ಭಾನುವಾರ, ಜೂನ್ 20, 2021
21 °C
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಎಸ್‌.ಸುರೇಶ್‌ಕುಮಾರ್‌ ಭೇಟಿ

ಚಾಮರಾಜನಗರ: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್‌ ಕುಮಾರ್‌ಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ರದ್ದುಪಡಿಸಿ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕು, ಲಾಕ್‌ ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಬೇಕು ಎಂಬುದು ಸೇರಿದಂತೆ ವಿವಿಧ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರಿ ‍ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರಿಗೆ ಮನವಿ ಮಾಡಿದರು. 

ಅತಿಥಿ ಉಪನ್ಯಾಸಕರು ಜಿಲ್ಲಾ ಸಮನ್ವಯ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಹಾಗೂ ಇತರರು ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. 

‘ರಾಜ್ಯ ಸರ್ಕಾರಗಳೇ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಿದ ಉದಾಹರಣೆ ಇದೆ. ಹರಿಯಾಣ ಅಥವಾ ಪಶ್ಚಿಮ ಬಂಗಾಳ ಮಾದರಿಯಲ್ಲಿ ಅತಿಥಿ ಉಪನ್ಯಾಸಕರಿಗೆ ಅಥವಾ ಭದ್ರತೆ ಒದಗಿಸಿಕೊಡಬೇಕು’ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಗುರುರಾಜು ಯರಗನಹಳ್ಳಿ ವಿನಂತಿಸಿದರು. 

ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸುರೇಶ್‌ ಕುಮಾರ್‌ ಅವರು, ‘ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದೊಂದಿಗೆ ಚರ್ಚಿಸಲಾಗುವುದು’ ಎಂದು ಭರವಸೆ ನೀಡಿದರು.

‘ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಕಾನೂನಿನ ತೊಡಕಿದೆ. ಉಮಾದೇವಿ ಪ್ರಕರಣದಲ್ಲಿ ಕೆಲವು ನಿಯಮಗಳನ್ನು ಸುಪ್ರೀಂ ಕೋರ್ಟ್ ರೂಪಿಸಿದೆ. ಆ ಎಲ್ಲ ನಿಯಮಗಳನ್ಙು ಪೂರ್ಣಗೊಳಿಸಲು ಸಾಧ್ಯವಿಲ್ಲ. ಹಾಗಾಗಿ ಸರ್ಕಾರದ ಜೊತೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೂ ಮನವಿ ಪತ್ರ ಸಲ್ಲಿಸಲಾಯಿತು. ಈ ವಿಚಾರವನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನ್ಯಾಯಕೊಡಿಸಿ ಕೊಡಬೇಕು ಎಂದು ಅತಿಥಿ ಉಪನ್ಯಾಸಕರು ಕೇಳಿಕೊಂಡರು.

ಸಮಿತಿಯ ಜಿಲ್ಲಾ ಸಂಯೋಜಕ, ತೆರಕಕಣಾಂಬಿ ಪದವಿ ಕಾಲೇಜಿನ ಡಾ.ವಿಶ್ವನಾಥ, ಕೊಳ್ಳೇಗಾಲ ಮಹದೇಶ್ವರ ಸರ್ಕಾರಿ ಪದವಿ ಕಾಲೇಜಿನ ಮಹದೇವಸ್ವಾಮಿ, ಮಹೇಶ್‌, ಗೌರವ ಸಲಹೆಗಾರ ಎಚ್.ಎಂ.ನಾಗೇಂದ್ರ ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.