ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳು ಕಲಿತರೆ ದೇಶ ಅಭಿವೃದ್ಧಿ: ಶಾಸಕ ಎ.ಆರ್.ಕೃಷ್ಣಮೂರ್ತಿ

Published 31 ಡಿಸೆಂಬರ್ 2023, 5:33 IST
Last Updated 31 ಡಿಸೆಂಬರ್ 2023, 5:33 IST
ಅಕ್ಷರ ಗಾತ್ರ

ಚಾಮರಾಜನಗರ: ‘ಮಕ್ಕಳು ಕಲಿತರೆ ದೇಶ ಅಭಿವೃದ್ಧಿಯಾಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರು ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತಾರೆ ಎಂದು ಎಂದು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಶನಿವಾರ ಹೇಳಿದರು.  

ನಗರದ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ  ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಶಿಕ್ಷಣ ಪಡೆಯಲು ಅವಕಾಶ ಕಡಿಮೆ ಇತ್ತು. ಆದರೆ, ಸ್ವಾತಂತ್ರ್ಯಾ ನಂತರ ಅಂಬೇಡ್ಕರ್ ರಚಿಸಿದ ಸಂವಿಧಾನದ ಪರಿಣಾಮವಾಗಿ ಎಲ್ಲರಿಗೂ ಶಿಕ್ಷಣ ಸಿಗುವಂತಾಯಿತು. ಶಿಕ್ಷಕರು ಮಕ್ಕಳಲ್ಲಿ ಶೈಕ್ಷಣಿಕವಾಗಿ ಜ್ಞಾನ ತುಂಬುವ ಕೆಲಸ ಮಾಡಬೇಕು. ರಾಜ್ಯದಲ್ಲಿ ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 8ನೇ ಸ್ಥಾನ ಪಡೆಯುವಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ’ ಎಂದರು.

ಚಾಮರಾಜನಗರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ‘ಚಾಮರಾಜನಗರ ಜಿಲ್ಲೆಯಾಗುವುದಕ್ಕೂ ಮೊದಲು ಇಲ್ಲಿ ಹೆಚ್ಚು ಶಿಕ್ಷಣ ಸಂಸ್ಥೆಗಳಿರಲಿಲ್ಲ. ಆದರೆ, ಈಗ ವೈದ್ಯ ಕೀಯ, ಎಂಜಿನಿಯರಿಂಗ್, ಕೃಷಿ ಕಾಲೇಜು, ವಿಶ್ವವಿದ್ಯಾಲಯ, ಮೊರಾರ್ಜಿ ವಸತಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು ಸೇರಿದಂತೆ ಇನ್ನೂ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಇದರಿಂದ ಜಿಲ್ಲೆಯ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಅನುಕೂಲಕರವಾಗಿದೆ’ ಎಂದರು. 

ಶಾಲಾ, ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಿದರೆ ಸಾಧನೆ ಮಾಡಲು ಸಾಧ್ಯ. 2003ರಿಂದ 2018ರವರೆಗೆ ಜಿಲ್ಲೆಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಸಾಕಷ್ಟು ಅನುದಾನ ಬಂದಿತು. ಅದರೆ, 2019–22ರ ಅವಧಿಯಲ್ಲಿ ಅನುದಾನಗಳು ಬರಲಿಲ್ಲ. ಸಿ.ಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ವಿಶೇಷ ಅನುದಾನ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿದೆ’ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು, ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದವರಿಗೆ ಮತ್ತು ಹೆಚ್ಚು ಅಂಕ ಪಡೆದ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್, ಜಿಲ್ಲಾಧ್ಯಕ್ಷ ಕೆ.ಎಸ್.ಮಾದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಡಯಟ್ ಪ್ರಾಂಶುಪಾಲ ಕಾಶಿನಾಥ್, ಡಯಟ್ ಉಪನ್ಯಾಸಕ ಲಿಂಗರಾಜೇ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ ಇತರರು ಇದ್ದರು. 

'ಮಕ್ಕಳ ಮನಸ್ಸನ್ನು ಗೆಲ್ಲಿ’
ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ ‘ಶಾಲೆಯಲ್ಲಿ ಮಕ್ಕಳಿಗೆ ಓದು ಬರಹ ಗಣಿತ ಕಲಿಸುವಿಕೆ ಬಹಳ ಮುಖ್ಯ. ಈ ಕಲ್ಪನೆಗಳನ್ನು ಮಕ್ಕಳಲ್ಲಿ ಬಿತ್ತುವ ನಿಟ್ಟಿನಲ್ಲಿ ಶಿಕ್ಷಕರು ಮುಂದಾಗಬೇಕು’ ಎಂದರು.  ‘ಮೊದಲು ಮಕ್ಕಳ ಮನಸ್ಸನ್ನು ಗೆದ್ದು ಆ ನಂತರ ಕಲಿಕೆಗೆ ಪ್ರಯೋಗ ಮಾಡಬೇಕು. ಶಿಕ್ಷಕರ ಸಮಸ್ಯೆ ಶಾಲಾ ಕೊಠಡಿಗಳ ಸಮಸ್ಯೆ ಮೂಲ ಸೌಕರ್ಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT