ಶನಿವಾರ, ಜನವರಿ 28, 2023
14 °C

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯವಾಗಿರುವುದರಿಂದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಬುಧವಾರ ಹೇಳಿದರು. 

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯುಕ್ರಮದಲ್ಲಿ ಅವರು ಮಾತನಾಡಿದರು. 

ಸರ್ಕಾರಿ ನೌಕರರು ದಿನನಿತ್ಯ ಒತ್ತಡದಿಂದ ಕರ್ತವ್ಯ ನಿರ್ವಹಿಸುವುದರಿಂದ ಕ್ರೀಡೆಯಲ್ಲಿ ಪಾಲ್ಗೊಂಡು ದೈಹಿಕ ಹಾಗೂ ಮಾನಸಿಕ ಸದೃಢರಾಗಬೇಕು ಎಂದರು. 

ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ‘ಚಾಮರಾಜನಗರ ಸಾಂಸ್ಕೃತಿಕ ಕಲೆಗಳ ತವರೂರು. ಕಲೆ ಸಾಹಿತ್ಯ, ಸಂಸ್ಕೃತಿಯ ಜೊತೆಗೆ ಕ್ರೀಡಾಕೂಟ ಆಯೋಜನೆ ಸಂತಸ ತಂದಿದೆ’ ಎಂದರು.

‘ಸಾಕಷ್ಟು ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಸರ್ಕಾರಿ ನೌಕರರು ದಿನಂಪ್ರತಿ ಒತ್ತಡದ ಜೊತೆಗೆ ಕೆಲಸ ಮಾಡುವ ಅನಿವಾರ್ಯತೆ ಎದುರಾಗಿದೆ. ನೌಕರರಿಗೂ ವೈಯಕ್ತಿಕ ಬದುಕು ಇದೆ. ಇದನ್ನು ಮನಗಂಡಿರುವ ರಾಜ್ಯಸರ್ಕಾರ ನೌಕರರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದೆ. ಪ್ರಸ್ತುತ ಕ್ರೀಡಾಕೂಟದ ವೆಚ್ಚವನ್ನು ಸರ್ಕಾರವು ₹25 ಲಕ್ಷದಿಂದ ₹3 ಕೋಟಿಗೆ ಹೆಚ್ಚಿಸಿದೆ’ ಎಂದರು.  

ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಾತನಾಡಿ, ‘ಸರ್ಕಾರಿ ನೌಕರರಿಗೆ ಇದು ಕ್ರೀಡಾ ಉತ್ಸವ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ನೌಕರರು ದೇಹವನ್ನು ಸದೃಢವಾಗಿಟ್ಟುಕೊಳ್ಳಬೇಕು. ನೌಕರರು ಪ್ರತಿದಿನ ಕ್ರೀಡೆಯಲ್ಲಿ ತೊಡಗುವುದರಿಂದ ದೇಹ ಮತ್ತು ಮನಸ್ಸು ಸಮಸ್ಥಿತಿಗೆ ಬರಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಮಾತನಾಡಿದರು. 

ಇದೇ ವೇಳೆ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ನಗದು ಬಹುಮಾನ, ಸ್ಮರಣಿಕೆಯೊಂದಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ನಗರಸಭೆ ಅಧ್ಯಕ್ಷೆ ಸಿ.ಎಂ.ಆಶಾ. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ಆಯುಕ್ತ ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಇದ್ದರು. 

ಸಮಾರೋಪ ಇಂದು: ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಗುರುವಾರ ಸಂಜೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು