ಚಾಮರಾಜನಗರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ಸಾಧನೆಗೆ ಶಿಕ್ಷಕರು ವಿಶೇಷ ಕಾಳಜಿಯಿಂದ ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಶನಿವಾರ ಹೇಳಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗುಣಾತ್ಮಕ ಕಲಿಕೆ ಹಾಗೂ ಫಲಿತಾಂಶ ಸುಧಾರಣೆ ಸಂಬಂಧ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆದು ಮುಂಬರುವ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಉತ್ತಮ ಸಾಧನೆ ಮಾಡುವಂತಾಗಬೇಕು. ಇದಕ್ಕೆ ಪೂರಕವಾಗಿ ಶಿಕ್ಷಕರು ವಿದ್ಯಾರ್ಥಿಗಳ ಅಗತ್ಯತೆಯನ್ನು ಮನಗಂಡು ವೈಯಕ್ತಿಕ ಮಾರ್ಗದರ್ಶನ ನೀಡಬೇಕು’ ಎಂದರು.
‘ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರು ಮುತುವರ್ಜಿ ವಹಿಸಬೇಕು. ವಿಶೇಷವಾಗಿ ಗಿರಿಜನ ಮಕ್ಕಳು, ಕಲಿಕೆಯಲ್ಲಿ ಹಿಂದುಳಿದಿರುವವರು ಹಾಗೂ ಶಾಲೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಮುಖ್ಯ ವಾಹಿನಿಗೆ ಬರಲು ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯವನ್ನು ಆದ್ಯತೆಯ ಕ್ಷೇತ್ರಗಳೆಂದು ಪರಿಗಣಿಸಲಾಗಿದ್ದು, ಶಾಲೆಯ ಅಗತ್ಯತೆಗಳಿಗೆ ಸಂಬಂಧಿಸಿದ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಬೇಕು’ ಎಂದರು.
‘ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಶಿಕ್ಷಣಕ್ಕೆ ಪೂರಕವಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಶಾಲೆಯ ಅಭಿವೃದ್ದಿ ಕೆಲಸಗಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೂ ನೆರವು ಪಡೆಯಬೇಕು. ಶಾಲಾ ಅಭಿವೃದ್ದಿ ಕಾರ್ಯಗಳಿಗೆ ನರೇಗಾ ಯೋಜನೆ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಡಿ.ಸಿ ಸಲಹೆ ನೀಡಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, ‘ಶಿಕ್ಷಕರನ್ನು ಒಳಗೊಂಡಂತೆ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ಕ್ರಿಯಾಯೋಜನೆಯನ್ನು ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜಿಲ್ಲೆಯ ಫಲಿತಾಂಶ ರಾಜ್ಯದಲ್ಲಿ ಮೊದಲ ಐದನೇ ಸ್ಥಾನದೊಳಗೆ ಬರುವಂತೆ ಕಾರ್ಯಪ್ರವೃತ್ತರಾಗಬೇಕು’ ಎಂದರು.
ಇದೇ ವೇಳೆ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ 60 ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಡಯಟ್ ಪ್ರಭಾರ ಪ್ರಾಂಶುಪಾಲ ಯು.ಆರ್. ಲಿಂಗರಾಜೇ ಅರಸ್, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.