ಶುಕ್ರವಾರ, ಜೂನ್ 18, 2021
20 °C
ತುರ್ತು ಚಿಕಿತ್ಸೆ ಮಾತ್ರ ಲಭ್ಯ, ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಕೆಗೆ ನಿರ್ಧಾರ

ಚಾಮರಾಜನಗರದಲ್ಲೂ ವೈದ್ಯರ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪ್ರಭಾರ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್‌ಕುಮಾರ್‌ ಮಿಶ್ರಾ ಅವರೇ ಕಾರಣ ಎಂದು ಆರೋಪಿಸಿ, ಅವರ ಅಮಾನತಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಯಿತು. 

ವೈದ್ಯರು ಕರ್ತವ್ಯಕ್ಕೆ ಹಾಜರಾಗದೇ ಇದ್ದುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗಗಳು ಕಾರ್ಯನಿರ್ವಹಿಸಲಿಲ್ಲ. ತುರ್ತು ಚಿಕಿತ್ಸೆಗಳು ಮಾತ್ರ ಲಭ್ಯವಿದ್ದವು. 

ವೈದ್ಯರ ಮುಷ್ಕರದಿಂದಾಗಿ ಜನರು ತೊಂದರೆ ಅನುಭವಿಸಬೇಕಾಯಿತು. ಚಿಕಿತ್ಸೆಗಾಗಿ ಬಂದಿದ್ದ ಹೊರ ರೋಗಿಗಳು ವೈದ್ಯರು ಇಲ್ಲದೇ ಇದ್ದುದರಿಂದ ವಾಪಸ್‌ ಹೋಗಬೇಕಾಯಿತು. 

‘ಸಂಘದ ರಾಜ್ಯ ಘಟಕದ ಸೂಚನೆಯಂತೆ ನಾವು ಕೂಡ ಮುಷ್ಕರದಲ್ಲಿ ಪಾಲ್ಗೊಂಡಿದ್ದೇವೆ. ಮೈಸೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್‌ಕುಮಾರ್‌ ಮಿಶ್ರಾ ಅವರನ್ನು ಅಮಾನತು ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಸೋಮಣ್ಣ ನಾಯಕ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಹಿನ್ನಡೆ: ಸರ್ಕಾರಿ ವೈದ್ಯರು ಮುಷ್ಕರ ಆರಂಭಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್‌ ವಿರುದ್ಧದ ಹೋರಾಕ್ಕೆ ಕೊಂಚ ಹಿನ್ನಡೆಯಾಗಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆ, ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ ತೊಂದರೆಯಾಗಿದೆ. 

‘ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸಾ ಸೇವೆ ನೀಡಲಾಗಿದೆ. ಹೊರರೋಗಿಗಳ ವಿಭಾಗ ಇರಲಿಲ್ಲ. ಫಿವರ್‌ ಕ್ಲಿನಿಕ್‌ಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ ಸ್ವಲ್ಪ ತೊಂದರೆಯಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಜಿಲ್ಲಾಸ್ಪತ್ರೆ ಕಾರ್ಯನಿರ್ವಹಣೆ

ನಗರದಲ್ಲಿರುವ ಜಿಲ್ಲಾಸ್ಪತ್ರೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವುದರಿಂದ ಅಲ್ಲಿ ಎಲ್ಲ ಸೇವೆಗಳು ಲಭ್ಯವಿದ್ದವು. ಆದರೆ, ವೈದ್ಯರು ಕಪ್ಪು ಪಟ್ಟಿಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವ ಮೂಲಕ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದರು. 

‘ನಮ್ಮಲ್ಲಿ ಹೊರ ರೋಗಿಗಳ ವಿಭಾಗ ಸೇರಿದಂತೆ ಎಲ್ಲ ಆರೋಗ್ಯ ಸೇವೆಗಳನ್ನು ನೀಡಿದ್ದೇವೆ. ಹಬ್ಬದ ಮುನ್ನಾದಿನವಾದ್ದರಿಂದ ಹೊರರೋಗಿ ವಿಭಾಗದಲ್ಲಿ ಜನರ ಸಂಖ್ಯೆ ಕಡಿಮೆ ಇತ್ತು. ಕರ್ತವ್ಯದಲ್ಲಿದ್ದ ಎಲ್ಲ ವೈದ್ಯರು, ಕೈಗೆ ಕಪ್ಪು ಪಟ್ಟಿ ಧರಿಸಿ ವೈದ್ಯರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು’ ಎಂದು ಜಿಲ್ಲಾ ಸರ್ಜನ್‌ ಡಾ.ಕೃಷ್ಣಕುಮಾರ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು