ಹನೂರು: ‘ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ವರಿಷ್ಠರು ಸಹ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ’ ಎಂದು ಮಾಜಿ ಸಚಿವ ಕೋಟೆ ಶಿವಣ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಸಚಿವನಾಗಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷನಾಗಿ ಪಕ್ಷಕ್ಕಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದೇನೆ. ಈ ಬಾರಿಯೂ ಸಹ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿಯಾಗಿ ಜಯಗಳಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಯೂ ಸಹ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ರಾಜ್ಯದಲ್ಲಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ₹ 11,400 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದೆ . ಪರಿಶಿಷ್ಟ ಜಾತಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.
‘ಇನ್ನೊಂದೆಡೆ ಕಾವೇರಿ ನೀರು ವಿಚಾರವಾಗಿ ಸಕಾಲದಲ್ಲಿ ಅಧಿಕಾರಿಗಳು ವಾದ ಮಂಡನೆ ಮಾಡದೆ ಇರುವುದರಿಂದ ಹೆಚ್ಚಿನ ನೀರನ್ನು ಬಿಡುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ರಾಜ್ಯದ ನಾಯಕರು ಮಾತನಾಡುತ್ತಿದ್ದಾರೆ . ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. 196 ಬರಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದಾರೆ . ಆದರೆ ಇದುವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ ಈ ಬಗ್ಗೆ ಕೇಂದ್ರ ಸರ್ಕಾರದತ್ತ ಕೈ ತೋರುತ್ತಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದನ್ನು ನಾವು ಸ್ವಾಗತ ಮಾಡುತ್ತೇವೆ ಯಾಕೆಂದರೆ ಮುಂದೆ ಈ ದೇಶದ ಪ್ರಧಾನಿ ನರೇಂದ್ರ ಮೋದಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್.ಲ ಅಲ್ಲದೇ ಈ ಚಾಮರಾಜನಗರ ಲೋಕಸಭಾ ಕ್ಷೇತ್ರ ಬಿಜೆಪಿ ಗೆ ಹೇಳಿ ಮಾಡಿಸಿದಂತಹ ಕ್ಷೇತ್ರವಾಗಿದೆ ಈಗಾಗಲೇ ಹಾಲಿ ಸಂಸದರು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹಾಗಾಗಿ ನಾನು ಅವರ ಮಾರ್ಗದರ್ಶನದಲ್ಲಿಯೇ ಚುನಾವಣೆ ಎದುರಿಸಲು ಹಾಗೂ ಪಕ್ಷ ಸಂಘಟನೆ ಮಾಡಲು ಮಲೆ ಮಾದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 5 ರಂದು ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಲಿದ್ದೇನೆ’ ಎಂದರು.
ಚಾಮರಾಜನಗರ ಜಿಲ್ಲಾ ಮಾದಿಗ ಮೀಸಲಾತಿ ಹೋರಾಟದ ಅಧ್ಯಕ್ಷ ರಾಜಶೇಖರ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜು, ಗ್ರಾಮ ಪಂಚಾಯಿತಿ ಸದಸ್ಯ ಮಹದೇವ್, ಮುಖಂಡರಾದ ಗುರುಸ್ವಾಮಿ, ಅರವಿಂದ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.