ಚಾಮರಾಜನಗರ: ತಾಲ್ಲೂಕಿನ ಹೊಂಡರಬಾಳುವಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ ಪ್ರಯೋಗಾಲಯದ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಯೋಗಾಲಯದಲ್ಲಿ ಸಹಾಯಕರಾಗಿ ದುಡಿಯುತ್ತಿದ್ದ ಚಿರಂಜೀವಿ (28) ಆತ್ಮಹತ್ಯೆಗೆ ಯತ್ನಿಸಿದವರು.
ಗುರುವಾರ ಸಂಜೆ ಈ ಘಟನೆ ನಡೆದಿದೆ. ಶಾಲೆಯ ಪ್ರಾಂಶುಪಾಲ ವಿ.ಪ್ರಸಾದ್ ಅವರು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಹೈಡ್ರೋಕ್ಲೋರಿಕ್ ಆ್ಯಸಿಡ್ ಕುಡಿದಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಾಂಶುಪಾಲರು ಹೆಚ್ಚುವರಿ ಕೆಲಸ ಕೊಡುತ್ತಿದ್ದರು. ಮನೆಯ ಕೆಲಸವನ್ನೂ ಮಾಡಿಸುತ್ತಿದ್ದರು ಎಂದು ದೂರಲಾಗಿದೆ. ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಾಂಶುಪಾಲರು ಮತ್ತು ಇತರ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಥಿತಿ ಗಂಭೀರ: ಗುರುವಾರ ಸಂಜೆ ಚಿರಂಜೀವಿಯವರನ್ನು ಸಿಮ್ಸ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಆಸ್ಪತ್ರೆಗೆ ಬರುವಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಅವರ ಇಬ್ಬರು ಸಹೋದರರು ಬಂದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದುಕೊಂಡು ಹೋಗಿದ್ದಾರೆ’ ಎಂದು ಜಿಲ್ಲಾ ಸರ್ಜನ್ ಎಚ್.ಎಂ.ಕೃಷ್ಣಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.