ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಾಂಗ್ರೆಸ್‌ನಿಂದ ರೈತರಿಗೆ ಮೋಸ: ಕಾಶೆಂಪುರ್‌

Published 16 ಏಪ್ರಿಲ್ 2024, 4:07 IST
Last Updated 16 ಏಪ್ರಿಲ್ 2024, 4:07 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯದ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸುತ್ತಿರುವ ಸರ್ಕಾರ, ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಮೋಸ ಮಾಡಿದೆ ಎಂದು ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶೆಂಪುರ್‌ ಸೋಮವಾರ ದೂರಿದರು. 

ನಗರದಲ್ಲಿ ಬಿಜೆಪಿ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಅವರು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಹೇಳಿಕೊಳ್ಳುವ ಕಾಂಗ್ರೆಸ್‌ನವರು, ರೈತರಿಗಾಗಿ ಯಾಕೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿಲ್ಲ’ ಎಂದು ‍ಪ್ರಶ್ನಿಸಿದರು. 

‘ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಇಂತಹ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡದೆ, ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ ಎಂದು ಹೇಳುತ್ತಿದೆ. ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎದುರಾದ ಬರಗಾಲದ ಸನ್ನಿವೇಶದಲ್ಲಿ ಅವರು ಕೇಂದ್ರದ ಮೊರೆ ಹೋಗದೆ, ರೈತರ ಸಾಲವನ್ನು ಮನ್ನಾ ಮಾಡಿದ್ದರು. ಅದೇ ರೀತಿ ಕಾಂಗ್ರೆಸ್‌ ಸರ್ಕಾರಕ್ಕೂ ಮಾಡಬಹುದಿತ್ತಲ್ಲವೇ’ ಎಂದು ಖಾರವಾಗಿ ಪ್ರಶ್ನಿಸಿದರು.  

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್‌ ಪೂರೈಸಲಾಗುತ್ತಿಲ್ಲ. ನೀರಾವರಿ ಅಭಿವೃದ್ಧಿಗಾಗಿ ಹೊಸ ಯೋಜನೆಗಳನ್ನು  ರೂಪಿಸಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬರುತ್ತಿಲ್ಲ. ಎಸ್‌ಸಿಎಸ್‌ಪಿ– ಡಿಎಸ್‌ಪಿ ಹಣವನ್ನು ದುರ್ಬಳಕೆ ಮಾಡಲಾಗುತ್ತಿದೆ’ ಎಂದು ಕಾಶೆಂಪುರ್‌ ದೂರಿದರು. 

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಯುಷ್ಮಾನ್ ಯೋಜನೆ, ಜಲಜೀವನ್ ಮಿಷನ್ , ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಬಾರಿಯೂ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಚಾಮರಾಜನಗರ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಎಸ್.ಬಾಲರಾಜು ಅವರನ್ನು ಮತದಾರರು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಜೆಡಿಎಸ್ ಮುಖಂಡ ಬಿ.ಪುಟ್ಟಸ್ವಾಮಿ, ರಾಜ್ಯ ವಕ್ತಾರ ಸಿ.ಎನ್.ನಾಗರಾಜು, ಬಿಜೆಪಿ ಮುಖಂಡರಾದ ಸಿ.ಎನ್.ಬಾಲರಾಜು, ಕಾಡಳ್ಳಿ ಶಿವರುದ್ರಸ್ವಾಮಿ ಭಾಗವಹಿಸಿದ್ದರು. 

‘ಪ್ರಸಾದ್ ಮತ ಬಿಜೆಪಿಗೆ’
ಸಂಸದ ವಿ. ಶ್ರೀನಿವಾಸ್‌ಪ್ರಸಾದ್ ಅವರು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್‌ ‘ಈ ಬಾರಿ ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ಅವರ ಆಶಯ. ಅದಕ್ಕಾಗಿ ಬಿಜೆಪಿಗೆ ಮತ ಚಲಾಯಿಸುವುದಾಗಿ ಹೇಳಿದ್ದಾರೆ’ ಎಂದರು.  ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜು ಪ್ರತಿಕ್ರಿಯಿಸಿ ‘ಕ್ಷೇತ್ರದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ಹೆಚ್ಚು ಕೆಲಸ ಮಾಡಬೇಕು ಎಂದು ವಿ.ಶ್ರೀನಿವಾಸ್‌ಪ್ರಸಾದ್ ಅವರು ನನಗೆ ಕಿವಿಮಾತು ಹೇಳಿದ್ದಾರೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT