ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆಗಳ ಈಡೇರಿಕೆಗೆ ನೌಕರರ ಆಗ್ರಹ

ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಪ್ರತಿಭಟನೆ
Last Updated 24 ಜನವರಿ 2023, 12:39 IST
ಅಕ್ಷರ ಗಾತ್ರ

ಚಾಮರಾಜನಗರ: ಮೂಲ ವೇತನ ಹೆಚ್ಚಳ, ವೈದ್ಯಕೀಯ ಸೌಲಭ್ಯ ಕಲ್ಪಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆರು ಕಾರ್ಮಿಕ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಧರಣಿ ನಡೆಸಿದ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನ್ಯಾಯಕ್ಕಾಗಿ ಆಗ್ರಹಿಸಿದರು.

‘ಮೂಲವೇತನಕ್ಕೆ ಬಿಡಿಎ ವಿಲೀನಗೊಳಿಸಿ ಪರಿಷ್ಕೃತ ಮೂಲ ವೇತನದ ಶೇ 25ರಷ್ಟನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿ ಸಿದ್ಧ ಪಡಿಸಬೇಕು. ಇನ್ಕ್ರಿಮೆಂಟ್‌ ದರ ಪರಿಷ್ಕೃತ ಮೂಲವೇತನದ ಶೇ 3 ಇರಬೇಕು. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಇದೇ ರೀತಿ ಸಿದ್ಧಪಡಿಸಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಗಳಿಗೊಮ್ಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಚಾಲಕರು, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗೂ ಮತ್ತು ಇತರ ಎಲ್ಲ ನೌಕರರಿಗೂ ಹಾಲಿ ಇರುವ ಬಾಟಾ, ಮಾಸಿಕ/ದೈನಂದಿನ ಭತ್ಯೆಗಳನ್ನು ಐದು ಪಟ್ಟು ಹೆಚ್ಚಿಸಬೇಕು. ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್ ಕೋಟ್ ಇತ್ಯಾದಿಗಳಿಗೆ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು. ಎಲ್ಲ ನಿರ್ವಾಹಕರಿಗೂ ಕ್ಯಾಷಿಯರ್‌ಗಳಿಗೆ ಸಮಾನವಾದ ನಗದು ಭತ್ಯೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಇಎಸ್‌ಐ ಮಾದರಿಯಲ್ಲ ಆಡಳಿತ ವರ್ಗದವರಿಂದ ನೌಕರರ ಮೂಲ ವೇತನ ಶೇ 3.5 ಹಾಗೂ ಕಾರ್ಮಿಕರಿಂದ ಶೇ 0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಈ ಮೂಲಕ ಸಾರಿಗೆ ನೌಕರರಿಗೆ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡವಂತ ಯೋಜನೆ ರೂಪಿಸಬೇಕು. ಈ ಸೌಲಭ್ಯವನ್ನು ನಿವೃತ್ತ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗೂ ನೀಡಬೇಕು. ಎಲ್ಲ ನೌಕರರಿಗೂ ಪ್ರತಿ ತಿಂಗಳು ಹೊರ ರೋಗಿ ಚಿಕಿತ್ಸೆ ವೆಚ್ಚಕ್ಕಾಗಿ ₹2000 ನೀಡಬೇಕು. ಉಚಿತ ಔಷಧ ಪೂರೈಸಬೇಕು. ಮುಷ್ಕರ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೆ ಮರುನೇಮಕ ಮಾಡಬೇಕು’ ಎಂದು ಒತ್ತಾಯಿಸಿದರು.

‘ಆಡಳಿತ ವರ್ಗ ಏಕಪಕ್ಷೀಯ ನಿರ್ಧಾರಗಳ ಮೂಲಕ ಕಾರ್ಮಿಕ ಸೇವಾ ಪರಿಸ್ಥಿತಿಗಳ ಬದಲಾವಣೆ ಜಾರಿಗೊಳಿಸುವುದನ್ನು ಬಿಡಬೇಕು. ಎಲ್ಲ ನೌಕರರಿಗೂ ಪಾಳಿ ವ್ಯವಸ್ಥೆ ಜಾರಿಗೆ ತರಬೇಕು. ಮಹಿಳಾ ನೌಕರರಿಗೆ ಘಟಕ, ಬಸ್‌ ನಿಲ್ದಾಣ, ಟರ್ಮಿನಲ್‌ಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ನಾಲ್ಕೂ ನಿಗಮಗಳಲ್ಲಿರುವ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ನೌಕರರು ಆಗ್ರಹಿಸಿದರು.

ನಂತರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಗೆ ತೆರಳಿ ನಿಯಂತ್ರಣಾಧಿಕಾರಿ ಶ್ರೀನಿವಾಸ ಅವರ ಮೂಲಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಜಂಟಿ ಕ್ರಿಯಾ ಸಮಿತಿ ಚಾಮರಾಜನಗರ ವಿಭಾಗದ ಅಧ್ಯಕ್ಷ ಕೆ.ಆರ್.ನಾಗರಾಜು, ಪ್ರಧಾನ ಕಾರ್ಯದರ್ಶಿ ರಾಜೇಶ್ ಮಡಹಳ್ಳಿ, ಖಜಾಂಚಿ ಬಸವರಾಜೇಗೌಡ, ಎಸ್‌ಸಿ, ಎಸ್‌ಟಿ ವಿಭಾಗದ ಗೌರವ ಅಧ್ಯಕ್ಷ ರಂಗಸ್ವಾಮಿ, ಅಧ್ಯಕ್ಷ ಎಂ.ಸಿ.ಸಿದ್ದರಾಜು, ಉಪಾಧ್ಯಕ್ಷ ಸಿದ್ದಲಿಂಗಸ್ವಾಮಿ, ಮಲ್ಲೇಶ್, ರಮೇಶ್ ಮಾದರ್, ರಘು ಮೂಕಳ್ಳಿ, ಮಹಾಂತೇಶ್ ಹಳೆಬರ, ರಾಜೇಂದ್ರಕುಮಾರ್, ಎ.ಜೆ.ನಂಜುಂಡಸ್ವಾಮಿ, ಎಚ್.ಎಸ್.ಶಿವಕುಮಾರ್, ನಾಗಮಲ್ಲೇಶ್, ಜಗದೀಶ್, ನಾಗವಳ್ಳಿ ಮಲ್ಲೇಶ್ ಇದ್ದರು.

ಬಸ್‌ಗಳ ಸಂಚಾರ ಎಂದಿನಂತೆ: ನೌಕರರ ಪ್ರತಿಭಟನೆ ಸಾಂಕೇತಿಕವಾಗಿದ್ದುದರಿಂದ ಬಸ್‌ಗಳ ಓಡಾಟಕ್ಕೆ ತೊಂದರೆಯಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT