ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡೆಯಿಂದ ಮನೋಲ್ಲಾಸ: ಶಿಲ್ಪಾ ನಾಗ್‌

Published 5 ಮಾರ್ಚ್ 2024, 4:32 IST
Last Updated 5 ಮಾರ್ಚ್ 2024, 4:32 IST
ಅಕ್ಷರ ಗಾತ್ರ

ಚಾಮರಾಜನಗರ: ‘ಸರ್ಕಾರಿ ನೌಕರರು ದೈನಂದಿನ ಕೆಲಸಗಳ ಒತ್ತಡ ನಿವಾರಿಸಲು ಕ್ರೀಡೆ ಸಹಕಾರಿಯಾಗಿದ್ದು, ಪ್ರತಿ ದಿನ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಂಡು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೋಮವಾರ ಸಲಹೆ ನೀಡಿದರು. 

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜೀವನ ಭದ್ರತೆಗಾಗಿ ಸರ್ಕಾರಿ ಕೆಲಸಕ್ಕೆ ಬರುವ ನೌಕರರಿಗೆ ಮೊದಮೊದಲು ಅನೇಕ ಸವಾಲುಗಳು ಎದುರಾಗಬಹುದು. ಎಲ್ಲ ಸಮಸ್ಯೆ, ಸವಾಲುಗಳನ್ನು ಮೀರಿ ಸರ್ಕಾರಿ ಕೆಲಸದಲ್ಲಿ ದಕ್ಷತೆ ಸಾಧಿಸಬೇಕಾಗುತ್ತದೆ. ಇಂತಹ ಒತ್ತಡಗಳ ನಿರ್ವಹಣೆಗೆ ನೌಕರರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಿಂದ ಮನೋಲ್ಲಾಸ ಉಂಟಾಗುತ್ತದೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ ವಯಸ್ಕರು, ಇತರರು ಚಿಕ್ಕ ವಯಸ್ಸಿನಲ್ಲಿಯೇ ಹೃದಯ ರೋಗಗಳಂತಹ ಗಂಭೀರ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ಇದು ಆರೋಗ್ಯದ ಕುರಿತ ಎಚ್ಚರಿಕೆಯ ಗಂಟೆಯಾಗಿದೆ. ಒತ್ತಡ ನಿವಾರಣೆಗಾಗಿ ಪ್ರತಿಯೊಬ್ಬರೂ ದಿನನಿತ್ಯ ವ್ಯಾಯಾಮ, ಯೋಗ, ನಡಿಗೆಯಂತಹ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಉತ್ತಮ ಆರೋಗ್ಯ ಹೊಂದಿದರೆ ಎಲ್ಲವನ್ನು ಸುಲಲಿತವಾಗಿ ನಿಭಾಯಿಸಬಹುದು’ ಎಂದು ತಿಳಿಸಿದರು.

ಕ್ರೀಡಾ ಜ್ಯೋತಿ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪಿ.ಲಕ್ಷ್ಮಿ ಅವರು, ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಬಗ್ಗೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಸ್ವಾಮಿ, ಕೃಷಿ ಜಂಟಿ ನಿರ್ದೇಶಕ ಅಬೀಬ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕಿ ಸವಿತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಎಸ್.ಮಹದೇವಸ್ವಾಮಿ ಇದ್ದರು.

ಸಮಾರೋಪ ಇಂದು

ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಾ.5ರಂದು ಮಂಗಳವಾರ 4 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT