ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ತಾಲ್ಲೂಕಿನ ಮಧುವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣದ ಸಮಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಡದೆ ಕರ್ತವ್ಯಲೋಪ ಎಸಗಿದ ಆರೋಪ ಎದುರಿಸುತ್ತಿದ್ದ ಪಿಡಿಒ ಪುಷ್ಪಲತಾ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪೂವಿತಾ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಪಿಡಿಒ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದವು. ಅಲ್ಲದೇ ಶುಕ್ರವಾರ ಸಂಜೆಯಿಂದ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಅಮಾನತಿಗೆ ಪಟ್ಟು ಹಿಡಿದಿದ್ದರು.
ಪಿಡಿಒ ಪುಷ್ಪಲತಾ ಅವರು ಶುಕ್ರವಾರ ಸಂಜೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿಗೆ ಬಂದಿದ್ದಾರೆ ಎಂದು ತಿಳಿದು, ಅಲ್ಲಿಗೆ ಬಂದಿದ್ದ ಗ್ರಾಮಸ್ಥರು ಹಾಗೂ ಸಂಘಟನೆಗಳ ಮುಖಂಡರು ಪುಷ್ಪಲತಾ ಅವರಿಗೆ ದಿಗ್ಬಂಧನವನ್ನೂ ಹಾಕಿದ್ದರು.
ಇಒ ಕಚೇರಿಯಲ್ಲಿರುವ ಪಿಡಿಒ ಪುಷ್ಪಲತಾ ಹೊರಗೆ ಬರಲಾರದೇ ಕೊಠಡಿಯಲ್ಲೇ ಉಳಿಯಬೇಕಾಯಿತು. ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ 9.30ರವರೆಗೂ ಪ್ರತಿಭಟನೆ ಮುಂದುವರಿದಿತ್ತು.
ಅಮಾನತು ಆದೇಶ ಬಂದ ನಂತರ ಪ್ರತಿಭಟನೆ ಕೈಬಿಟ್ಟರು.
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜ್, ಮಧುವನಹಳ್ಳಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆಂಪರಾಜು, ಬಿಎಸ್ ಪಿಯ ಕಮಲ್, ದರ್ಶನ್ ಸೋಮಶೇಖರ್, ಚಂದ್ರು, ಪವನ್, ಮಹದೇವ್, ಆನಂದ್, ಹಾಗೂ ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.