ಸೋಮವಾರ, ಜನವರಿ 27, 2020
17 °C

ಚಾಮರಾಜನಗರ: 26ರಂದು ಗಾಳಿಪಟ ಉತ್ಸವಕ್ಕೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದ ಡಾ.ಬಿ.ಆರ್. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಜ. 26ರಂದು ರಾಜ್ಯ ಮಟ್ಟದ ಗಾಳಿಪಟ ಉತ್ಸವ ಆಯೋಜಿಸಲು ನಿರ್ಧರಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

‘ಪರಿಷತ್ತು ರಾಜ್ಯ ಮಟ್ಟದ ಗಾಳಿಪಟ ಉತ್ಸವವನ್ನು ಈ ಬಾರಿ ಚಾಮರಾಜನಗರ ಜಿಲ್ಲೆಯಲ್ಲಿ ಆಯೋಜನೆ ಮಾಡಲು ನಿರ್ಧರಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಗಾಳಿಪಟ ಉತ್ಸವವನ್ನು ಸುವ್ಯವಸ್ಥಿತ ಹಾಗೂ ಅತ್ಯಾಕರ್ಷಕವಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಾವೇರಿ ಅವರು ಸೂಚಿಸಿದರು.

‘ಗಾಳಿಪಟ ಉತ್ಸವದ ರೂಪುರೇಷೆಗೆ ತಕ್ಕಂತೆ ಉತ್ಸವ ನಡೆಯುವ ಸ್ಥಳದಲ್ಲಿ ಸ್ಪರ್ಧಾಳುಗಳು ಹಾಗೂ ಪ್ರೇಕ್ಷಕರಿಗೆ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು. ಜತೆಗೆ ಊಟೋಪಚಾರ, ಕುಡಿಯುವ ನೀರು ಪೂರೈಕೆ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕು’ ಎಂದರು.

‘ಗಾಳಿಪಟ ಹಾರಿಸುವ ಜಾಗವನ್ನು ಗುರುತಿಸಿ, ಉತ್ಸವಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ನಿಗಾ ವಹಿಸಬೇಕು. ರಾಜ್ಯ ಮಟ್ಟದ ಗಾಳಿಪಟ ಉತ್ಸವ ಆಗಿರುವುದರಿಂದ ವಿವಿಧ ಸ್ಥಳಗಳಿಂದ ಬರುವ ಸ್ಪರ್ಧಾಳುಗಳು, ಆಹ್ವಾನಿತರಿಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು’ ಎಂದು ನಿರ್ದೇಶನ ನೀಡಿದರು.

‘ಗಾಳಿಪಟ ಉತ್ಸವದಲ್ಲಿ ಜಿಲ್ಲೆಯ ಸ್ಪರ್ಧಾಳುಗಳು ಹೆಚ್ಚು ಸಕ್ರಿಯವಾಗಿ ಭಾಗವಹಿಸುವಂತೆ ಮಾಡಲು ಉತ್ತಮ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರ ಹಂಚುವಿಕೆ ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಿ ಹೆಚ್ಚಿನ ಜನರನ್ನು ಆಕರ್ಷಿಸುವ ಪ್ರಯತ್ನ ಆಗಬೇಕು’ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಬಿ. ಹದ್ದಣ್ಣವರ್, ಜಾನಪದ ಲೋಕದ ಆಡಳಿತಾಧಿಕಾರಿ ಡಾ. ಕುರುವ ಬಸವರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಜನಾರ್ಧನ್, ತಹಶೀಲ್ದಾರ್ ಜೆ. ಮಹೇಶ್, ಡಿಎಚ್‌ಒ ಡಾ.ಎಂ.ಸಿ. ರವಿ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಬಸವರಾಜು, ಸಂಚಾಲಕ ಸಿ.ಎಂ. ನರಸಿಂಹಮೂರ್ತಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು