿ ಮಹದೇವಪ್ಪ, ಮಹೇಶ್, ಸಂಪತ್ತು, ಪ್ರಸಾದ್, ಮಲೆಮಹದೇಶ್ವರಬೆಟ್ಟ ಪ್ರಸಾದ್, ನಾಗ, ಕೆ.ವಿ.ಮಾದೇಶ್, ಅನಿಲ್, ಅಶೋಕ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT