ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಕ್ಕಾಗಿ ನಾವು: ಸಾವಿರಾರು ಜನರಿಂದ ಏಕ ಕಾಲದಲ್ಲಿ ಮೂರು ಹಾಡುಗಳ ಗಾಯನ

Last Updated 28 ಅಕ್ಟೋಬರ್ 2021, 16:16 IST
ಅಕ್ಷರ ಗಾತ್ರ

ಚಾಮರಾಜನಗರ:ರಾಷ್ಟ್ರಕವಿ ಕುವೆಂಪು ರಚಿಸಿರುವ ‘ಬಾರಿಸು ಕನ್ನಡ ಡಿಂಡಿಮವ...’, ಡಾ.ಕೆ.ಎಸ್.ನಿಸಾರ್‌ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ...’, ಹಂಸಲೇಖ ರಚಿಸಿರುವ ‘ಹುಟ್ಟಿದರೇ.. ಕನ್ನಡ ನಾಡಿನಲ್ಲಿ ಹುಟ್ಟಬೇಕು...’ ಹಾಡುಗಳು ಒಂದರ ಹಿಂದೆ ಒಂದರಂತೆ ಸಾವಿರಕ್ಕೂ ಕಂಠಗಳಿಂದ ಸಾಮೂಹಿಕವಾಗಿ ಹೊರಹೊಮ್ಮುತ್ತಿದ್ದರೆ, ನೆರೆದಿದ್ದವರಿಗೆಲ್ಲ ರೋಮಾಂಚನ!

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನದಡಿ ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಏಕಕಾಲಕ್ಕೆ ನಡೆದ ಸಮೂಹ ಗೀತ ಗಾಯನ ಕಾರ್ಯಕ್ರಮ ಇಂತಹ ಕ್ಷಣಗಳಿಗೆ ಸಾಕ್ಷಿಯಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಸಾರ್ವಜನಿಕರು ಪಾಲ್ಗೊಂಡು ಕನ್ನಡ ನಾಡು, ನುಡಿ, ಸಂಸ್ಕೃತಿ, ನಾಡಿನ ಶ್ರೇಷ್ಠತೆ ಸಾರುವ ಹಾಡುಗಳಿಗೆ ಜೊತೆಯಾಗಿ ದನಿಯಾಗುವ ಮೂಲಕ ಕಾರ್ಯಕ್ರಮವನ್ನು ಅವಿಸ್ಮರಣೀಯವನ್ನಾಗಿಸಿದರು.

ನಾಡಗೀತೆಯೊಂದಿಗೆ ಗಾಯನ ಆರಂಭವಾಯಿತು. ಮೊದಲಿಗೆ ಗೀತೆಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದುಕೊಟ್ಟರು.

ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಕನ್ನಡ ಬಳಕೆ, ಕಲಿಕೆ, ನಾಡು, ನುಡಿ, ಸಂಸ್ಕೃತಿ, ಪರಂಪರೆ ಉಳಿಸಿ ಪೋಷಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.

‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡ ಕಲಿಸುತ್ತೇನೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆ ಉಳಿಸಲು ಕಟಿಬದ್ಧನಾಗಿರಲು ಸಂಕಲ್ಪ ಮಾಡುತ್ತೇನೆ’ ಎಂಬ ಪ್ರತಿಜ್ಞಾ ವಿಧಿಯನ್ನು ನೆರೆದಿದ್ದವರು ಸ್ವೀಕರಿಸಿದರು.

ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭಾ ಅಧ್ಯಕ್ಷೆ ಸಿ.ಎಂ.ಆಶಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಬಿ.ಶಾಂತಮೂರ್ತಿ ಕುಲಗಾಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.‌ಕಾತ್ಯಾಯಿನಿದೇವಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಕೆ.ಗಿರೀಶ್, ಕನ್ನಡ ಪರ ಸಂಘಟನೆಯ ಮುಖಂಡರು, ಪದಾಧಿಕಾರಿಗಳು, ಗಾಯಕರು, ಕಲಾವಿದರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯದ ಉದ್ಯಾನದಲ್ಲಿರುವ ಜೈ ಭುವನೇಶ್ವರಿ ವಿಗ್ರಹಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಇತರೆ ಗಣ್ಯರು, ಕನ್ನಡ ಪರ ಸಂಘಟನೆಗಳ ಮುಖಂಡರು ಮಾಲಾರ್ಪಣೆ ಮಾಡಿದರು.

ಜಿಲ್ಲೆಯಾದ್ಯಂತ ಗಾಯನ: ಸಮೂಹ ಗಾಯನವು ಏಕ ಕಾಲದಲ್ಲಿ ಜಿಲ್ಲೆಯಾದ್ಯಂತ ನಡೆಯಿತು.21 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು, ಪ್ರತಿನಿಧಿಗಳು, ಕನ್ನಡ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ನೌಕರರು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT