ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಶಿಕ್ಷಣ ಇಲಾಖೆಯ ವಿಳಂಬ ನೀತಿಗೆ ಅತಿಥಿ ಉಪನ್ಯಾಸಕರ ಖಂಡನೆ

Last Updated 29 ಡಿಸೆಂಬರ್ 2020, 10:26 IST
ಅಕ್ಷರ ಗಾತ್ರ

ಚಾಮರಾಜನಗರ: ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸುವ ವಿಚಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತ ಭವನದ ಮುಂಭಾಗ ಸೇರಿದ ಪ್ರತಿಭಟನಕಾರರು, ಕಾಲೇಜು ಶಿಕ್ಷಣ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸುವಂತೆ ಉನ್ನತ ಶಿಕ್ಷಣ ಸಚಿವರು ಆದೇಶಿಸಿ ತಿಂಗಳು ಕಳೆದರೂ ಕಾಲೇಜು ಶಿಕ್ಷಣ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ಎಂಟು ತಿಂಗಳುಗಳಿಂದ ಉದ್ಯೋಗ, ವೇತನವಿಲ್ಲದೇ ಉಪನ್ಯಾಸಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ’ ಎಂದು ದೂರಿದರು.

‘ಕಾಲೇಜು ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಬೋಧಿಸುವುದಕ್ಕೆ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿದೆ. ಮತ್ತೆ ಅವರನ್ನೇ ಮುಂದುವರಿಸುವ ಬಗ್ಗೆ ಆದೇಶ ಹೊರಡಿಸದೇ ಇರುವುದರಿಂದ ಸಕಾಲಕ್ಕೆ ವಿದ್ಯಾರ್ಥಿ ಸಮುದಾಯಕ್ಕೆ ಪಾಠ, ಪ್ರವಚನ ಸಿಗದೆ ಅವರ ಭವಿಷ್ಯದ ಮೇಲೆ ಮಂಕು ಕವಿದಿದೆ’ ಎಂದು ಹೇಳಿದರು.

‘ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದೇಶಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಅವರು ಆದೇಶ ಮಾಡಿದಂತೆ 2020ರ ನವೆಂಬರ್ 17ರಿಂದಲೇ ಅತಿಥಿ ಉಪನ್ಯಾಸಕರ ಸೇವೆ ಎಂದು ಪರಿಗಣಿಸಬೇಕು. ಅತಿಥಿ ಉಪನ್ಯಾಸಕರ/ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೋವಿಡ್-19 ಮಾರ್ಗಸೂಚಿ ಅನ್ವಯ ತರಗತಿಗಳನ್ನು 40:50 ಅನುಪಾತದಲ್ಲಿ ವಿಭಜಿಸಬೇಕು. ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸಂಬಂಧಿತ ಕಡತವನ್ನು ಸಚಿವ ಸಂಪುಟ ಸಮಿತಿ ಮುಂದೆ ಮಂಡಿಸಿ ಉದ್ಯೋಗ ಭದ್ರತೆ ಘೋಷಿಸಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಗುರುರಾಜು, ಚಿಕ್ಕಸಿದ್ದಯ್ಯ, ಸಿಂಧೂ, ಮಹೇಶ್ವರಿ, ರಮೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT