ಕೊಳ್ಳೇಗಾಲ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಶುಕ್ರವಾರ ಪ್ರವಾಹಪೀಡಿತ ದಾಸನಪುರ ಗ್ರಾಮವನ್ನು ವೀಕ್ಷಣೆ ಮಾಡಿ ಮಾತನಾಡಿ ‘ಗ್ರಾಮಗಳಲ್ಲಿ ಹಾಗೂ ಕೃಷಿ ಭೂಮಿಯಲ್ಲಿ ನೀರಿನ ಮಟ್ಟ ಕಡಿಮೆಯಾದ ಬಳಿಕ ಎಷ್ಟು ಪ್ರಮಾಣದ ಬೆಳೆ ನಷ್ಟವಾಗಿದೆ, ಎಷ್ಟು ಮನೆಗಳಿಗೆ ಹಾನಿಯಾಗಿದೆ ಎಂಬ ವರದಿಯನ್ನು ಜಿಲ್ಲಾಧಿಕಾರಿ ಮೂಲಕ ಪಡೆದು ಸರ್ಕಾರದಿಂದ ಪರಿಹಾರ ವಿತರಿಸಲಾಗುವುದು ಎಂದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕದಲ್ಲಿ ವಾಡಿಕೆಯಷ್ಟು ಮಳೆ ಆಗಿಲ್ಲ. ರಾಜ್ಯದಾದ್ಯಂತ 118 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು 18 ಸಾವಿರ ಜನರು ವಾಸ್ತವ್ಯ ಮಾಡಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಹಾಗೂ ಮುತುವರ್ಜಿಯಿಂದ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ.
ಸರ್ಕಾರದ ಬಳಿ ಹಣಕ್ಕೆ ಕೊರತೆ ಇಲ್ಲ, ಜಿಲ್ಲಾಧಿಕಾರಿ ಖಾತೆಗೆ ಹಣ ಹಾಕಿದ್ದು ತುರ್ತು ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಸೂಚಿಸಲಾಗಿದೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಮನವಿಯಂತೆ 8 ಕಿ.ಮೀ ಉದ್ದದ ತಡೆಗೋಡೆ ನಿರ್ಮಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು. ಗ್ರಾಮಸ್ಥರು ಭಯಪಡುವ ಅಗತ್ಯವಿಲ್ಲ ಎಂದರು.
ಈ ಸಂದರ್ಭ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಹನೂರು ಶಾಸಕ ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಎಸ್‌ಪಿ ಡಾ.ಬಿ.ಟಿ.ಕವಿತಾ, ಉಪ ವಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಮಂಜುಳಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.