ಗುರುವಾರ , ಜೂನ್ 17, 2021
29 °C
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಗೆ ವಿರೋಧ, ವಾಪಸ್‌ಗೆ ಆಗ್ರಹ

ರೈತರ ಪ್ರತಿಭಟನೆ; ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರಾಜ್ಯ ಸರ್ಕಾರವು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ರೈತ ವಿರೋಧಿ ಕಾಯ್ದೆ ಹೋರಾಟ ಸಮಿತಿಯ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿವೆ ಎಂಬುದು ವಿವಿಧ ರೈತ ಸಂಘಟನೆಗಳ ಆರೋಪ. ಈ ಸಂಘಟನೆಗಳು ಒಂದಾಗಿ ರೈತ ವಿರೋಧಿ ಕಾಯ್ದೆ ಹೋರಾಟ ಸಮಿತಿಯನ್ನು ರಚಿಸಿವೆ. ಈ ಸಮಿತಿಯ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು.

ರೈತರು, ರೈತ ಮುಖಂಡರು, ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಎದುರು ಸಮಾವೇಶಗೊಂಡರು. ಅಲ್ಲಿಂದ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೃಷಿ, ರೈತರಿಗೆ ಸಂಬಂಧಿಸಿದ ಹಲವು ಕಾನೂನುಗಳನ್ನು ತಿದ್ದುಪಡಿ ಮಾಡಿ ರೈತ ವಿರೋಧಿ ಧೋರಣೆ ತಾಳುತ್ತಿವೆ. ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ರೈತರಿಗೆ ಅನ್ಯಾಯ ಎಸಗಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘಟನೆಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆಯೂ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. 

ವಶಕ್ಕೆ: ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಬೇಕು ಎಂಬುದು ಪ್ರತಿಭಟನನಿರತರು ಪಟ್ಟು ಹಿಡಿದರು. ಇಬ್ಬರೂ ಅಧಿಕಾರಿಗಳು ಬಾರದೇ ಇದ್ದಾಗ ಜಿಲ್ಲಾಡಳಿತ ಭವನಕ್ಕೆ ನುಗ್ಗಲು ಯತ್ನಿಸಿದರು. ಇದನ್ನು ಪೊಲೀಸರು ತಡೆದರು. ಪೊಲೀಸ್‌ ಸಿಬ್ಬಂದಿ ಹಾಗೂ ರೈತ ಮುಖಂಡರ ನಡುವೆ ವಾಗ್ವಾದ ನಡೆಯಿತು. ಮಾತು ಕೇಳದೇ ಇದ್ದಾಗ, ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು, ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದರು.

ಹೋರಾಟ ಸಮಿತಿ ಸಂಚಾಲಕರಾದ ಹೊನ್ನೂರು ಪ್ರಕಾಶ್‌, ಹಳ್ಳಿಕೆರೆಹುಂಡಿ ಭಾಗ್ಯರಾಜ್‌, ಗುರು ಪ್ರಸಾದ್‌, ಮುಖಂಡರಾದ ಮಾಡ್ರಳ್ಳಿ ಮಹದೇವಪ್ಪ, ಮೂಕಹಳ್ಳಿ ಮಹದೇವಸ್ವಾಮಿ, ಪಟೇಲ್‌ ಶಿವಮೂರ್ತಿ, ಹಾಡ್ಯರವಿ, ಹೆಗ್ಗವಾಡಿಪುರ ಮಹದೇವಸ್ವಾಮಿ, ಹಾಲಹಳ್ಳಿ ಮಹೇಶ್‌, ಕಡಬೂರು ಮಂಜುನಾಥ್, ಚಂಗಡಿ ಕರಿಯಪ್ಪ, ವಿಜಯಕುಮಾರ್‌, ಪೃಥ್ವಿ, ಸಿದ್ಧಶೆಟ್ಟಿ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.