ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು - ಐದು ಕಡೆ ಚೆಕ್‌ಪೋಸ್ಟ್ ನಿರ್ಮಾಣ: ಅಂತರಾಜ್ಯ ಸಂಚಾರ ಬಂದ್‌

ಹೊರಗಿನಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ
Last Updated 27 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಹನೂರು: ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಹಾಗೂ 14 ದಿನಗಳ ಲಾಕ್‌ಡೌನ್‌ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾಡಳಿತವು ತಾಲ್ಲೂಕಿನ ಐದು ಕಡೆಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿದೆ.

ಸರಕು ಸಾಗಣೆ ವಾಹನಗಳನ್ನು ಬಿಟ್ಟು, ಅಂತರರಾಜ್ಯ ಸಾರಿಗೆ, ಖಾಸಗಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈಗಾಗಲೇ ಮೂರು ಕಡೆ ಚೆಕ್ ಪೋಸ್ಟ್‌ಗಳಿದ್ದು, ಉಳಿದಂತೆ ಇನ್ನು ಎರಡು ಕಡೆ ಚೆಕ್ ಪೋಸ್ಟ್ ತೆರೆಯಲಾಗುವುದು ಪೊಲೀಸ್ ಇಲಾಖೆ ತಿಳಿಸಿದೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಧನಾರಿಪುರ, ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ ರೋಡ್ ಚೆಕ್ ಪೋಸ್ಟ್ ಜೊತೆಗೆ ಹೂಗ್ಯಂ ಬಳಿಯ ಮಾಕನಪಾಳ್ಯ ಬಳಿ ಚೆಕ್ ಪೋಸ್ಟ್ ತೆರೆಯಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟದ ಪಾಲಾರ್ ಚೆಕ್ ಪೋಸ್ಟ್ ಜೊತೆಗೆ ಹೊಗೇನಕಲ್ ಜಲಪಾತದ ಬಳಿಯೂ ಚೆಕ್ ಪೋಸ್ಟ್ ತೆರೆಯಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.

‘ಸರ್ಕಾರ ಲಾಕ್‌ಡೌನ್‌ ಘೋಷಿಸಿದೆ. ಈ ನಿಟ್ಟಿನಲ್ಲಿ ಅಂತರರಾಜ್ಯ ಗಡಿ ಬಂದ್ ಮಾಡಲಾಗಿದೆ. ಈಗಾಗಲೇ ಅರ್ಧನಾರಿಪುರ ಚೆಕ್ ಪೋಸ್ಟ್‌ಗೆ ಮಂಗಳವಾರ ರಾತ್ರಿಯಿಂದಲೇ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು. ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನು ಮುಂದೆ ನಿತ್ಯ ಪೊಲೀಸ್ ವಾಹನ ಗಸ್ತು ತಿರುಗಲಿದೆ. ಸಾರ್ವಜನಿಕರು ಅನವಶ್ಯಕವಾಗಿ ಗುಂಪು ಸೇರುವುದು, ಅನಗತ್ಯವಾಗಿ ಓಡಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮನೆಯಲ್ಲೇ ಇರುವ ಮೂಲಕ ಸರ್ಕಾರದ ಆದೇಶವನ್ನು ಪಾಲಿಸಬೇಕು’ ಎಂದು ಹನೂರು ಠಾಣೆಯ ಇನ್‍ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಲಸಿಕೆ ಪಡೆಯಲು ಅಡ್ಡಿ ಇಲ್ಲ: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ತಾಲ್ಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಲಸಿಕೆ ಅಭಿಯಾನ ನಡೆಯುತ್ತಿದೆ. ಲಾಕ್‍ಡೌನ್ ಇದ್ದರೂ ಲಸಿಕೆ ಹಾಕಿಸಿಕೊಳ್ಳುವವರು ತಮ್ಮ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ಎಲ್ಲ ಆರೋಗ್ಯ ಕೇಂದ್ರಗಳು ಭಾನುವಾರವೂ ಕಾರ್ಯನಿರ್ವಹಿಸಲಿವೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರಕಾಶ್ ಅವರು ಮಾಹಿತಿ ನೀಡಿದರು.

ಹೊರಗಿನಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ

‘ಬೆಂಗಳೂರು, ಮೈಸೂರು, ತಮಿಳುನಾಡು, ಕೇರಳ ಸೇರಿದಂತೆ ಇತರೆ ಪ್ರದೇಶಗಳಿಗೆ ಕೂಲಿ ಕೆಲಸಕ್ಕೆ ಹೋಗಿದ್ದವರು ಲಾಕ್‍ಡೌನ್ ಇರುವ ಕಾರಣದಿಂದ ಗ್ರಾಮಗಳಿಗೆ ಬಂದರೆ ಅವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ತಮಗೆ ಹತ್ತಿರವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆಗೊಳಗಾಗಿ ಸೋಂಕು ದೃಢಪಟ್ಟರೆ ಕಡ್ಡಾಯವಾಗಿ ಕ್ವಾರಂಟೈನ್ ಆಗಬೇಕು’ ಎಂದು ತಹಶೀಲ್ದಾರ್ ನಾಗರಾಜು ತಿಳಿಸಿದರು.

ಕೋವಿಡ್‌ ಕೇರ್‌ ಕೇಂದ್ರ ಸ್ಥಾಪನೆ

ತಾಲ್ಲೂಕಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಪ್ರತ್ಯೇಕವಾಗಿರಿಸಲು ತಾಲ್ಲೂಕು ಕೇಂದ್ರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್‌ ಕೇರ್‌ ಕೇಂದ್ರವನ್ನು ತೆರೆಯಲಾಗಿದೆ. ಇದರಲ್ಲಿ 200 ಹಾಸಿಗೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾಗೀರಥಿ ಹಾಗೂ ಹನೂರು ತಹಶೀಲ್ದಾರ್ ನಾಗರಾಜು ಅವರು ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT