ಸೋಮವಾರ, ಜನವರಿ 18, 2021
27 °C

ದೆಹಲಿಯಲ್ಲಿ ರೈತರ ಹೋರಾಟ ಹತ್ತಿಕ್ಕುವ ಯತ್ನ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸೇರಿದ ಪ್ರತಿಭಟನಕಾರರು ಅರೆನಗ್ನರಾಗಿ ಕುತ್ತಿಗೆಗೆ ತೆಂಗಿನ ಕಾಯಿ ಚಿಪ್ಪಿನ ಹಾರ ಹಾಕಿ, ತಲೆಯಲ್ಲಿ ಚಪ್ಪಡಿ ಕಲ್ಲು ಇಟ್ಟುಕೊಂಡು ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ವೃತ್ತದಲ್ಲಿ ಕಲ್ಲಿನಿಂದ ಚಿತೆ ನಿರ್ಮಿಸಿ, ಅಲ್ಲಿ ಚಿಪ್ಪು ರಾಶಿ ಹಾಕಿ ಬೆಂಕಿ ಹಚ್ಚಿ ಪುರಿ ಹಂಚಿದರು. ಕೆಲ ಕಾಲ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಅವರು ಮಾತನಾಡಿ, ‘ಕೇಂದ್ರ ಸರ್ಕಾರ ಮೂರು ರೈತ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಸಾವಿರಾರು ರೈತರು ಹೋರಾಟ ಮಾಡುತ್ತಿದ್ದಾರೆ. ರೈತರನ್ನು ಗೌರವಯುತವಾಗಿ ಕೂರಿಸಿ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡದೆ ಅವರ ಮೇಲೆ ಜಲ ಫಿರಂಗಿ ಪ್ರಯೋಗ ಮಾಡುವ ಕೆಲಸ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅವರು ಮಾತನಾಡಿ, ‘ಮೋದಿ ಸರ್ಕಾರ ಏಳು ವರ್ಷಗಳಲ್ಲಿ ರೈತರಿಗೆ ಏನೂ ಮಾಡಿಲ್ಲ. ಅನ್ನದಾತರ ತಲೆಗೆ ಚಪ್ಪಡಿ ಕಲ್ಲು ಹಾಕಿ, ಕೈಗೆ ಚಿಪ್ಪು ನೀಡಿದೆ. ನರೇಂದ್ರ ಮೋದಿ, ಅಮಿತ್ ಷಾ ಅವರು ದೇಶದಲ್ಲಿ ಎಲ್ಲವನ್ನೂ ಖಾಸಗೀಕರಣ ಮಾಡಲು ಹೊರಟಿದ್ದಾರೆ. ಮೋದಿ ಅವರು ಅಧಿಕಾರದಿಂದ ಕೆಳಗೆ ಇಳಿಯುವ ತನಕ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ’ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಹೆಗ್ಗೋಠಾರ ಗಿರಿ, ಸಂಪತ್ತು, ವಿಜಯಕುಮಾರ್, ಮಹೇಶ್, ಗುರು, ಪೃಥ್ವಿ, ಮಹದೇವಸ್ವಾಮಿ, ಬಸವಣ್ಣ, ಜಗ್ಗಿ, ಶೇಖರ್, ಮಲ್ಲಿಕ್ ಇತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು